ಭಾರಿ ಮಳೆ: ಉಡುಪಿ, ಮಂಗಳೂರಿನಲ್ಲಿ ಇಂದು, ನಾಳೆ ಶಾಲಾ ಕಾಲೇಜುಗಳಿಗೆ ರಜೆ; ಬೆಂಗಳೂರಿನಲ್ಲಿ ಭಾರೀ ಮಳೆ ಸಾಧ್ಯತೆ

ಉಡುಪಿ: ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡ ಪರಿಣಾಮ ಉಡುಪಿ ಮತ್ತು ಮಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಈ ಎರಡು ಜಿಲ್ಲೆಗಳಲ್ಲಿ ಶುಕ್ರವಾರ ಮತ್ತು ಶನಿವಾರ ಎರಡು ದಿನಗಳ ಕಾಲ ಶಾಲಾ ಕಾಲೇಜುಗಶಳಿಗೆ ರಜೆ ಘೋಷಣೆ ಮಾಡಲಾಗಿದೆ.

ಇತ್ತ ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿಯೂ ಬೆಳಗ್ಗಿನಿಂದ ಮೋಡ ಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉಡುಪಿ ಮತ್ತು ಮಂಗಳೂರಿನಲ್ಲಿ ಶುಕ್ರವಾರ ಬೆಳಗಿನ ಜಾವದಿಂದಲೇ ಸತತ ಧಾರಾಕಾರ ಮಳೆಯಾಗುತ್ತಿದ್ದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಮುನ್ನೆಚ್ಚರಿಕಾ ಕ್ರಮವಾಗಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಮಂಗಳೂರಿನಲ್ಲಿಯೂ ಇಂದು, ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಪ್ರಮುಖವಾಗಿ ಉಡುಪಿ, ಕುಂದಾಪುರ, ಕಾರ್ಕಳ, ಬೈಂದೂರು, ಕಾಪುವಿನಲ್ಲಿ ಬಿರುಸಿನ ಮಳೆಯಾದ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದ್ದು, ನಾಡದೋಣಿ ಮೀನುಗಾರರಿಗೆ ಜಿಲ್ಲಾಡಳಿತ ಈಗಾಗಲೇ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ಸಂದೇಶ ರವಾನಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಭಾರೀ ಮಳೆ ಮಳೆಯಾಗುತ್ತಿದ್ದು, ಸುಳ್ಯ, ಪುತ್ತೂರು, ಬೆಳ್ತಂಗಡಿ ತಾಲೂಕಿನಲ್ಲಿ ನಿನ್ನೆ ಸಂಜೆಯಿಂದ ನಿರಂತರ ಮಳೆ ಸುರಿಯುತ್ತಿದೆ. ಮಳೆಯಿಂದ ನದಿಗಳು ತುಂಬಿ ಹರಿಯುತ್ತಿವೆ.

ಇದಲ್ಲದೆ ಚಿಕ್ಕಮಗಳೂರು ನಗರ ಸೇರಿದಂತೆ ಮಲೆನಾಡು ಭಾಗ, ಹಾಸನ, ವಿಜಯಪುರ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಮೂಡಿಗೆರೆ ತಾಲೂಕುಗಳಲ್ಲೂ ಭಾರಿ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

 

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ