ಮೈಸೂರು, ಜೂ.22- ಮೈಸೂರು-ಹುಣಸೂರು ರಸ್ತೆಯಲ್ಲಿರುವ ಜಲದರ್ಶಿನಿ ಬಳಿ ನೇರ ರಸ್ತೆಗೊಳಿಸಲು ನಡೆಯುತ್ತಿರುವ ಕಾಮಗಾರಿಯಲ್ಲಿ ಅಕ್ರಮ ನಡೆದಿದೆ ಎಂದು ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದಾರೆ.
ನಿನ್ನೆ ಸಂಜೆ ಶಾಸಕ ನಾಗೇಂದ್ರ ಅವರೊಂದಿಗೆ ಪ್ರತಾಪ್‍ಸಿಂಹ ಅವರು ಕಾಮಗಾರಿ ಸ್ಥಳ ಪರಿಶೀಲನೆಗೆ ತೆರಳಿದ್ದ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರಲ್ಲದೆ, ಕಾಮಗಾರಿವೇಳೆ ನಡೆದಿದೆ ಎನ್ನಲಾದ ಅಕ್ರಮದ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.
ಕೇಂದ್ರ ಸರ್ಕಾರದ ಸೆಂಟ್ರಲ್ ರೋಡ್ ಫಂಡ್‍ನಿಂದ 12.5 ಕೋಟಿ ರೂ. ವೆಚ್ಚದಲ್ಲಿ ನಡೆಯುತ್ತಿರುವ ರಸ್ತೆ ನೇರಗೊಳಿಸುವ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಈ ಕಾಮಗಾರಿಯಲ್ಲಿ ಕೋಟ್ಯಂತರ ರೂ. ಅವ್ಯವಹಾರ ನಡೆದಿರುವ ಬಗ್ಗೆ ಆರೋಪ ಕೇಳಿ ಬಂದಿದೆ. ಈ ಬಗ್ಗೆ ತನಿಖೆಯಾಗಲಿ ಎಂದರು.
ನಗರದ ಜಲದರ್ಶಿನಿ ಅತಿಥಿಗೃಹದ ಮುಂಭಾಗದಿಂದ ಪಡುವಾರಹಳ್ಳಿ ಸಿಗ್ನಲ್ ಜಂಕ್ಷನ್‍ವರೆಗಿನ ಹುಣಸೂರು ರಸ್ತೆಯನ್ನು ನೇರಗೊಳಿಸುವ ಕಾಮಗಾರಿ ಇದಾಗಿದೆ.
ಜಲದರ್ಶಿನಿ ಸಮೀಪದ ತಿರುವಿನಲ್ಲಿ ಅಪಘಾತಗಳು ಪ್ರತಿನಿತ್ಯ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಈ ರಸ್ತೆ ನೇರಗೊಳಿಸಲು ಕೇಂದ್ರ ಅನುದಾನ ಬಿಡುಗಡೆ ಮಾಡಿದೆ. ಈ ಕಾಮಗಾರಿಯಲ್ಲಿ ಅಕ್ರಮ ನಡೆದಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳನ್ನು ಸಂಸದ ಪ್ರತಾಪ್‍ಸಿಂಹ ತರಾಟೆಗೆ ತೆಗೆದುಕೊಂಡರು.