ಕರಾವಳಿಯಲ್ಲಿ ಇನ್ನೂ ಮೂರು ದಿನ ಮಳೆ

 

ಬೆಂಗಳೂರು, ಜು.7-ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ ಮೂರು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸರೆಡ್ಡಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾತಾವರಣದಲ್ಲಿ ಕೆಲವೊಂದು ಮಾರ್ಪಾಡುಗಳು ಉಂಟಾಗಿರುವುದರಿಂದ ಉಡುಪಿ, ದಕ್ಷಣ ಕನ್ನಡ ಜಿಲ್ಲೆಗಳಲ್ಲಿ ಅತಿಭಾರೀ ಮಳೆಯಾದ ವರದಿಯಾಗಿದೆ.ಮೈಸೂರು, ಕೊಡಗು, ಚಿಕ್ಕಮಗಳೂರು ಸೇರಿದಂತೆ ಮಲೆನಾಡು ಭಾಗದಲ್ಲಿ ಅಧಿಕ ಪ್ರಮಾಣದ ಮಳೆಯಾಗುತ್ತಿದೆ.ಇದರಿಂದ ನದಿ ಹಾಗೂ ಜಲಾಶಯಗಳ ನೀರಿನ ಪ್ರಮಾಣ ಏರಿಕೆಯಾಗಲಿದೆ ಎಂದರು.
ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಮೋಡಕವಿದ ವಾತಾವರಣ ಕಂಡುಬರುತ್ತಿದೆ.ಆದರೆ, ರಾಜ್ಯದ ಒಳನಾಡಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಗಳಿಲ್ಲ. ಆಗಾಗ್ಗೆ ಸಾಧಾರಣ ಇಲ್ಲವೇ ಹಗುರ ಮಳೆಯಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದರು.
ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಅಲ್ಲಲ್ಲಿ ಸಾಧಾರಣ ಪ್ರಮಾಣದಲ್ಲಿ ಮಳೆಯಾಗುವ ಮುನ್ಸೂಚನೆಗಳು ಕಂಡು ಬಂದಿದೆ. ಜೂನ್ ಕೊನೆಯ ವಾರ ಹಾಗೂ ಜುಲೈ ಮೊದಲ ವಾರದಲ್ಲಿ ಮುಂಗಾರು ನಿರೀಕ್ಷಿತ ಪ್ರಮಾಣಕ್ಕಿಂತ ದುರ್ಬಲವಾಗಿತ್ತು. ರಾಜ್ಯದ ಹಲವು ಕಡೆಗಳಲ್ಲಿ ಮಳೆಯ ಕೊರತೆಯೂ ಉಂಟಾಗಿತ್ತು. ಈಗ ಮತ್ತೆ ಮುಂಗಾರು ಚೇತರಿಸಿಕೊಂಡಿದೆ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ