ಮಾದಕ ವಸ್ತುಗಳ ದಂಧೆಗೆ ಕಡಿವಾಣ ಹಾಕಲು ಒತ್ತಾಯ

 

ಬೆಂಗಳೂರು, ಜು.10- ರಾಜ್ಯದಲ್ಲಿ ತೀವ್ರ ಆತಂಕ ಸೃಷ್ಟಿಸಿರುವ ಮಾದಕ ವಸ್ತು ದಂಧೆಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಗಂಭೀರ ಪ್ರಯತ್ನ ನಡೆಸಿಲ್ಲ ಎಂದು ವಿಧಾನಪರಿಷತ್‍ನಲ್ಲಿಂದು ಬಿಜೆಪಿ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಪ್ರಶ್ನೋತ್ತರ ಕಲಾಪದಲ್ಲಿ ಇಂದು ವಿಷಯ ಪ್ರಸ್ತಾಪಿಸಿದ ಪ್ರತಾಪ್‍ಚಂದ್ರಶೆಟ್ಟಿ, ಶಾಲಾ ಮಕ್ಕಳು ಸೇರಿದಂತೆ ಯುವ ಸಮುದಾಯ ಮಾದಕ ವ್ಯಸನಿಗಳಾಗುತ್ತಿದ್ದಾರೆ. ಇದು ತೀವ್ರ ಕಳವಳಕಾರಿ ವಿಷಯವಾಗಿದ್ದು, ರಾಜ್ಯ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವ ಹಾಗೂ ಡಿಸಿಎಂ ಡಾ.ಜಿ.ಪರಮೇಶ್ವರ್, ಕರ್ನಾಟಕವನ್ನು ಉಡ್ತಾ ಪಂಜಾಬ್ ಆಗಲು ಬಿಡುವುದಿಲ್ಲ. ಮಾದಕ ವಸ್ತು ದಂಧೆಗೆ ಕಡಿವಾಣ ಹಾಕುತ್ತೇವೆ. ಇದರಲ್ಲಿ ಯಾವುದೇ ಮುಲಾಜಿಗೆ ಒಳಗಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಆದರೂ ಇದಕ್ಕೆ ಸುಮ್ಮನಾಗ ಇತರೆ ಸದಸ್ಯರು ಏರು ದನಿಯಲ್ಲೇ, ನೀವು ಗೌರಿ ಹತ್ಯೆ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಹೇಳಿಕೊಂಡು ಬೆನ್ನು ತಟ್ಟಿಕೊಳ್ಳುತ್ತಿದ್ದೀರಿ. ಆದರೆ, ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳು, ಸೈಬರ್ ಕ್ರೈಂ ಹಾಗೂ ಮಾದಕ ವಸ್ತು ದಂಧೆ ಬಗ್ಗೆ ಸರಿಯಾಗಿ ಕ್ರಮ ಕೈಗೊಳ್ಳುತ್ತಿಲ್ಲ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುತ್ತಿಲ್ಲ ಎಂದರು.
ಇದನ್ನು ತಳ್ಳಿ ಹಾಕಿದ ಪರಮೇಶ್ವರ್ ಅವರು, ಕಳೆದ ಮೂರು ವರ್ಷಗಳಲ್ಲಿ 2,484 ದಾಖಲಾಗಿದ್ದವು. ಅವುಗಳಲ್ಲಿ 142 ಪ್ರಕರಣಗಳಿಗೆ ಶಿಕ್ಷೆ ವಿಧಿಸಲಾಗಿದೆ. 40 ಪ್ರಕರಣಗಳು ತನಿಖಾ ಹಂತದಲ್ಲಿವೆ ಎಂದು ತಿಳಿಸಿದರು.
ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಲು ಎಲ್ಲ ಕ್ರಮ ಕೈಗೊಳ್ಳಲಾಗಿದೆ. ಗುಪ್ತಚರ ಇಲಾಖೆಯನ್ನು ಕೂಡ ಚುರುಕುಗೊಳಿಸಲಾಗುತ್ತಿದೆ ಎಂದು ಪರಮೇಶ್ವರ್ ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ