ಪ್ರಸಕ್ತ ಸಾಲಿನಲ್ಲಿ ಆರೋಗ್ಯ ಕರ್ನಾಟಕ ಯೋಜನೆ ಜಾರಿ: ರಾಜ್ಯಪಾಲ ವಜುಭಾಯಿ ವಾಲಾ

 

ಬೆಂಗಳೂರು, ಜು.2- ಪ್ರಸಕ್ತ ಸಾಲಿನಲ್ಲಿ ಆರೋಗ್ಯ ಕರ್ನಾಟಕ ಯೋಜನೆಯನ್ನು ಸಂಪೂರ್ಣವಾಗಿ ಜಾರಿಗೆ ತರಲಾಗುವುದು ಎಂದು ರಾಜ್ಯಪಾಲ ವಜುಭಾಯಿ ವಾಲಾ ತಿಳಿಸಿದರು.
ವಿಧಾನಸಭೆಯಲ್ಲಿ ರಾಜ್ಯ ವಿಧಾನಮಂಡಲದ ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ಅವರು, ಉತ್ತಮ ಗುಣಮಟ್ಟದ ಸಮಗ್ರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸೇವಾ ಸೌಲಭ್ಯವನ್ನು ಒದಗಿಸಲು ಉಪ ಕೇಂದ್ರಗಳನ್ನು ಮೇಲ್ದರ್ಜೆಗೇರಿಸುವ ಮೂಲಕ ಆರೋಗ್ಯ ಮತ್ತು ಕಲ್ಯಾಣ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು.

ಮುಂದಿನ ಏಳು ವರ್ಷಗಳಲ್ಲಿ ತಾಯಿ ಮರಣ ಹಾಗೂ ಶಿಶು ಮರಣ ಪ್ರಮಾಣವನ್ನು ದೇಶದಲ್ಲೇ ಅತ್ಯಂತ ಕನಿಷ್ಠ ಮಟ್ಟಕ್ಕೆ ತಗ್ಗಿಸುವ ಗುರಿ ಹೊಂದಲಾಗಿದೆ. ಎಲ್ಲಾ ಜಿಲ್ಲಾ, ತಾಲ್ಲೂಕು ಆಸ್ಪತ್ರೆಗಳನ್ನು ಆರೋಗ್ಯ ಸೇವೆಗಳ ರಾಷ್ಟ್ರೀಯ ಮಾನ್ಯತಾ ಮಂಡಳಿ ಸಮೀಕ್ಷ ಪ್ರಮಾಣಿಕರಣದ ಅಡಿಯಲ್ಲಿ ತರಲು ಯೋಜಿಸಲಾಗಿದೆ. ಮಾನಸಿಕ ಆರೋಗ್ಯ ಮತ್ತು ಸೇವಾ ಕಾರ್ಯಕ್ರಮಗಳನ್ನು ಪುನಃಶ್ಚೇತನಗೊಳಿಸಾಗುವುದು ಎಂದು ತಿಳಿಸಿದರು.
ಪ್ರಮುಖ ನಗರಗಳಲ್ಲಿನ ಆರೋಗ್ಯ ಸಂಸ್ಥೆಗಳ ಆವರಣದಲ್ಲಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸಿ ತೃತೀಯ ಹಂತದ ಆರೋಗ್ಯ ಸೇವೆಗಳನ್ನು ಬಲಪಡಿಸಲು ಯೋಜಿಸಲಾಗಿದೆ. ಎಲ್ಲಾ ವೈದ್ಯಕೀಯ ಕಾಲೇಜುಗಳಲ್ಲಿ ಕ್ಯಾನ್ಸರ್ ಕೇರ್ ಘಟಕಗಳನ್ನು ಹಂತ ಹಂತವಾಗಿ ಬಲಪಡಿಸಲಾಗುವುದು ಎಂದರು.
ನದಿ ದಡಗಳ ಮೇಲೆ ಮರಗಳ ತೋಪು:
ನದಿಯ ದಡಗಳ ಮೇಲೆ ಮರಗಳ ತೋಪನ್ನು ಅಭಿವೃದ್ಧಿಪಡಿಸುವ ಉದ್ದೇಶ ಸರ್ಕಾರಕ್ಕಿದೆ. ನದಿಗಳ ಜಲಾನಯನ ಪ್ರದೇಶವನ್ನು ಶುದ್ಧೀಕರಿಸಲಾಗುವುದು. ಮಾಲಿನ್ಯಗೊಂಡ ನದಿ ತೀರಗಳಲ್ಲಿ ಹಂತ ಹಂತವಾಗಿ ನೀರಿನ ಗುಣಮಟ್ಟ ಮೇಲ್ವಿಚಾರಣ ಕೇಂದ್ರಗಳನ್ನು ಸ್ಥಾಪಿಸುವ ಉದ್ದೇಶವಿದೆ ಎಂದು ರಾಜ್ಯಪಾಲರು ಹೇಳಿದರು.

ಪರಿಶಿಷ್ಟ ಜಾತಿ ಮತ್ತು ಪಂಗಡದ ನಿರುದ್ಯೋಗಿ ಯುವ ಜನರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ಉದ್ದೇಶಿಸಲಾಗಿದೆ. ಸ್ಪರ್ಧಾತ್ಮ ಪರೀಕ್ಷೆಗಳಿಗೆ ಹಾಜರಾಗುವ ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವಭಾವಿ ತರಬೇತಿ ನೀಡಲಾಗುವುದು ಎಂದರು.
ವಿದ್ಯಾರ್ಥಿಗಳ ಕಲಿಕಾ ಮಟ್ಟ ಮತ್ತು ಕಲಿಕಾ ದೋಷಗಳನ್ನು ಪತ್ತೆಹಚ್ಚಲು ರಾಜ್ಯ ಸಾಧನಾ ಸಮೀಕ್ಷೆ ನಡೆಸಲಾಗಿದೆ ತಂತ್ರಜ್ಞಾನ ಆಧಾರಿತ ಕಲಿಕಾ ಕಾರ್ಯಕ್ರಮ ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.
2020ರ ಒಳಗಾಗಿ ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ ಕಾರ್ಮಿಕ ಮುಕ್ತ ರಾಜ್ಯ ಎಂದು ಘೋಷಿಸಲು ಪರಿಷ್ಕøತ ಕ್ರಿಯಾ ಯೋಜನೆಯನ್ನು ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಅಸಂಘಟಿತ ಕಾರ್ಮಿಕರಿಗೆ ಅಪಘಾತ ಪರಿಹಾರ ಮತ್ತು ಭವಿಷ್ಯ ನಿಧಿ ಸೌಲಭ್ಯ ಒದಗಿಸಲು ಯೋಜಿಸಿದೆ ಎಂದರು.
ನೀಲಿ ಕ್ರಾಂತಿ:
ಮೀನುಗಾರಿಕೆ ಅಭಿವೃದ್ಧಿಗಾಗಿ ಮಹತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾರ್ಯಕ್ರಮದ ಸಂಯೋಜನೆಯೊಂದಿಗೆ ನೀಲಿ ಕ್ರಾಂತಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುವುದು. ಗ್ರಾಮೀಣ ರಸ್ತೆ ನಿರ್ವಹಣೆ ನೀತಿಯನ್ನು ಜಾರಿಗೆ ತರಲಾಗಿದ್ದು, ಪ್ರತಿ ವರ್ಷ ಹಂತ ಹಂತವಾಗಿ ಗ್ರಾಮೀಣ ರಸ್ತೆಗಳ ನವೀಕರಣ ಕಾರ್ಯವನ್ನು ಕೈಗೊಳ್ಳಲು ಯೋಜಿಸಲಾಗಿದೆ ಎಂದು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ