ಆರೋಗ್ಯ ಕರ್ನಾಟಕ ಯೋಜನೆ ಜಾರಿ ಕುರಿತು ಮುಂದಿನ ಸಭೆಯಲ್ಲಿ ಚರ್ಚಿಸಿ ನಿರ್ಧಾರ

 

ಬೆಂಗಳೂರು,ಜೂ.15- ರಾಜ್ಯದಲ್ಲಿ ಆರೋಗ್ಯ ಕರ್ನಾಟಕ ಯೋಜನೆ ಜಾರಿ ಮಾಡುವ ಸಂಬಂಧ ಮುಂದಿನ ಸಭೆಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರವನ್ನು ಪ್ರಕಟಿಸುವುದಾಗಿ ಉನ್ನತ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಇಂದು ನಗರದ ವಿಕ್ಟೋರಿಯಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ತಪಾಸಣೆ ನಡೆಸಿದ ಬಳಿಕ ಮಾತನಾಡಿದ ಅವರು, ಈ ಸಂಬಂಧ ಆರೋಗ್ಯ ಇಲಾಖೆ ಜೊತೆ ಜಂಟಿ ಸಭೆ ನಡೆಸಿ ಯೋಜನೆ ಜಾರಿ ಮಾಡಲು ಸರ್ಕಾರ ಸಿದ್ಧವಿದೆ ಎಂದು ತಿಳಿಸಿದರು.
ಮುಂದಿನ ವಾರ ಉನ್ನತ ಶಿಕ್ಷಣ , ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಜಂಟಿ ಸಭೆ ನಡೆಸಲಾಗುವುದು. ರಾಜ್ಯದಲ್ಲಿ ಆರೋಗ್ಯ ಯೋಜನೆ ಮಾಡಲು ಸರ್ಕಾರ ಬದ್ಧವಾಗಿದೆ. ಈ ಬಗ್ಗೆ ಯಾರಿಗೂ ಯಾವ ರೀತಿಯ ಅನುಮಾನ ಬೇಡ ಎಂದು ಸ್ಪಷ್ಟಪಡಿಸಿದರು.

ಹಿಂದೆ ನಮ್ಮ ಸರ್ಕಾರದಲ್ಲಿ ಅನೇಕ ಆರೋಗ್ಯ ಯೋಜನೆಗಳನ್ನು ಜಾರಿ ಮಾಡಿದ್ದೆವು. ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಸಿಗಬೇಕೆಂಬುದು ಸರ್ಕಾರದ ಆಶಯ. ಹಿಂದೆ ಇದ್ದ ಆರೋಗ್ಯ ಸೇವೆಯನ್ನು ಮುಂದುವರೆಸುವ ಬಗ್ಗೆ ಅಧಿಕಾರಿಗಳ ಜೊತೆ ಸಭೆ ನಡೆಸುತ್ತೇನೆ ಎಂದರು.
ಆಸ್ಪತ್ರೆಗಳಲ್ಲಿ ಹೆಚ್ಚುತ್ತಿರುವ ಭ್ರಷ್ಟಾಚಾರವನ್ನು ಕೊನೆಗಾಣಿಸಲು ಪ್ರತಿಯೊಂದು ಆಸ್ಪತ್ರೆಗಳಲ್ಲಿ ನೂತನ ವ್ಯವಸ್ಥೆಯನ್ನು ಜಾರಿ ಮಾಡಲಾಗುವುದು. ರೋಗಿಗಳನ್ನು ಕಿತ್ತು ತಿನ್ನುತ್ತಿರುವ ಭ್ರಷ್ಟಾಚಾರವನ್ನು ಕೊನೆಗಾಣಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
ಸೆಂಟ್ರಲೈಸ್ಡ್ ವ್ಯವಸ್ಥೆ:

ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲ ಸೇವೆಗಳು ಒಂದೇ ಕಡೆ ರೋಗಿಗಳಿಗೆ ಸಿಗುವಂತೆ ರಿಜಿಸ್ಟ್ರರ್ಡ್ ವ್ಯವಸ್ಥೆಯನ್ನು 60 ದಿನದೊಳಗೆ ಜಾರಿ ಮಾಡಲಾಗುವುದು.
ಮೊದಲು ಇದು ಬಿಬಿಎಂಪಿ ವ್ಯಾಪ್ತಿಯಲ್ಲಿ ಜಾರಿಯಾಗಲಿದೆ. ನಂತರ ಹಂತ ಹಂತವಾಗಿ ರಾಜ್ಯದ ಎಲ್ಲ ಆಸ್ಪತ್ರೆಗಳಲ್ಲು ಇದನ್ನು ಅನುಷ್ಠಾನ ಮಾಡಲಾಗುವುದು. ಒಂದೇ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಎಲ್ಲ ಸೇವೆಗಳು ಲಭ್ಯವಾಗುವಂತೆ ಮಾಡುವುದು ಇದರ ಮುಖ್ಯ ಉದ್ದೇಶ ಎಂದು ಶಿವಕುಮಾರ್ ಮಾಹಿತಿ ನೀಡಿದರು.
ಯಾವ ಯಾವ ಆಸ್ಪತ್ರೆಯಲ್ಲಿ ಯಾವ ಯಾವ ಚಿಕಿತ್ಸೆಗಳು ಸಿಗುತ್ತಿವೆ. ಅಲಭ್ಯವಿರುವ ಚಿಕಿತ್ಸೆಗಳನ್ನು ಇಲ್ಲಿಯೇ ಮುಂದುವರೆಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಿದರು.

ತಪ್ಪು ಕಂಡು ಹಿಡಿಯಲು ಹೋದರೆ ಹೆಜ್ಜೆ ಹೆಜ್ಜೆಗೂ ತಪ್ಪು ಹುಡುಕಬಹುದು. ನಾನು ಆಸ್ಪತ್ರೆಗೆ ಭೇಟಿ ಕೊಟ್ಟಿರುವುದು ತಪ್ಪು ಹುಡುಕಲು ಅಲ್ಲ. ಬದಲಿಗೆ ಇಲ್ಲಿನ ರೋಗಿಗಳಿಗೆ ಉತ್ತಮ ರೀತಿಯ ಚಿಕಿತ್ಸೆ ಸಿಗಬೇಕು. ಮೂಲಭೂತ ಸೌಕರ್ಯಗಳ ಸುಧಾರಣೆಯಾಗಬೇಕೆಂಬ ಉದ್ದೇಶವಿಟ್ಟುಕೊಂಡು ಬಂದಿದ್ದೇನೆ ಎಂದು ಹೇಳಿದರು.
ಆಸ್ಪತ್ರೆಯಲ್ಲಿ ಕೆಲವು ಮೂಲಭೂತ ಸೌಕರ್ಯಗಳ ಕೊರತೆ ಕುರಿತಂತೆ ನನ್ನ ಗಮನ ಸೆಳೆದಿದ್ದಾರೆ ಆಸ್ಪತ್ರೆಗಳಲ್ಲಿ ಖಾಸ ಚಟುವಟಿಕೆಗಳು ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ನಾನು ಅನಗತ್ಯವಾಗಿ ಯಾರ ಮೇಲೂ ದೂಷಣೆ ಮಾಡುವುದಿಲ್ಲ. ಕಾನೂನು ಬಾಹಿರವಾಗಿ ಕೆಲಸ ಮಾಡಿದರೆ ಕಾನೂನು ಪ್ರಕಾರವೇ ಕ್ರಮ ಕೈಗೊಳ್ಳುವುದು ಅನಿವಾರ್ಯ ಎಂದು ಶಿವಕುಮಾರ್ ಎಚ್ಚರಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ