2019ರ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

 

ಬೆಂಗಳೂರು,ಜೂ.21- 2019ರ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ಎಐಸಿಸಿ ಅಧ್ಯಕ್ಷರಾದ ರಾಹುಲ್ ಗಾಂಧಿ ಅವರು ಪ್ರಧಾನಿಯಾಗಬೇಕೆಂಬ ಆಶಯ ಈಡೇರಿಲಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ವರ್ಷ ಅಂದರೆ 2019ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರ ಹಿಡಿಯಲಿದೆ. ರಾಹುಲ್ ಗಾಂಧಿ ಅವರೇ ದೇಶದ ಪ್ರಧಾನಿಯಾಗಬೇಕೆಂಬುದು ನಮ್ಮೆಲ್ಲರ ಆಶಯ. ಅವರಿಗೆ ಯುವಜನರ ಆಶೋತ್ತರಗಳ ಪರಿಚಯವಿದೆ. ಅಂಥವರು ಪ್ರಧಾನಿಯಾಗುವ ಅಗತ್ಯವಿದೆ. ನಮ್ಮ ಆಶಯವೂ ಈಡೇರಲಿದೆ ಎಂದರು.

ಈಗಾಗಲೇ ಚುನಾವಣೆ ಪೂರ್ವ ಮೈತ್ರಿ ಸಂಬಂಧವೂ ಚರ್ಚೆ ನಡೆಯುತ್ತಿದೆ. ಸ್ಥಳೀಯವಾಗಿ ಹಾಗೂ ರಾಜಕೀಯವಾಗಿ ಹಲವಾರು ಹೊಂದಾಣಿಕೆ ಮಾಡಿಕೊಳ್ಳಲಾಗುವುದು. ಕಾಂಗ್ರೆಸ್ ಎಷ್ಟು ಸ್ಥಾನಗಳನ್ನು ಗಳಿಸಲಿದೆ ಎಂಬ ವರದಿಯೂ ಇದೆ. ವರದಿ ಏನೇ ಹೇಳಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಸಚಿವ ಡಿ.ಕೆ.ಶಿವಕುಮಾರ್ ರಾಜೀನಾಮೆ ಕೇಳುವುದು ಅವೈಜ್ಞಾನಿಕ ಎಂದ ಅವರು, ಜಾರಿ ನಿರ್ದೇಶನಾಲಯ, ಸಿಬಿಐ, ಆದಾಯ ತೆರಿಗೆ ಇಲಾಖೆ ತನ್ನ ಅಧಿಕಾರವನ್ನು ಸಂಪೂರ್ಣ ದುರುಪಯೋಗಪಡಿಸಿಕೊಳ್ಳುತ್ತಿವೆ. ಈ ಹಿಂದೆಯೂ ಅವರ ಮೇಲೆ ಐಟಿ ದಾಳಿ ನಡೆದಿತ್ತು. ಅದು ದುರುದ್ದೇಶ ಹಾಗೂ ರಾಜಕೀಯ ಪ್ರೇರಿತ ಎಂದು ಹೇಳಿದರು.
ಅವರ ಮೇಲೆ ಐಟಿ ದಾಳಿ ಹೊಸದಲ್ಲ. ಡಿ.ಕೆ.ಶಿವಕುಮಾರ್ ಅವರು ಸಹ ತಮ್ಮ ಬಳಿ ಇರುವ ಮಾಹಿತಿ ಕೊಡುವುದಾಗಿ ಹೇಳಿದ್ದಾರೆ. ಆದರೆ ಕಾನೂನುಕ್ರಮ ಕೈಗೊಳ್ಳುವ ಬಗ್ಗೆ ನಮ್ಮ ಆಕ್ಷೇಪಣೆ ಏನಿಲ್ಲ. ಆದರೆ ಜವಾಬ್ದಾರಿಯುತ ಸಂಸ್ಥೆಗಳಿಂದ ಅಧಿಕಾರ ದುರುಪಯೋಗವಾಗುತ್ತಿರುವುದಕ್ಕೆ ಆಕ್ಷೇಪವಿದೆ. ಡಿ.ಕೆ.ಶಿವಕುಮಾರ್ ಅವರೊಂದಿಗೆ ಕಾಂಗ್ರೆಸ್ ಸದಾ ಇರುತ್ತದೆ ಎಂದು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ