ಹುಬ್ಬಳ್ಳಿ, ಜೂ, 12-ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯಾರನ್ನು ನೇಮಕ ಮಾಡಬೇಕು ಎಂಬುದನ್ನು ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಈ ಬಗ್ಗೆ ನಾನೇನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ ಅಧ್ಯಕ್ಷ ಹುದ್ದೆ ನೇಮಕದಲ್ಲಿ ಬಣಗಳ ಭಿನ್ನಾಭಿಪ್ರಾಯವಿದೆ ಎಂಬುದು ಆಂತರಿಕ ವಿಷಯ. ಈ ಬಗ್ಗೆ ನಾನು ಏನೂ ಹೇಳುವುದಿಲ್ಲ. ಹೈಕಮಾಂಡ್ ಅಧ್ಯಕ್ಷರನ್ನು ನೇಮಕ ಮಾಡುತ್ತದೆ ಎಂದು ಹೇಳಿದರು.
ನೀರಾವರಿ ಇಲಾಖೆಯಲ್ಲಿ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ಹಸ್ತಕ್ಷೇಪ ವಿಚಾರದ ಬಗ್ಗೆ ನನಗೆ ಮಾಹಿತಿಯಿಲ್ಲ. ಈ ಬಗ್ಗೆ ನಾನು ಏನನ್ನೂ ಹೇಳಲಾರೆ ಎಂದು ತಿಳಿಸಿದರು.
ಕಳೆದ ಹಲವಾರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಆಸ್ತಿಪಾಸ್ತಿಗೆ ಹಾನಿ ಉಂಟಾಗಿದೆ. ಮಳೆ ಹಾನಿ ಕುರಿತಂತೆ ಪರಿಹಾರದ ಕ್ರಮಕೈಗೊಳ್ಳಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಒಟ್ಟಾರೆ ಸಿಡಿಲು ಬಡಿದು ಸೇರಿದಂತೆ ಮಳೆ ಆವಾಂತರದಿಂದ 104 ಜನ ಮೃತಪಟ್ಟಿದ್ದು, ಬಹುತೇಕ ಮೃತರ ಕುಟುಂಬಕ್ಕೆ ಪರಿಹಾರ ನೀಡಲಾಗಿದೆ.
ಧಾರವಾಡ ಜಿಲ್ಲೆಯಲ್ಲಿ ಮತ್ತೊಬ್ಬ ಮೃತರ ಸಂಬಂಧಿಕರಿಗೆ ಪರಿಹಾರ ನೀಡಬೇಕೆಂದು ಜಿಲ್ಲಾಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಹೇಳಿದರು.
ಇದೇ ಮೊದಲ ಬಾರಿಗೆ ಬೆಳಗಾವಿ ವಿಭಾಗದ 7 ಜಿಲ್ಲೆಯ ಅಧಿಕಾರಿಗಳ ಜೊತೆ ಸಭೆ ನಡೆಸಲಾಗಿದೆ. ಸಂಭಾವ್ಯ ಅನಾಹುತಗಳನ್ನು ತಪ್ಪಿಸಲು ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲು ಸೂಚಿಸಲಾಗಿದೆ ಎಂದು ಹೇಳಿದರು.