ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದೇನೆ – ಟಿ.ಬಿ.ಜಯಚಂದ್ರ

ತುಮಕೂರು, ಜೂ.19- ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. ನನಗೂ ಅವಕಾಶ ಕೊಡಿ. ಕಳೆದ ಬಾರಿಯೇ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದೆ. ಆದರೆ ಹೈಕಮಾಂಡ್ ಆದೇಶಕ್ಕೆ ತಲೆ ಬಾಗಿ ನಾನು ಹಿಂದೆ ಸರಿದಿದ್ದೆ ಎಂದು ಎಐಸಿಸಿ ವರಿಷ್ಠರಾದ ಸೋನಿಯಾಗಾಂಧಿ ಹಾಗೂ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಟಿ.ಬಿ.ಜಯಚಂದ್ರ ಅವರು ಮನವಿ ಮಾಡಿದ್ದು , ಇದು ಕಾಂಗ್ರೆಸ್‍ನಲ್ಲಿ ತೀವ್ರ ಸಂಚಲನ ಮೂಡಿಸಿದೆ.
ಕಳೆದ 50 ವರ್ಷಗಳಿಂದ ಪಕ್ಷಕ್ಕಾಗಿ ದುಡಿದಿದ್ದೇನೆ. ಅತಿ ಚಿಕ್ಕ ವಯಸ್ಸಿನಲ್ಲೇ ವಿಧಾನಸಭೆ ಪ್ರವೇಶಿಸಿದೆ. ಸಿದ್ದರಾಮಯ್ಯನವರ ಸರ್ಕಾರದಲ್ಲಿ ಕಾನೂನು ಸಚಿವರಾಗಿ ಸರ್ಕಾರ ಸಂಕಷ್ಟ ಪರಿಸ್ಥಿತಿಯಲ್ಲಿದ್ದಾಗ ಗೊಂದಲಗಳನ್ನು ನಿವಾರಿಸಿದ್ದೇನೆ. ರಾಜ್ಯಾದ್ಯಂತ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ಕೊಡುವುದಲ್ಲದೇ ಪಕ್ಷದಲ್ಲಿ ಶಿಸ್ತಿನ ಸಿಪಾಯಿಯಂತೆ ಕೆಲಸ ಮಾಡಿದ್ದೇನೆ. ನನಗೂ ಅವಕಾಶ ಮಾಡಿಕೊಡಿ. ನಾನೂ ಕೂಡ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದೇನೆ ಎಂದು ರಾಹುಲ್ ಗಾಂಧಿ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ ಎಂಬ ಮಾಹಿತಿ ಜಯಚಂದ್ರ ಅವರ ಆಪ್ತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಈಗಾಗಲೇ ಇತರ ಹಲವು ಪ್ರಮುಖರು ಎಂ.ಬಿ.ಪಾಟೀಲ್ ಸೇರಿದಂತೆ ಇತರರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಕಣ್ಣಿಟ್ಟಿರುವ ವೇಳೆಯೇ ಯಾವುದೇ ಸದ್ದು ಗದ್ದಲವಿಲ್ಲದೇ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಟಿ.ಬಿ.ಜಯಚಂದ್ರ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನು ಪ್ರಬಲ ಆಕಾಂಕ್ಷಿ ಎನ್ನುವ ಮೂಲಕ ಕಾಂಗ್ರೆಸ್ ಪಕ್ಷದಲ್ಲಿ ಮಿಂಚಿನ ಸಂಚಲನ ಉಂಟು ಮಾಡಿದ್ದಾರೆ. ಅದರ ಬೆನ್ನಲ್ಲೇ ಈಗ ಹೈಕಮಾಂಡ್‍ನ ಭೇಟಿ ಮಾಡಿರುವುದು ಮಲ್ಲಿಕಾರ್ಜುನ ಖರ್ಗೆ, ದಿನೇಶ್ ಗುಂಡೂರಾವ್, ಎಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್ ಅವರಲ್ಲಿ ಅಚ್ಚರಿಯನ್ನು ತಂದಿದೆ. ಹೈಕಮಾಂಡ್ ಯಾರ ಮೇಲೆ ಒಲವು ತೋರುವುದೋ ಎಂದು ಕುತೂಹಲ ಕೆರಳಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ