ಹಿರೋಶಿಮಾ(ಎಎಫ್ಪಿ), ಜು.8- ಜಪಾನ್ನ ಹಿರೋಶಿಮಾ ವಲಯದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಉಂಟಾಗಿರುವ ಪ್ರವಾಹದಲ್ಲಿ 50ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ. ಕಳೆದ ಹಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಜನ ಜೀವನ ಅಸ್ತವ್ಯಸ್ತಗೊಂಡಿದ್ದು, ಇದು ದಶಕದ ದಾಖಲೆಯ ಮಳೆಯೆಂದು ಉಲ್ಲೇಖಿಸಲಾಗಿದೆ. ಪಶ್ಚಿಮ ಭಾಗದಲ್ಲಿ ಹೆಚ್ಚಿನ ಅನಾಹುತಗಳು ಸಂಭವಿಸಿದ್ದು, ಸಾವುನೋವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಪ್ರಕೃತಿ ವಿಕೋಪ ನಿರ್ವಹಣಾ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.
ನಾವು ಈ ಪರಿಸ್ಥಿತಿಯನ್ನು ನಿಭಾಯಿಸಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಎಂದು ಪ್ರಧಾನಮಂತ್ರಿ ಶಿಂಜೋ ಅಭಿ ತಿಳಿಸಿದ್ದಾರೆ. ತುರ್ತು ಸಭೆ ನಡೆಸಿದ ವೇಳೆ ಅಧಿಕಾರಿಗಳಿಂದ ಪರಿಸ್ಥಿತಿ ಕೈ ಮೀರುತ್ತಿರುವ ಆತಂಕ ವ್ಯಕ್ತವಾಗಿದ್ದರೂ ಜೀವಹಾನಿಗಳನ್ನು ತಪ್ಪಿಸಲು ಶಕ್ತಿ ಮೀರಿ ಪ್ರಯತ್ನಿಸುತ್ತಿರುವುದಾಗಿ ಹೇಳಿದ್ದಾರೆ. ಹತ್ತು ಸಾವಿರಕ್ಕೂ ಹೆಚ್ಚು ರಕ್ಷಣಾ ಸಿಬ್ಬಂದಿಗಳ ಜತೆಗೆ ಪೆÇಲೀಸರು ಹಾಗೂ ಸೇನಾ ಪಡೆಗಳು ಅಗತ್ಯ ನೆರವಿಗೆ ಧಾವಿಸಿವೆ. ಭೂ ಕುಸಿತದಿಂದ ರಸ್ತೆಗಳು ಮುಚ್ಚಿ ಹೋಗುತ್ತಿವೆ. ಸುಮಾರು ಎರಡು ಲಕ್ಷಕ್ಕೂ ಹೆಚ್ಚು ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.