ನವದೆಹಲಿ, ಜು.10- ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಹಾಗೂ ಅವರ ಪುತ್ರ ಕಾರ್ತಿ ಬಂಧನಕ್ಕೆ ನೀಡಿದ್ದ ತಡೆಯಾಜ್ಞೆಯನ್ನು ದೆಹಲಿ ಹೈಕೋರ್ಟ್ ಮತ್ತೆ ಮುಂದುವರಿಸಿದೆ. ಭ್ರಷ್ಟಾಚಾರದ ಆರೋಪಕ್ಕೆ ಗುರಿಯಾಗಿರುವ ಚಿದಂಬರಂ ಮತ್ತು ಕಾರ್ತಿ ಅವರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸುವ ಅವಶ್ಯಕತೆ ಇರುವ ಹಿನ್ನೆಲೆಯಲ್ಲಿ ತಮ್ಮ ವಶಕ್ಕೆ ಪಡೆದುಕೊಳ್ಳಲು ಅನುಮತಿ ನೀಡುವಂತೆ ಸಿಬಿಐ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿತ್ತು. ಸಿಬಿಐ ವಾದ-ವಿವಾದ ಆಲಿಸಿದ ದೆಹಲಿ ಹೈಕೋರ್ಟ್ ಚಿದಂಬರಂ ಹಾಗೂ ಕಾರ್ತಿ ಅವರನ್ನು ಬಂಧಿಸದಿರುವಂತೆ ತಡೆಯಾಜ್ಞೆ ನೀಡಿತ್ತು. ನ್ಯಾಯಾಲಯ ನೀಡಿದ ತಡೆಯಾಜ್ಞೆ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಇಂದು ಮತ್ತೆ ವಿಚಾರಣೆ ನಡೆಸಿದ ನ್ಯಾಯಾಲಯ ಆಗಸ್ಟ್ 7ರ ವರೆಗೂ ಕಾರ್ತಿ ಮತ್ತು ಚಿದಂಬರಂ ಅವರನ್ನು ಬಂಧಿಸದಂತೆ ಆದೇಶ ಹೊರಡಿಸಿ ವಿಚಾರಣೆಯನ್ನು ಮುಂದೂಡಿದೆ. ಏರ್ಸೆಲ್-ಮ್ಯಾಕ್ಸಿಸ್ ಹಗರಣದಲ್ಲಿ ಚಿದಂಬರಂ ಮತ್ತು ಕಾರ್ತಿ ಅವರು ಪ್ರಮುಖ ಆರೋಪಿಗಳಾಗಿದ್ದು, ಇಬ್ಬರ ವಿರುದ್ಧ ದೋಷಾರೋಪಣೆ ಪಟ್ಟಿ ಸಿದ್ಧಪಡಿಸಿರುವ ಸಿಬಿಐ ಹೆಚ್ಚಿನ ವಿಚಾರಣೆಗೆ ಅವರನ್ನು ವಶಕ್ಕೆ ತೆಗೆದುಕೊಳ್ಳಲು ನ್ಯಾಯಾಲಯದ ಕದ ತಟ್ಟಿತ್ತು.