
ಬೆಂಗಳೂರು, ಜು.10- ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಮೊದಲ ಹಂತದಲ್ಲಿ 5 ಸಾವಿರ ನಿವೇಶನಗಳನ್ನು ಸಾರ್ವಜನಿಕರಿಗೆ ಈಗಾಗಲೇ ಹಂಚಿಕೆ ಮಾಡಿದ್ದು, ಎರಡನೆ ಹಂತದಲ್ಲೂ 5 ಸಾವಿರ ನಿವೇಶನಗಳ ಹಂಚಿಕೆ ಮಾಡಲು ಉದ್ದೇಶಿಸಲಾಗಿದೆ ಎಂದು ಗೃಹ ಹಾಗೂ ನಗರಾಭಿವೃದ್ಧಿ ಸಚಿವರೂ ಆದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ವಿಧಾನ ಪರಿಷತ್‍ಗೆ ತಿಳಿಸಿದರು.
ಸದಸ್ಯ ರಿಜ್ವಾನ್ ಅರ್ಷದ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ನಿವೇಶನ ಹಂಚಿಕೆ ಪ್ರಕ್ರಿಯೆ ಈಗಾಗಲೇ ಪೂರ್ಣಗೊಂಡಿದ್ದು, ತಾತ್ಕಾಲಿಕ ಹಂಚಿಕೆ ಪಟ್ಟಿಯನ್ನು ಪ್ರಾಧಿಕಾರದ ಅಂತರ್ಜಾಲದಲ್ಲಿ ಪ್ರಚುರಪಡಿಸಿ ಸಾರ್ವಜನಿಕರಿಂದ ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ಲಿಖಿತ ರೂಪದಲ್ಲಿ ದೂರು ಸಲ್ಲಿಸಲು 10.7.2018ರೊಳಗೆ ಅವಕಾಶ ಕಲ್ಪಿಸಲಾಗಿದೆ.
ಸಾರ್ವಜನಿಕರು ಯಾವುದಾದರೂ ಆಕ್ಷೇಪಣೆ ಸಲ್ಲಿಸಿದ್ದಲ್ಲಿ ನಿಯಮಾನುಸಾರ ಪರಿಶೀಲಿಸಿ, ಅಂತಿಮ ಪಟ್ಟಿ ಪ್ರಕಟಿಸಲಾಗುವುದು. ಒಟ್ಟಾರೆ ಒಂದು ವಾರದೊಳಗೆ ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವರು ಭರವಸೆ ನೀಡಿದರು.
ಅಲ್ಲದೆ, ಬಡಾವಣೆಯಲ್ಲಿ ಅಗತ್ಯ ಮೂಲಭೂತ ಸೌಲಭ್ಯ ಒದಗಿಸುವುದಾಗಿ ಅವರು ಹೇಳಿದರು.