ಕಾಂಗ್ರೆಸ್‍ನಲ್ಲಿ ಬಿರುಸುಗೊಂಡ ರಾಜಕೀಯ ಚಟುವಟಿಕೆಗಳು

 

ಬೆಂಗಳೂರು, ಜು.1- ಕಾಂಗ್ರೆಸ್ ಪಕ್ಷದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಸಚಿವ ಸ್ಥಾನವಂಚಿತರಾಗಿ ಅಸಮಾಧಾನಗೊಂಡವರನ್ನು ತೃಪ್ತಿಗೊಳಿಸಲು ನಿಗಮ ಮಂಡಳಿಗಳಿಗೆ ನೇಮಕ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್. ಉಸ್ತುವಾರಿ ವೇಣುಗೋಪಾಲ್ ಅವರಿಂದು ಈ ಕುರಿತು ಮಹತ್ವದ ಮಾತುಕತೆ ನಡೆಸಿದರು.
ನಾಳೆಯಿಂದ ಸಮ್ಮಿಶ್ರ ಸರ್ಕಾರದ ಬಜೆಟ್ ಅಧಿವೇಶನ ಪ್ರಾರಂಭವಾಗಲಿರುವ ಹಿನ್ನೆಲೆಯಲ್ಲಿ ಅಸಮಾಧಾನ, ಭಿನ್ನಮತ ತಲೆದೋರಬಾರದು ಎಂಬ ಹಿನ್ನೆಲೆಯಲ್ಲಿ ಅತೃಪ್ತರಿಗೆ ಅಧಿಕಾರ ನೀಡುವ ಸಲುವಾಗಿ ಕಾಂಗ್ರೆಸ್ ಮುಖಡರು ಸಭೆಯಲ್ಲಿ ಚರ್ಚಿಸಿದ್ದಾರೆ.
ಬಜೆಟ್‍ನಲ್ಲಿ ಅಳವಡಿಸಬೇಕಾಗಿರುವ ಅಂಶಗಳು, ರೈತರ ಸಾಲ ಮನ್ನಾ ಹಾಗೂ ಇನ್ನತರೆ ವಿಷಯಗಳ ಬಗ್ಗೆ ಸಮನ್ವಯ ಸಮಿತಿಯಲ್ಲಿ ಯಾವ ನಿರ್ಧಾರ ಕೈಗೊಳ್ಳಬೇಕು ಎಂಬ ಬಗ್ಗೆಯೂ ಕೂಡ ಕಾಂಗ್ರೆಸ್ ಮುಖಂಡರು ಸಭೆಯಲ್ಲಿ ಚರ್ಚೆ ನಡೆಸಿದರು.

ನಿಗಮ ಮಂಡಳಿಗಳ ಅಧ್ಯಕ್ಷ, ಉಪಾಧ್ಯಕ್ಷರ ನೇಮಕಕ್ಕೆ ಸಂಬಂಧಿಸಿದಂತೆ ಚರ್ಚಿಸಿದ ನಾಯಕರು, ಮೊದಲ ಹಂತದಲ್ಲಿ 30 ನಿಗಮ ಮಂಡಳಿಗಳಿಗೆ ಅಧ್ಯಕ್ಷರು, ಉಪಾಧ್ಯಕ್ಷರನ್ನು ನೇಮಕ ಮಾಡುವ ಬಗ್ಗೆ ತೀರ್ಮಾನಿಸಿದ್ದಾರೆ. ಈ ಪೈಕಿ 20 ಕಾಂಗ್ರೆಸ್ ಪಕ್ಷದವರಿಗೆ, 10 ಜೆಡಿಎಸ್ ಪಕ್ಷದವರಿಗೆ ನೀಡಲು ಉದ್ದೇಶಿಸಲಾಗಿದೆ.
ಜೆಡಿಎಸ್ ಮತ್ತು ಕಾಂಗ್ರೆಸ್‍ನ ಸಚಿವರು ಹೊಂದಿರುವ ಖಾತೆಗಳಡಿ ಬರುವ ನಿಗಮ ಮಂಡಳಿಗಳಿಗೆ ಆಯಾ ಪಕ್ಷದ ಶಾಸಕರು, ಮುಖಂಡರನ್ನೇ ನೇಮಕ ಮಾಡಿ ಬಂಡಾಯವನ್ನು ಶಮನ ಮಾಡಲು ನಾಯಕರು ಮುಂದಾಗಿದ್ದಾರೆ.
ಕಾಂಗ್ರೆಸ್‍ಗೆ ತೆಂಗು, ನಾರು ಅಭಿವೃದ್ಧಿ ಮಂಡಳಿ, ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮ, ಬಿಡಿಎ, ಜಲಮಂಡಳಿ, ಕೊಳಚೆ ನಿರ್ಮೂಲನೆ ಮಂಡಳಿ, ಗೃಹ ಮಡಳಿ, ಅರಣ್ಯ ಮತ್ತು ಕೈಗಾರಿಕಾ ಅಭಿವೃದ್ಧಿ ನಿಗಮ, ವಾಣಿಜ್ಯ ಮತ್ತು ಕೈಗಾರಿಕಾ ಅಭಿವೃದ್ಧಿ ನಿಗಮ, ಆಹಾರ ಮತ್ತು ನಾಗರಿಕ ಪೂರೈಕೆ ನಿಗಮ, ದೇವರಾಜ ಅರಸು ನಿಗಮ, ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಮಹಿಳಾ ಅಭಿವೃದ್ಧಿ ನಿಗಮ, ಹಟ್ಟಿ ಚಿನ್ನದ ಗಣಿ, ವಕ್ಫ್‍ಬೋರ್ಡ್, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿ, ಕರಾವಳಿ ಅಭಿವೃದ್ಧಿ ಮಂಡಳಿ ಹಾಗೂ ಬಾಲಭವನ ದೊರೆಯಲಿವೆ.
ಹಾಗೇ ಜೆಡಿಎಸ್‍ಗೆ ಬಿಎಂಟಿಸಿ, ಕೆಎಸ್‍ಆರ್‍ಟಿಸಿ, ಬೆಸ್ಕಾಂ, ಕರ್ನಾಟಕ ರಾಜ್ಯ ರಸ್ತೆ ಹೆದ್ದಾರಿ ಅಭಿವೃದ್ಧಿ ನಿಗಮ, ಪ್ರವಾಸೋದ್ಯಮ ಅಭಿವೃದ್ಧಿ ನಿಗಮ, ಕರ್ನಾಟಕ ಜಂಗಲ್ ಲಾಡ್ಜಸ್ ಆ್ಯಂಡ್ ರೆಸಾಟ್ರ್ಸ್, ಎಂಎಸ್‍ಐಎಲ್, ಕರ್ನಾಟಕ ಜವಳಿ ಅಭಿವೃದ್ಧಿ ನಿಗಮ, ರೇಷ್ಮೆ ಕೈಗಾರಿಕೆ ಅಭಿವೃದ್ಧಿ ನಿಗಮ, ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮ, ಕೈಮಗ್ಗ ಅಭಿವೃದ್ಧಿ ಮಂಡಳಿ, ಕುರಿ ಅಭಿವೃದ್ಧಿ ಮಂಡಳಿ ದೊರೆಯಲಿವೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ