ಬೆಂಗಳೂರು, ಜೂ.19-ತಾವು ರಾಷ್ಟ್ರ ರಾಜಕಾರಣಕ್ಕೆ ಹೋಗುವ ಚಿಂತನೆ ನಡೆಸಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಪ್ರೆಸ್‍ಕ್ಲಬ್ ಆಫ್ ಬೆಂಗಳೂರು ಹಾಗೂ ಬೆಂಗಳೂರು ವರದಿಗಾರರ ಕೂಟ ಏರ್ಪಡಿಸಿದ್ದ ಮಾಧ್ಯಮ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯ ರಾಜಕಾರಣದಲ್ಲೇ ಮುಂದುವರೆಯುವುದಾಗಿ ಹೇಳಿದ್ದಾರೆ.
ದೆಹಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿಲ್ಲ. ಆದರೆ ಮುಖ್ಯಮಂತ್ರಿಗಳಾದ ಮಮತಾ ಬ್ಯಾನರ್ಜಿ, ಚಂದ್ರಬಾಬುನಾಯ್ಡು ಮತ್ತಿತರರನ್ನು ಭೇಟಿ ಮಾಡಿರುವುದಾಗಿ ಹೇಳಿದರು.
ಬಜೆಟ್ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ವೈಯಕ್ತಿಕವಾದುದು. ಸರ್ಕಾರದಲ್ಲಿ ಯಾವುದೇ ತೀರ್ಮಾನ ಕೈಗೊಳ್ಳುವ ಮುನ್ನ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು.
ಕಾವೇರಿ ಕಣಿವೆ ರೈತರು ಕಾವೇರಿ ನಿರ್ವಹಣಾ ಮಂಡಳಿ ಸೂಚಿಸಿದ ಬೆಳೆ ಮಾತ್ರ ಬೆಳೆಯಬೇಕು ಎಂಬುದು ಅವೈಜ್ಞಾನಿಕವಾಗಿದೆ. ಈ ಬಗ್ಗೆ ಪ್ರಧಾನಿ ಮತ್ತು ಕೇಂದ್ರ ಜಲಸಂಪನ್ಮೂಲ ಸಚಿವರನ್ನು ಭೇಟಿ ಮಾಡಿ ಚರ್ಚಿಸುವುದಾಗಿ ತಿಳಿಸಿದರು.
ನೀರಾವರಿ ಯೋಜನೆಗಳಿಗೆ ಸರ್ಕಾರದಲ್ಲಿ ಹಣದ ಕೊರತೆ ಇಲ್ಲ. ಇಲ್ಲಸಲ್ಲದ ಆರೋಪ ಮಾಡುವುದು ಬೇಡ. ರೈತರ ಸಾಲ ಮನ್ನಾ ಮಾಡುವುದರಿಂದ ಉತ್ತರ ಕರ್ನಾಟಕ ಭಾಗದ ರೈತರಿಗೆ ಹೆಚ್ಚು ಅನುಕೂಲವಾಗಲಿದೆ ಎಂದರು.
ನಾನು ಸಾಂದರ್ಭಿಕ ಶಿಶು ಎಂದು ಹೇಳಿರುವುದನ್ನು ಕೆಲ ರಾಜಕೀಯ ನಾಯಕರು ಹಾಗೂ ವಿಶ್ಲೇಷಕರು ಸರಿಯಾಗಿ ಅರ್ಥೈಸಿಕೊಂಡಿಲ್ಲ ಎಂದು ಹೇಳಿದರು.