ತುಮಕೂರು,ಜೂ.21- ನಮ್ಮ ಸರ್ಕಾರ ಐದು ವರ್ಷ ಪೂರೈಸುತ್ತದೆ. ನಿಗಮ ಮಂಡಳಿಗಳ ಆಕಾಂಕ್ಷಿಗಳು, ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಎಲ್ಲರೂ ಒಗ್ಗಟ್ಟಾಗಿದ್ದೇವೆ. ಭಿನ್ನಾಭಿಪ್ರಾಯ ಇದೆ ಎಂಬುವುದು ಮಾಧ್ಯಮಗಳ ಸೃಷ್ಟಿ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದರು.
ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗಡಿಸಿಕೊಂಡು ಕಾಂಗ್ರೆಸ್‍ನ್ನು ಟಾರ್ಗೆಟ್ ಮಾಡುತ್ತಿದೆ. ಕಾಂಗ್ರೆಸ್ ಪಕ್ಷದ ಮುಖಂಡರ ಮನೆ ಮೇಲೆ ಐಟಿ ದಾಳಿ ಮಾಡುವುದು, ಡಿ.ಕೆ.ಶಿವಕುಮಾರ್ ಅವರನ್ನು ಗುರಿಯಾಗಿಸಿಕೊಂಡಿರುವುದು ಖಂಡನೀಯ ಎಂದರು. ನಾವೆಲ್ಲರೂ ಡಿಕೆಶಿ ಪರವಾಗಿದ್ದೇವೆ. ಅವರು ಯಾವುದೇ ತಪ್ಪು ಮಾಡಿಲ್ಲ ಕಳೆದ ಒಂದು ವರ್ಷದಿಂದ ಕಾಂಗ್ರೆಸ್ ಪಕ್ಷದವರನ್ನು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಗುರಿಯಾಗಿಸಿಕೊಂಡು ದಾಳಿ ಮಾಡಲಾಗುತ್ತಿದೆ. ಬಿಜೆಪಿಯವರು ನಮ್ಮನ್ನು ಏನು ಮಾಡಲು ಸಾಧ್ಯವಿಲ್ಲ ಎಂದರು. ರೈತರ ಸಾಲಮನ್ನಾ ವಿಚಾರದ ಬಗ್ಗೆ ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ. ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದರು.