ಉಡುಪಿ, ಜೂ.29- ಉಡುಪಿ-ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ ಆಗುಂಬೆಘಾಟ್ನಲ್ಲಿ ಗುಡ್ಡ ಕುಸಿದಿರುವ ಹಿನ್ನೆಲೆಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಕಳೆದ ಎರಡು-ಮೂರು ದಿನಗಳಿಂದ ಈ ಭಾಗದಲ್ಲಿ ಸತತವಾಗಿ ಮಳೆ ಸುರಿಯುತ್ತಿದ್ದು, ಆಗುಂಬೆಘಾಟ್ನ ಏಳನೇ ತಿರುವಿನಲ್ಲಿ ಗುಡ್ಡ ಕುಸಿದು ರಸ್ತೆಗೆ ಮಣ್ಣು ಬಿದ್ದಿದೆ. ಅಲ್ಲದೆ ಒಂದು ಭಾಗ ಸಂಪೂರ್ಣ ಕುಸಿದಿರುವುದರಿಂದ ವಾಹನ ಸವಾರರಿಗೆ ಮೃತ್ಯು ಕೂಪವಾಗಿದೆ.
ನಿನ್ನೆ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ತಕ್ಷಣದಿಂದ ಜಾರಿಗೆ ಬರುವಂತೆ ಭಾರೀ ವಾಹನಗಳ ಸಂಚಾರವನ್ನು ನಿರ್ಬಂಧಿಸುವಂತೆ ಆದೇಶಿಸಿದ್ದಾರೆ. ಕೂಡಲೇ ರಸ್ತೆ ರಿಪೇರಿ ಮಾಡಿಸಬೇಕು ಹಾಗೂ ಅಲ್ಲಲ್ಲಿ ಎಚ್ಚರಿಕೆಯ ಫಲಕಗಳನ್ನು ಅಳವಡಿಸಬೇಕೆಂದು ಅವರು ಹೆದ್ದಾರಿ ಇಲಾಖೆಗೆ ಸೂಚಿಸಿದ್ದಾರೆ.