ನಾಳೆ ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯ ಫಲಿತಾಂಶ

 

ಬೆಂಗಳೂರು, ಜೂ.12-ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯ ಫಲಿತಾಂಶ ಹೊರಬೀಳಲಿದೆ.
ಇದೇ 11 ರಂದು ನಡೆದ ಚುನಾವಣೆ ಬಹುತೇಕ ಶಾಂತಿಯುತವಾಗಿ ನಡೆದಿದ್ದು, ನಾಳೆ ಬೆಳಗ್ಗೆ 8 ಗಂಟೆಗೆ ಎನ್‍ಎಂಕೆಆರ್‍ವಿ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ.

ಬಿಜೆಪಿ ಅಭ್ಯರ್ಥಿ ವಿಜಯ್‍ಕುಮಾರ್ ಅವರ ಅಕಾಲಿಕ ನಿಧನದಿಂದ ಚುನಾವಣೆ ಮುಂದೂಡಲಾಗಿತ್ತು. ಈ ಹಿನ್ನೆಲೆಯಲ್ಲಿ ಇದೇ 11 ರಂದು ಮತದಾನ ನಡೆದಿತ್ತು. ವಿಜಯ್‍ಕುಮಾರ್ ಸಹೋದರ ಬಿ.ಎನ್.ಪ್ರಹ್ಲಾದ್ ಬಿಜೆಪಿಯಿಂದ ಸ್ಪರ್ಧಿಸಿದ್ದರೆ, ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರ ಪುತ್ರಿ ಸೌಮ್ಯರೆಡ್ಡಿ ಕಾಂಗ್ರೆಸ್‍ನಿಂದ ಕಣಕ್ಕಿಳಿದಿದ್ದರು. ಪಕ್ಷೇತರ ಅಭ್ಯರ್ಥಿ ರವಿಕೃಷ್ಣಾರೆಡ್ಡಿ ಸೇರಿ ಒಟ್ಟು 19 ಅಭ್ಯರ್ಥಿಗಳು ಕಣದಲ್ಲಿದ್ದರು.

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ಚುನಾವಣೆಯಲ್ಲಿ ಕಾಂಗ್ರೆಸ್‍ನ ಮುನಿರತ್ನ ಜಯಗಳಿಸಿದ ಹಿನ್ನೆಲೆಯಲ್ಲಿ ಜಯನಗರವನ್ನು ಪ್ರತಿಷ್ಠೆಯ ಕಣವಾಗಿ ಪರಿಗಣಿಸಿರುವ ಬಿಜೆಪಿ ಶತಾಯಗತಾಯ ತಮ್ಮ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಬೇಕೆಂದು ಪಣತೊಟ್ಟಿದೆ.

ತಮ್ಮ ತಮ್ಮ ಸಂಖ್ಯಾಬಲವನ್ನು ಹೆಚ್ಚಿಸಿಕೊಳ್ಳಲು ಮೂರು ಪಕ್ಷಗಳು ತುರ್ತು ಸಭೆ ನಡೆಸಿ ಈ ಎರಡೂ ಕ್ಷೇತ್ರಗಳನ್ನು ಗಂಭೀರವಾಗಿ ಪರಿಗಣಿಸಿದ್ದವು.
ನಾಳೆ ಜಯನಗರ ಚುನಾವಣೆಯ ಫಲಿತಾಂಶ ಹೊರಬೀಳಲಿದ್ದು, ವಿಜಯಲಕ್ಷ್ಮಿ ಯಾರಿಗೆ ಒಲಿಯಲಿದ್ದಾಳೆ ಎಂಬುದನ್ನು ಕಾದು ನೋಡಬೇಕಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ