
ಬೆಂಗಳೂರು, ಜು.9- ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅಭ್ಯರ್ಥಿಗಳು ಗೆಲ್ಲುವ ಸಮೀಪಕ್ಕೆ ಬಂದು ಪರಾಭವಗೊಂಡಿದ್ದೀರಿ. ಹಾಗೆಂದು ನಿರಾಶಭಾವ ತಳೆಯಬೇಡಿ. ಪಕ್ಷ ಹಾಗೂ ಕಾರ್ಯಕರ್ತರು ಸದಾ ನಿಮ್ಮೊಂದಿಗಿದ್ದಾರೆ. ಲೋಕಸಭೆ ಚುನಾವಣೆಗೆ ತಯಾರಾಗಿ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಧೈರ್ಯ ತುಂಬಿದ್ದಾರೆ.
ಲೋಕಸಭಾ ಚುನಾವಣೆ ಸಂಬಂಧ ಶಾಸಕರ ಭವನದಲ್ಲಿಂದು ವಿಧಾನಸಭೆ ಚುನಾವಣೆಯಲ್ಲಿ ಪರಾಭವಗೊಂಡ ಕಾಂಗ್ರೆಸ್ ಅಭ್ಯರ್ಥಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ರಾಜಕೀಯ ಬೆಳವಣಿಗೆಯಿಂದ ಗೆಲ್ಲುವ ಅಭ್ಯರ್ಥಿಗಳು ಕಡಿಮೆ ಅಂತರದಲ್ಲಿ ಪರಾಭವಗೊಂಡಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಈ ಬಾರಿ ಲೋಕಸಭೆ ಚುನಾವಣೆ ಎದುರಿಸಲಿದ್ದೇವೆ. ಹಾಗಾಗಿ ಪ್ರತಿಯೊಬ್ಬರೂ ತಮ್ಮ ತಮ್ಮ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ಕೆಲಸ ಮಾಡುವಂತೆ ಸೂಚನೆ ನೀಡಿದರು.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸದೃಢಗೊಂಡು ವಿಧಾನಸಭೆ ಚುನಾವಣೆಯಲ್ಲಿ ಆದ ಅಷ್ಟೂ ನಷ್ಟವನ್ನುತುಂಬಬೇಕಿದೆ. ಈ ನಿಟ್ಟಿನಲ್ಲಿ ಎಲ್ಲ ಮುಖಂಡರು, ಕಾರ್ಯಕರ್ತರು ಸಕ್ರಿಯರಾಗುವಂತೆ ಕರೆ ನೀಡಿದರು.
ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ನಿಯೋಜಿತ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಕಾಗೋಡು ತಿಮ್ಮಪ್ಪ ಮತ್ತಿತರರಿದ್ದರು.