ಪೆಟ್ರೋಲ್, ಡೀಸಲ್ ಬೆಲೆಯನ್ನು ಪರಿಷ್ಕರಣೆ ಮಾಡಬೇಕೆಂದು ಒತ್ತಾಯ

 

ಬೆಂಗಳೂರು, ಜು.11-ಪೆಟ್ರೋಲ್, ಡೀಸಲ್ ಬೆಲೆಯನ್ನು ಪರಿಷ್ಕರಣೆ ಮಾಡಬೇಕೆಂದು ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿಂದು ಒತ್ತಾಯಿಸಲಾಗಿದೆ.
ರೈತರ ಸಾಲ ಮನ್ನಾ ಯೋಜನೆಗಾಗಿ ಆರ್ಥಿಕ ಸಂಪನ್ಮೂಲ ಕ್ರೋಢೀಕರಿಸಲು ಮುಖ್ಯಮಂತ್ರಿ ಕುಮಾರಸ್ವಾಮಿ ಪೆಟ್ರೋಲ್ ಮತ್ತು ಡೀಸಲ್ ಮೇಲೆ ತೆರಿಗೆ ವಿಧಿಸಿದ್ದರು. ಇಂದು ಶಾಸಕಾಂಗ ಸಭೆಯಲ್ಲಿ ಈ ವಿಷಯ ಗಂಭೀರ ಚರ್ಚೆಯಾಗಿ ಜನಸಾಮಾನ್ಯರಿಗೆ ಹೊರೆಯಾಗುವ ಪೆಟ್ರೋಲ್, ಡೀಸಲ್ ದರವನ್ನು ಪರಿಷ್ಕರಣೆ ಮಾಡುವಂತೆ ಒತ್ತಾಯಿಸಲಾಗಿದೆ.
ಸಭೆಯ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಚಿವ ಹಾಗೂ ಹಿರಿಯ ಶಾಸಕ ಎಚ್.ಕೆ.ಪಾಟೀಲ್ ಅವರು, ಪೆಟ್ರೋಲ್ ಡೀಸಲ್ ಮೇಲಿನ ಹೆಚ್ಚುವರಿ ತೆರಿಗೆ ಪರಿಷ್ಕರಿಸಿ ಎಂದು ಸಭೆಯಲ್ಲಿ ಒತ್ತಾಯಿಸಲಾಗಿದೆ. ಕಾಂಗ್ರೆಸ್ ಪಕ್ಷ ಈ ನಿಟ್ಟಿನಲ್ಲಿ ತನ್ನ ನಿಲುವನ್ನು ದೃಢೀಕರಿಸಿಕೊಂಡಿದೆ ಎಂದು ಹೇಳಿದರು.
ಮುಖ್ಯಮಂತ್ರಿ ಕುಮಾರಸ್ವಾಮಿ ಮಂಡಿಸಿರುವ ಬಜೆಟ್‍ನಲ್ಲಿ ಅಲ್ಪಸಂಖ್ಯಾತರಿಗೆ ಅನ್ಯಾಯ, ಉತ್ತರ ಕರ್ನಾಟಕ ಭಾಗಕ್ಕೆ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮತ್ತು ಸಾಲ ಮನ್ನಾದಲ್ಲಿ ಪ್ರಾದೇಶಿಕವಾಗಿ ಆಗುತ್ತಿರುವ ತೊಂದರೆಗಳ ಬಗ್ಗೆ ಚರ್ಚಿಸಲಾಗಿದೆ ಎಂದರು.
ಸಾಲ ಮನ್ನಾ ಯೋಜನೆಯ ಲಾಭ ಕರಾವಳಿ, ಉತ್ತರ ಕರ್ನಾಟಕ ಭಾಗಗಳ ರೈತರಿಗೂ ಆಗಬೇಕು. ಪ್ರಾದೇಶೀಕವಾಗಿ ರೈತರು ಬೇರೆ ಬೇರೆ ರೀತಿಯಲ್ಲಿ ಸಾಲ ಪಡೆಯುತ್ತಾರೆ. ಅದನ್ನು ಗಮನದಲ್ಲಿಟ್ಟುಕೊಂಡು ಎಲ್ಲರಿಗೂ ಅನುಕೂಲವಾಗುವಂತೆ ಯೋಜನೆಯನ್ನು ಜಾರಿಗೆ ತರುವಂತೆ ಸಲಹೆ ನೀಡಲಾಗಿದೆ. ಬಜೆಟ್‍ನಲ್ಲಿ ಅಲ್ಪಸಂಖ್ಯಾತರಿಗೆ ಯಾವುದೇ ಯೋಜನೆಗಳನ್ನು ಘೋಷಿಸಿಲ್ಲ. ಅನುದಾನ ಮೀಸಲಿಟ್ಟಿಲ್ಲ. ಇದು ತಪ್ಪು ಸಂದೇಶ ಹೋಗುತ್ತದೆ. ಕಾಂಗ್ರೆಸ್ ಪಕ್ಷಕ್ಕೆ ಸಮ್ಮಿಶ್ರ ಸರ್ಕಾರಕ್ಕೆ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ವಿಷಯದಲ್ಲೂ ತಪ್ಪು ಸಂದೇಶ ರವಾನೆಯಾಗುವುದು ಬೇಡ ಎಂದು ಹೇಳಿದರು.
ಉತ್ತರ ಕರ್ನಾಟಕ ಭಾಗಕ್ಕೆ ಯಾವುದೇ ಯೋಜನೆ ಘೋಷಿಸದಿರುವುದನ್ನು ಪ್ರಸ್ತಾಪಿಸಿದ್ದೇನೆ. ನಾನು ಪ್ರಸ್ತಾಪಿಸಿದ ಮೂರು ವಿಷಯಗಳಿಗೂ ಸಭೆಯಲ್ಲಿ ಸರ್ವಾನುಮತದ ಬೆಂಬಲ ವ್ಯಕ್ತವಾಗಿದೆ. ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಇದನ್ನು ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ಸರಿಪಡಿಸುವುದಾಗಿ ಭರವಸೆ ನೀಡಿದ್ದಾರೆ.
ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರೂ ಕೂಡ ನಮ್ಮ ಮಾತುಗಳಿಗೆ ದನಿಗೂಡಿಸಿದ್ದಾರೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ