
ಬೆಂಗಳೂರು, ಜೂ.15- ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರ ಹೆಸರು ಪ್ರಬಲವಾಗಿ ಕೇಳಿಬರಲಾರಂಭಿಸಿದೆ.
ಉಪಮುಖ್ಯಮಂತ್ರಿಯಾಗಿರುವ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಪಕ್ಷದ ಜವಾಬ್ದಾರಿಯನ್ನು ಬಿಟ್ಟುಕೊಡಬೇಕಾಗಿದ್ದು, ತೆರವಾಗುವ ಹುದ್ದೆಗೆ ನೂತನ ಅಧ್ಯಕ್ಷರ ಆಯ್ಕೆಗೆ ಗಂಭೀರ ಚರ್ಚೆಗಳು ನಡೆಯುತ್ತಿವೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ದಿನೇಶ್‍ಗುಂಡೂರಾವ್, ಎಸ್.ಆರ್.ಪಾಟೀಲ್, ಎಂ.ಬಿ.ಪಾಟೀಲ್ , ಬಿ.ಕೆ.ಹರಿಪ್ರಸಾದ್, ಕೆ.ಎಚ್.ಮುನಿಯಪ್ಪ ಅವರ ಹೆಸರುಗಳು ಚರ್ಚೆಯ ಹಂತದಲ್ಲಿದ್ದು, ಈ ನಡುವೆ ಟಿ.ಬಿ.ಜಯಚಂದ್ರ ಅವರ ಹೆಸರು ಪ್ರಸ್ತಾಪವಾಗಿದೆ.
ಒಕ್ಕಲಿಗ ಸಮುದಾಯದ ಡಿ.ಕೆ.ಶಿವಕುಮಾರ್ ಅವರನ್ನು ಉಪಮುಖ್ಯಮಂತ್ರಿ ಮಾಡಬೇಕು ಎಂಬ ಬೇಡಿಕೆ ಇತ್ತು. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೂ ಅವರ ಹೆಸರು ಕೇಳಿ ಬಂದಿತ್ತು. ಆದರೆ, ಅದೆಲ್ಲವೂ ಬದಿಗೆ ಸರಿದಿದ್ದು, ಸಚಿವ ಸ್ಥಾನ ಮಾತ್ರ ನೀಡಲಾಗಿದೆ.
ಹೀಗಾಗಿ ಒಕ್ಕಲಿಗ ಸಮುದಾಯ ಕಾಂಗ್ರೆಸ್ ವಿಷಯದಲ್ಲಿ ಅತೃಪ್ತಿ ಹೊಂದಿದ್ದು, ಅದನ್ನು ಸರಿದೂಗಿಸಲು ಕೆಪಿಸಿಸಿಗೆ ಒಕ್ಕಲಿಗ ಸಮುದಾಯದ ಟಿ.ಬಿ.ಜಯಚಂದ್ರ ಅವರನ್ನು ನೇಮಿಸಬೇಕೆಂಬ ಒತ್ತಾಯ ಕೇಳಿ ಬಂದಿದೆ.
ಸಮ್ಮಿಶ್ರ ಸರ್ಕಾರದಲ್ಲಿ ಕುಂಚಿಟಿಗ ಸಮುದಾಯಕ್ಕೆ ಆದ್ಯತೆ ಸಿಕ್ಕಿಲ್ಲ. ಹೀಗಾಗಿ ಜಯಚಂದ್ರ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನೇಮಿಸಿದರೆ ಸಾಮಾಜಿಕ ನ್ಯಾಯ ಒದಗಿಸಿದಂತಾಗುತ್ತದೆ.
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಎಸ್.ಎಂ.ಕೃಷ್ಣಾ ನಂತರ ಒಕ್ಕಲಿಗರನ್ನು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ನೇಮಿಸಿಲ್ಲ. ಡಿ.ಕೆ.ಶಿವಕುಮಾರ್ ಕೆಲ ಕಾಲ ಕಾರ್ಯಾಧ್ಯಕ್ಷರಾಗಿದ್ದರಾದರೂ ಅದು ಆಟಕುಂಟು ಲೆಕ್ಕಕ್ಕಿಲ್ಲ ಎಂಬಂತಿತ್ತು. ಹೀಗಾಗಿ ಈ ಬಾರಿ ಒಕ್ಕಲಿಗ ಸಮುದಾಯಕ್ಕೆ ಪಕ್ಷದ ಅಧ್ಯಕ್ಷ ಸ್ಥಾನ ನೀಡಿ ಸಮುದಾಯವನ್ನು ಸೆಳೆಯುವ ಚಿಂತನೆ ನಡೆದಿದೆ.
ಜಯಚಂದ್ರ ಅವರು 1969ರಿಂದಲೂ ಕಾಂಗ್ರೆಸ್ ಪಕ್ಷದಲ್ಲಿದ್ದು, ಒಟ್ಟು 9 ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. 6 ಬಾರಿ ಗೆದ್ದು, ಮೂರು ಬಾರಿ ಸೋಲು ಕಂಡಿದ್ದಾರೆ. ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಶಿರಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಕಂಡಿದ್ದಾರೆ.
ಹಿಂದೆ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಅತ್ಯಂತ ಪ್ರಭಾವಿ ಸಚಿವರಾಗಿದ್ದ ಜಯಚಂದ್ರ, ಹಲವಾರು ಪ್ರಮುಖ ಕಾನೂನುಗಳನ್ನು ರೂಪಿಸುವಲ್ಲಿ ಪ್ರಧಾನ ಪಾತ್ರ ವಹಿಸಿದ್ದರು. ಯಾರೊಂದಿಗೂ ವೈಮನಸ್ಸು ಕಟ್ಟಿಕೊಳ್ಳದೆ ಎಲ್ಲರನ್ನೂ ಒಳಗೊಳ್ಳುವ ಸ್ವಭಾವದವರಾದ ಜಯಚಂದ್ರ ಅವರೇ ಪಕ್ಷದ ಅಧ್ಯಕ್ಷರಾಗಲಿ ಎಂದು ಕೆಲವರು ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ಆದರೆ, ಚುನಾವಣೆಯಲ್ಲಿ ಸೋಲು ಕಂಡಿರುವುದು ಮತ್ತು ತುಮಕೂರು ಜಿಲ್ಲೆಗೆ ಈಗಾಗಲೇ ಉಪಮುಖ್ಯಮಂತ್ರಿ ಹುದ್ದೆ ಜತೆಗೆ ಎರಡು ಸಚಿವ ಸ್ಥಾನ ಸಿಕ್ಕಿರುವುದರಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಅದೇ ಜಿಲ್ಲೆಗೆ ನೀಡಿದರೆ ಪ್ರಾದೇಶಿಕ ಸಮತೋಲನ ಸಾಧ್ಯವಾಗುವುದಿಲ್ಲ ಎಂಬ ಆಕ್ಷೇಪಗಳು ಕೇಳಿಬಂದಿವೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನ ದ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದರೆ ಲೋಕಸಭೆ ಚುನಾವಣೆಗೆ ಅನುಕೂಲವಾಗಲಿದೆ ಎಂಬ ಮಾತುಗಳು ಕೇಳಿ ಬಂದಿದೆ.
ಕಾರ್ಯಾಧ್ಯಕ್ಷ ದಿನೇಶ್‍ಗುಂಡೂರಾವ್ ಪರವಾಗಿ ಸಚಿವರಾದ ಕೃಷ್ಣಬೈರೇಗೌಡ, ವಿಧಾನಪರಿಷತ್ ಸದಸ್ಯ ರಿಜ್ವಾನ್ ಅರ್ಷದ್ ಮತ್ತಿತರರು ಪ್ರಬಲ ಲಾಬಿ ಮಾಡಿದ್ದಾರೆ.
ಕೆಪಿಸಿಸಿ ಎಸ್.ಆರ್.ಪಾಟೀಲ್ ಸಚಿವ ಸ್ಥಾನ ಸಿಗದೆ ಅತೃಪ್ತರಾಗಿದ್ದು, ಈಗಾಗಲೇ ಕಾರ್ಯಾಧ್ಯಕ್ಛ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಲಿಂಗಾಯತ ಸಮುದಾಯವನ್ನು ಕಾಂಗ್ರೆಸ್ ಕಡೆಗಣಿಸುತ್ತಿದೆ. ಸಚಿವ ಸಂಪುಟದಲ್ಲಿ ಹೆಚ್ಚಿನ ಸ್ಥಾನ ನೀಡಿಲ್ಲ. ಉತ್ತರ ಕರ್ನಾಟಕ ಭಾಗಕ್ಕೆ ಯಾವುದೇ ಪ್ರಮುಖ ಹುದ್ದೆಗಳು ಸಿಕ್ಕಿಲ್ಲ ಎಂಬ ಅಸಮಾಧಾನವಿದ್ದು, ಅದನ್ನು ಹೋಗಲಾಡಿಸಬೇಕಾದರೆ ಎಸ್.ಆರ್.ಪಾಟೀಲ್ ಅವರನ್ನು ಅಧ್ಯಕ್ಷರನ್ನಾಗಿ ಮಾಡಬೇಕು. ಇಲ್ಲವಾದರೆ ಸಂಪುಟಕ್ಕೆ ತೆಗೆದುಕೊಳ್ಳಬೇಕೆಂಬ ಒತ್ತಾಯವಿದೆ.
ಶೀಘ್ರದಲ್ಲೇ ನಡೆಯುವ ಸಂಪುಟ ವಿಸ್ತರಣೆಯಲ್ಲಿ ಲಿಂಗಾಯತ ಸಮುದಾಯಕ್ಕೆ ಮತ್ತೊಂದು ಸಚಿವ ಸ್ಥಾನ ನೀಡಲು ನಿರ್ಧರಿಸಲಾಗಿದ್ದು, ಉತ್ತರ ಕರ್ನಾಟಕ ಭಾಗದವರಿಗೇ ಸಿಗುವ ಸಾಧ್ಯತೆ ಇದೆ. ಹೀಗಾಗಿ ಎಸ್.ಆರ್.ಪಾಟೀಲ್ ಅಥವಾ ಎಂ.ಬಿ.ಪಾಟೀಲ್ ಸಂಪುಟ ಸೇರಲಿದ್ದಾರೆ.
ಅಂತಿಮವಾಗಿ ಸಿದ್ದರಾಮಯ್ಯ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡಲು ಹೈಕಮಾಂಡ್ ಒಪ್ಪದೇ ಇದ್ದರೆ ಸಿದ್ದರಾಮಯ್ಯ ಅವರ ಬೆಂಬಲಿತ ಟಿ.ಬಿ.ಜಯಚಂದ್ರ ಅವರಿಗೆ ಅದೃಷ್ಟ ಒಲಿಯುವ ಸಾಧ್ಯತೆ ಇದೆ.
ದಿನೇಶ್‍ಗುಂಡೂರಾವ್ ಅವರ ಲಾಬಿ ಪ್ರಭಾವಿಯಾಗಿದ್ದರೂ ಸಂಸದರ ವಿರೋಧ ಇರುವುದರಿಂದ ಹೈಕಮಾಂಡ್ ಹಿಂದೇಟು ಹಾಕಲಿದೆ. ಇನ್ನು ಪರಿಶಿಷ್ಟ ಜಾತಿಯ ಎಡಗೈ ಸಮುದಾಯದ ಕೆ.ಎಚ್.ಮುನಿಯಪ್ಪ, ಬಿಲ್ಲವ ಸಮುದಾಯದ ಬಿ.ಕೆ.ಹರಿಪ್ರಸಾದ್ ಅವರು ಪಕ್ಷದ ಅಧ್ಯಕ್ಷರಾಗಲು ಲಾಬಿ ನಡೆಸುತ್ತಿದ್ದಾರೆ.
ಆದರೆ, ರಾಜ್ಯ ರಾಜಕಾರಣದಲ್ಲಿ ಈ ಇಬ್ಬರ ಸಕ್ರಿಯತೆ ಕಡಿಮೆ ಇದ್ದು, ರಾಜ್ಯಾದ್ಯಂತ ಹೆಚ್ಚು ಚಿರಪರಿಚಿತರಲ್ಲ ಎಂಬ ಆಕ್ಷೇಪಗಳಿವೆ. ಅತಿ ಶೀಘ್ರದಲ್ಲೇ ಕೆಪಿಸಿಸಿ ಅಧ್ಯಕ್ಷರನ್ನು ನೇಮಿಸಲು ಹೈಕಮಾಂಡ್ ನಿರ್ಧರಿಸಿದೆ. ಈಗಾಗಲೇ ಈ ಕುರಿತು ಹಲವಾರು ಸಭೆ ನಡೆಸಿದೆ. ಹೀಗಾಗಿ ಕೆಪಿಸಿಸಿ ಅಧ್ಯಕ್ಷ ಗಾದಿ ಯಾರಿಗೆ ಒಲಿಯಲಿದೆ ಕಾದು ನೋಡಬೇಕಿದೆ.