ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಸರ್ಕಾರದ ಸಂಸದೀಯ ಕಾರ್ಯದರ್ಶಿ ಸ್ಥಾನಗಳಿಗೆ ಜೆಡಿಎಸ್‍ನಲ್ಲಿ ತೀವ್ರ ಸ್ಪರ್ಧೆ

 

ಬೆಂಗಳೂರು,ಜೂ.29-ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಸರ್ಕಾರದ ಸಂಸದೀಯ ಕಾರ್ಯದರ್ಶಿ ಸ್ಥಾನಗಳಿಗೆ ಜೆಡಿಎಸ್‍ನಲ್ಲಿ ತೀವ್ರ ಸ್ಪರ್ಧೆ ಏರ್ಪಟ್ಟಿದೆ.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಶಾಸಕರು, ಮಾಜಿ ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರ ಹೆಸರುಗಳು ಕೇಳಿಬರುತ್ತಿವೆ. ಮುಖ್ಯಮಂತ್ರಿಗಳ ಕಾರ್ಯದರ್ಶಿ ಹುದ್ದೆಗೆ ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ, ಮಾಜಿ ಶಾಸಕರಾದ ಎನ್.ಎಚ್.ಕೋನರೆಡ್ಡಿ, ಮಧು ಬಂಗಾರಪ್ಪ, ಸುರೇಶ್ ಬಾಬು, ವೈ.ಎಸ್.ವಿ.ದತ್ತ ಅವರ ಹೆಸರುಗಳು ಕೇಳಿಬರುತ್ತಿವೆ.

ಕಳೆದ ಸರ್ಕಾರದಲ್ಲಿ ಪ್ರತಿ ಸಂಪುಟ ದರ್ಜೆ ಸಚಿವರಿಗೆ ಒಬ್ಬರಂತೆ ಸಂಸದೀಯ ಕಾರ್ಯದರ್ಶಿಗಳನ್ನು ನೇಮಕ ಮಾಡಿಕೊಳ್ಳಲಾಗಿತ್ತು. ಸಚಿವ ಸ್ಥಾನ ಆಕಾಂಕ್ಷಿಗಳನ್ನು ಆ ಮೂಲಕ ಸಮಾಧಾನಪಡಿಸುವ ಪ್ರಯತ್ನವನ್ನು ಮಾಡಲಾಗಿತ್ತು.
ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ವಂಚಿತರು ಮುಖ್ಯಮಂತ್ರಿ ಕಾರ್ಯದರ್ಶಿ ಹುದ್ದೆಯ ನಿರೀಕ್ಷೆಯಲ್ಲಿ ಇದ್ದಾರೆ. ಅದೇ ರೀತಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತಿರುವ ಶಾಸಕರು ಸಂಸದೀಯ ಕಾರ್ಯದರ್ಶಿಗಳ ಆಕಾಂಕ್ಷಿಗಳಾಗಿದ್ದಾರೆ.
ಜೆಡಿಎಸ್‍ನಲ್ಲಿ ಶರವಣ ಹಾಗೂ ಕೋನರೆಡ್ಡಿ ಅವರನ್ನು ಮುಖ್ಯಮಂತ್ರಿಗಳ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಲು ಉದ್ದೇಶಿಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಉಳಿದ ಕೆಲವು ಶಾಸಕರು ಹಾಗೂ ಮಾಜಿ ಶಾಸಕರನ್ನು ಸಂಸದೀಯ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.
ಜೆಡಿಎಸ್‍ನಲ್ಲೂ ಕೂಡ ಸಚಿವ ಸ್ಥಾನದ ಹಲವು ಆಕಾಂಕ್ಷಿಗಳಿದ್ದು , ಅವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಇಲ್ಲವೇ ಸಂಸದೀಯ ಕಾರ್ಯದರ್ಶಿಗಳ ಹುದ್ದೆ ನೀಡಿ ಸಮಾಧಾನಪಡಿಸಲು ವರಿಷ್ಠರು ಮುಂದಾಗಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ