ನಗರದಲ್ಲಿ ಹೆಚ್ಚುತ್ತಿರುವ ಖಾಸಗಿ ಬಸ್‍ಗಳ ನಿಯಂತ್ರಣಕ್ಕೆ ಹೊರವಲಯದಲ್ಲಿ ನಿಲ್ದಾಣಗಳನ್ನು ಗುರುತಿಸಲು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದು, ಶೀಘ್ರದಲ್ಲೇ ಮಾತುಕತೆ ನಡೆಸಲಾಗುವುದು ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ

 

ಬೆಂಗಳೂರು, ಜೂ.12-ನಗರದಲ್ಲಿ ಹೆಚ್ಚುತ್ತಿರುವ ಖಾಸಗಿ ಬಸ್‍ಗಳ ನಿಯಂತ್ರಣಕ್ಕೆ ಹೊರವಲಯದಲ್ಲಿ ನಿಲ್ದಾಣಗಳನ್ನು ಗುರುತಿಸಲು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದು, ಶೀಘ್ರದಲ್ಲೇ ಮಾತುಕತೆ ನಡೆಸಲಾಗುವುದು ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದ್ದಾರೆ.
ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಕೆಲವು ಜನನಿಬಿಡ ಪ್ರದೇಶಗಳಲ್ಲಿ ಖಾಸಗಿ ಬಸ್‍ಗಳನ್ನು ನಿಲ್ಲಿಸಿಕೊಳ್ಳುತ್ತಾರೆ. ಇದರಿಂದ ಸಾರ್ವಜನಿಕರಿಗೂ, ಇತರ ವಾಹನ ಸವಾರರಿಗೂ ತೊಂದರೆಯಾಗುತ್ತದೆ. ಪ್ರಯಾಣಿಕರನ್ನು ಕೇಂದ್ರ ಭಾಗದಿಂದಲೇ ಕರೆದೊಯ್ಯುವುದರಿಂದ ದಟ್ಟಣೆ ಹೆಚ್ಚುತ್ತದೆ. ಇದನ್ನು ಪರಿಹರಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

ನಿಯಮ ಮೀರಿ (ಪರ್ಮಿಟ್) ಸಂಚರಿಸುವ ವಾಹನಗಳ ಬಗ್ಗೆಯೂ ನಿಗಾ ಇಡಲಾಗುವುದು ಮತ್ತು ಪರಿಸರಕ್ಕೆ ಹಾನಿ ಉಂಟು ಮಾಡುವುದರ ವಿರುದ್ದವೂ ಕಠಿಣ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಈಗಾಗಲೇ ತಿಳಿಸಿದ್ದೇನೆ. ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‍ನಲ್ಲಿ 45 ಲಕ್ಷಕ್ಕೂ ಹೆಚ್ಚು ಸಾರ್ವಜನಿಕರು ಪ್ರತಿದಿನ ಪ್ರಯಾಣಿಸುತ್ತಿದ್ದಾರೆ. ಅದನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸಮೂಹ ಸಾರಿಗೆಯನ್ನು ಬಳಸುವುದರಿಂದ ಪರಿಸರ ಕಾಪಾಡಬಹುದು. ಇದಕ್ಕಾಗಿ ಹೊಸದಾಗಿ ನಾಲ್ಕು ಚಕ್ರಗಳ ವಾಹನ ಖರೀದಿಸುವವರು ತಮ್ಮ ಮನೆಯ ಆವರಣದಲ್ಲಿ ಪಾರ್ಕಿಂಗ್ ವ್ಯವಸ್ಥೆ ಇದೆಯೇ ಎಂಬ ಬಗ್ಗೆ ತಿಳಿದು ನಂತರ ವಾಹನ ಖರೀದಿಸಬೇಕು ಎಂದು ಸಲಹೆ ನೀಡಿದರು.
ಸಾರ್ವಜನಿಕರಿಗೆ ಉತ್ತಮ ಸೇವೆ ಕಲ್ಪಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ನಿನ್ನೆ ಅಧಿಕಾರಿಗಳ ಸಭೆಯಲ್ಲಿ ಪೂರ್ವಭಾವಿ ಚರ್ಚೆ ನಡೆದಿದೆ ಎಂದು ಅವರು ತಿಳಿಸಿದರು.
ಬಸ್‍ಗಳ ವಿತರಣೆಗೂ ಈಗಾಗಲೇ ಮುಖ್ಯಮಂತ್ರಿ ಕುಮಾರಸ್ವಾಮಿಯವರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.
ನಂತರ ಸಚಿವರು ವಿಜಯನಗರದಿಂದ ಮೆಟ್ರೋದಲ್ಲಿ ವಿಧಾನಸೌಧಕ್ಕೆ ಪ್ರಯಾಣ ಬೆಳೆಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ