ರೈತರ ಕೃಷಿ ಸಾಲ ಮನ್ನಾ: ನೂತನ ಬಜೆಟ್‍ನಲ್ಲಿ ಪ್ರಕಟಿಸುವ ಸಾಧ್ಯತೆ

 

ಬೆಂಗಳೂರು, ಜೂ.14- ಮೈತ್ರಿ ಸರ್ಕಾರದ ಬಹು ನಿರೀಕ್ಷಿತ ಯೋಜನೆಯಾದ ರೈತರ ಸಾಲ ಮನ್ನಾ ಬಜೆಟ್‍ನಲ್ಲಿ ಪ್ರಕಟಗೊಳ್ಳುವ ಸಾಧ್ಯತೆ ಇದೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೃಷಿ ಸಚಿವ ಎನ್.ಎಚ್.ಶಿವಶಂಕರರೆಡ್ಡಿ, ರೈತರ ಕೃಷಿ ಸಾಲ ಮನ್ನಾಕ್ಕೆ ಈಗಾಗಲೇ ರೂಪುರೇಷೆಗಳನ್ನು ಸಿದ್ದಪಡಿಸಲಾಗುತ್ತಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಂಡಿಸುವ ನೂತನ ಬಜೆಟ್‍ನಲ್ಲಿ ಪ್ರಕಟಿಸುವ ಸಾಧ್ಯತೆ ಇದೆ ಎಂದರು.
ರಾಜ್ಯದಲ್ಲಿ ಕಳೆದ ಮೂರು ತಿಂಗಳಿಂದೀಚೆಗೆ 69 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಅದರಲ್ಲಿ ಕೃಷಿ ಸಾಲಕ್ಕಾಗಿಯೇ ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಲು ರಾಜ್ಯ ಸರ್ಕಾರ ನೀಡಲಿದೆ.

ಇದರಲ್ಲಿ ಧಾರವಾಡ 10ರೈತರು, ಬೆಳಗಾವಿಯಲ್ಲಿ 9, ಹಾವೇರಿಯಲ್ಲಿ 7 ರೈತರು ಸೇರಿ ಒಟ್ಟು 69 ಆತ್ಮಹತ್ಯೆ ಪ್ರಕರಣಗಳು ವರದಿಯಾಗಿವೆ. ಕೆಲವು ಪ್ರಕರಣಗಳಲ್ಲಿ ಸ್ವಾಭಾವಿಕ ಸಾವನ್ನೂ ಆತ್ಮಹತ್ಯೆ ಎಂದು ಬಿಂಬಿಸಲಾಗಿದೆ. ಅದನ್ನು ತನಿಖೆ ಮಾಡಲು ಉಪವಿಭಾಗಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಸಮಿತಿ ತನಿಖೆ ನಡೆಸಿ ವರದಿ ನೀಡಿದ ನಂತರ ಅರ್ಹ ಸೂಕ್ತ ಪ್ರಕರಣಗಳಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.

ರಾಜ್ಯದಲ್ಲಿ ಮಳೆ ಉತ್ತಮವಾಗಿ ಸುರಿಯುತ್ತಿದ್ದು, ಬಿತ್ತನೆ ಬೀಜ, ರಸಗೊಬ್ಬರಕ್ಕೆ ಯಾವುದೇ ತೊಂದರೆ ಇಲ್ಲ. ಡಿಎಪಿ ಗೊಬ್ಬರಕ್ಕೆ ಹೆಚ್ಚು ಬೇಡಿಕೆ ಇದೆ. ಅಗತ್ಯದಷ್ಟು ಗೊಬ್ಬರ ಪೂರೈಕೆಗೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಸಲಾಗಿದೆ ಎಂದರು.
ಮುಂಗಾರು ಹಂಗಾಮಿಗೆ ಒಟ್ಟು 21.87 ಲಕ್ಷ ಟನ್ ಗೊಬ್ಬರದ ಬೇಡಿಕೆ ಇದ್ದು, ಈವರೆಗೂ 7.31 ಟನ್ ಸರಬರಾಜಾಗಿದೆ. 6.21 ಲಕ್ಷ ಟನ್ ದಾಸ್ತಾನಿದೆ. 8.60 ಲಕ್ಷ ಕ್ವಿಂಟಾಲ್ ಬಿತ್ತನೆ ಬೀಜಕ್ಕೆ ಬೇಡಿಕೆ ಇದೆ. ಈವರೆಗೂ 1.39 ಲಕ್ಷ ಕ್ವಿಂಟಾಲ್ ಬಿತ್ತನೆ ಬೀಜ ಪೂರೈಕೆ ಮಾಡಲಾಗಿದೆ. ದಾವಣಗೆರೆ, ತುಮಕೂರು, ಬೆಳಗಾವಿ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಮುಂಗಾರು ಮಳೆಯಿಂದ 1686 ಹೆಕ್ಟೇರ್ ಬೆಳೆ ಹಾನಿಯಾಗಿದೆ. 74.69 ಲಕ್ಷ ಹೆಕ್ಟೇರ್‍ನಲ್ಲಿ ಬಿತ್ತನೆ ಗುರಿಯಿದ್ದು, 90.44 ಲಕ್ಷ ಹೆಕ್ಟೇರ್‍ನಲ್ಲಿ ಬಿತ್ತನೆಯಾಗಿದೆ ಎಂದು ವಿವರಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ