ನವದೆಹಲಿ:ಜೂ-28: ಲೋಕಸಭೆ ಚುನಾವಣೆಯಲ್ಲಿಯೂ ಕಾಂಗ್ರೆಸ್ ಜತೆ ಸೇರಿ ಚುನಾವಣೆ ಎದುರಿಸಲು ನಿರ್ಧರಿಸಿದ್ದೇವೆ. ಉತ್ತರ ಪ್ರದೇಶದಲ್ಲಿ ಬಿಎಸ್ ಪಿ ಸ್ಥಾನಗಳನ್ನು ಕಾಂಗ್ರೆಸ್ ಗೆ ಬಿಟ್ತುಕೊಡಲಿದೆ. ಕೇರಳದಲ್ಲಿ ಮೊದಲಿನಂದಲೂ ಜೆಡಿಎಸ್ ಗೆ ಒಂದು ಸ್ಥಾನ ಬಿಟ್ಟುಕೊಡುತ್ತಾರೆ. ಕರ್ನಾಟಕದಲ್ಲಿ ಇನ್ನೂ ಸೀಟು ಹಂಚಿಕೆ ಬಗ್ಗೆ ಚರ್ಚೆಯಾಗಿಲ್ಲ. ಈ ಬಗ್ಗೆ ಚಿಂತನೆಗಳು ನಡೆದಿವೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅವಧಿಗೂ ಮುನ್ನವೇ ಲೋಕಸಭಾ ಚುನಾವಣೆ ನಡೆಯುವ ಸಾಧ್ಯತೆಯಿದೆ. ಬಿಜೆಪಿ ಈಗಾಗಲೇ ಚುನಾವಣೆಗೆ ಸಜ್ಜಾಗುತ್ತಿರುವುದನ್ನು ಗಮನಿಸಿದರೆ ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಲೋಕಸಭೆ ಚುನಾವಣೆ ನಡೆಯುವ ಸಾಧ್ಯತೆ ಕಂಡುಬರುತ್ತಿದೆ. ಬಹುಶಃ ಈ ಸಂಸತ್ ಅಧಿವೇಶನ ಕೊನೆಯ ಅಧಿವೇಶನವಾಗಬಹುದು ಎಂದು ಹೇಳಿದರು.
ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಸಣ್ಣಪುಟ್ಟ ಸಮಸ್ಯೆಗಳಿದ್ದರೆ ಉಭಯ ಪಕ್ಷಗಳ ಮುಖಂಡರು ಚರ್ಚಿಸಿ ಬಗೆಹರಿಸಿಕೊಳ್ಳುತ್ತಾರೆ. ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬೇಕೆಂಬ ಒಂದೇ ಕಾರಣಕ್ಕಾಗಿ ನಮ್ಮಲ್ಲಿರುವ ಭಿನ್ನಾಭಿಪ್ರಾಯಗಳನ್ನು ಮರೆತು ಮೈತ್ರಿ ಮಾಡಿಕೊಂಡಿದ್ದೇವೆ. ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತ ನಡೆಸುವುದು ನಮ್ಮ ಗುರಿಯಾಗಿದೆ. ಗೊಂದಲಗಳಿದ್ದರೆ ಎಐಸಿಸಿ ಅಧ್ಯಕ್ಷರಾದ ರಾಹುಲ್ ಗಾಂಧಿ ಅವರು ಪರಿಹರಿಸುತ್ತಾರೆ ಎಂಬ ವಿಶ್ವಾಸ ನಮಗಿದೆ ಎಂದರು.
ಇನ್ನು ರಾಜ್ಯದಲ್ಲಿ ಸಮನ್ವಯ ಸಮಿತಿಯನ್ನು ಕಾಂಗ್ರೆಸ್ ರಚಿಸಿದೆ. ಆ ಸಮಿತಿ ನಿರ್ಧಾರಗಳ ಬಗ್ಗೆ ನಾನು ಏನೂ ಹೇಳುವುದಿಲ್ಲ. ಬಜೆಟ್ ಮಂಡನೆ ಕುರಿತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಉಸ್ತುವಾರಿ ಕೆ ಸಿ ವೇಣುಗೋಪಾಲ್ ಅವರ ನಿರ್ಧಾರವೇ ಅಂತಿಮ. ಇನ್ನು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ಅಷ್ಟು ಮಹತ್ವಕೊಡುವ ಅಗತ್ಯವಿಲ್ಲ. ಅವರ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯೆ ನೀಡಲ್ಲ. ಮಾತುಕತೆ ಆಗಿರುವುದು ಜೆಡಿಎಸ್-ಕಾಂಗ್ರೆಸ್ ಎರಡು ಪಕ್ಷಗಳ ನಡುವೆ.ಎರಡು ಪಕ್ಷಗಳ ನಡುವೆ ಆಗಿರುವ ಒಪ್ಪಂದಗಳ ಪ್ರಕಾರ ಸರ್ಕಾರ ನಡೆಯಲಿದೆ ಎಂದು ಗೌಡರು ಹೇಳಿದ್ದಾರೆ.
Amid strains in the ruling Congress-JDS coalition government,Karnataka, former Prime Minister HD Deve Gowda