ಸರ್ಕಾರಿ ಆಸ್ಪತ್ರೆಗಳಲ್ಲಿ ಬಡ ರೋಗಿಗಳಿಗೆ ಉಚಿತ ಚಿಕಿತ್ಸೆ ದೊರೆಯುವಂತಾಗಬೇಕು: ರಾಜ್ಯಪಾಲ ವಜುಬಾಯಿ ವಾಲಾ

 

ಬೆಂಗಳೂರು, ಜೂ.28- ಸರ್ಕಾರಿ ಆಸ್ಪತ್ರೆಗಳಲ್ಲಿ ಶೇ.100ರಷ್ಟು ಚಿಕಿತ್ಸಾ ವೆಚ್ಚವನ್ನು ಕೇಂದ್ರ ಸರ್ಕಾರವೇ ಭರಿಸುವಂತಾಗಬೇಕು. ಬಡ ರೋಗಿಗಳಿಗೆ ಉಚಿತ ಚಿಕಿತ್ಸೆ ದೊರೆಯುವಂತಾಗಬೇಕು ಎಂದು ರಾಜ್ಯಪಾಲ ವಜುಬಾಯಿ ವಾಲಾ ಇಂದಿಲ್ಲಿ ತಿಳಿಸಿದರು.

ನಗರದ ಕಿದ್ವಾಯಿ ಕ್ಯಾನ್ಸರ್ ಸಂಸ್ಥೆ ಸಂಕೀರ್ಣ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇಂತಹ ಉಚಿತ ವ್ಯವಸ್ಥೆಯಡಿ ಕೇಂದ್ರ ಸರ್ಕಾರ ನೂರರಷ್ಟು ವೆಚ್ಚ ಭರಿಸಿದರೆ ರಾಜ್ಯ ಸರ್ಕಾರ ನಿರ್ವಹಣಾ ವೆಚ್ಚ ಭರಿಸಬೇಕು. ಈ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕ್ರಮ ಕೈಗೊಳ್ಳಬೇಕೆಂದು ಹೇಳಿದರು.

ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಗೆ ಉತ್ತಮ ಹೆಸರಿದೆ. ಚಿಕಿತ್ಸೆಗೆ ಬರುವ ಬಡ ರೋಗಿಗಳಿಗೂ ಇಲ್ಲಿ ಗುಣಮಟ್ಟದ ಚಿಕಿತ್ಸಾ ವ್ಯವಸ್ಥೆ ಕಲ್ಪಿಸಲಾಗಿದೆ. ಬಡ ಹಾಗೂ ಮಧ್ಯಮ ವರ್ಗದವರಿಗೆ ಅನುಕೂಲವಾಗುವ ರೀತಿಯಲ್ಲಿ ಕಿದ್ವಾಯಿಯಲ್ಲಿ ವ್ಯವಸ್ಥೆ ಇದೆ. ಆದರೆ, ಅಗತ್ಯವಿರುವ ವೈದ್ಯಕೀಯ ವೆಚ್ಚ ಭರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕ್ರಮ ವಹಿಸುವ ಮೂಲಕ ಮತ್ತಷ್ಟು ಉತ್ತಮ ರೀತಿಯಲ್ಲಿ ಆಸ್ಪತ್ರೆಯ ಸೇವೆ ಒದಗುವಂತೆ ನೋಡಿಕೊಳ್ಳಬೇಕು ಎಂದು ಸಲಹೆ ಮಾಡಿದರು.
ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಕಿದ್ವಾಯಿ ಕ್ಯಾನ್ಸರ್ ಸಂಸ್ಥೆಯ ಆವರಣದಲ್ಲಿ ನೂತನ ಸಂಕೀರ್ಣವನ್ನು ಉದ್ಘಾಟಿಸಿದರು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಚಿವರಾದ ಡಿ.ಕೆ.ಶಿವಕುಮಾರ್, ಶಿವಾನಂದ ಪಾಟೀಲ್,ಶಾಸಕ ಉದಯ್ ಗರುಡಾಚಾರ್, ರಾಜೀವ್‍ಗಾಂಧಿ ವಿವಿ ಉಪಕುಲಪತಿ ಡಾ.ಎಸ್.ಸಚ್ಚಿದಾನಂದ, ಸಂಸ್ಥೆಯ ನಿರ್ದೇಶಕ ಡಾ.ಕೆ.ಬಿ.ಲಿಂಗೇಗೌಡ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ