ಮೈಸೂರು,ಜು.13- ಈ ಬಾರಿಯ ದಸರಾ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ.
ಉನ್ನತ ಶಿಕ್ಷಣ ಸಚಿವರಾದ ನಂತರ ಇದೇ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ ಜಿ.ಟಿ.ದೇವೇಗವೌಡರು ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ನಂತರ ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರೊಂದಿಗೆ ಮಾತನಾಡಿದರು.
ಈ ಬಾರಿ ರಾಜ್ಯಾದ್ಯಂತ ಉತ್ತಮ ಮಳೆಯಾಗಿದ್ದು, ರಾಜ್ಯದ ಬಹುತೇಕ ಜಲಾಶಯಗಳು ತುಂಬಿದ್ದು , ಉತ್ತಮ ಬೆಳೆಯಾಗುವ ನಿರೀಕ್ಷೆ ಇದೆ.ರೈತಾಪಿ ವರ್ಗದವರು ಸಂತಸದಿಂದ ಇದ್ದಾರೆ. ಹೀಗಾಗಿ ಈ ಬಾರಿ ದಸರಾವನ್ನು ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದರು.
ಇದೇ 20ರಿಂದ ಆಷಾಢ ಶುಕ್ರವಾರ ಪ್ರಾರಂಭವಾಗಲಿದ್ದು, ಅಂದು ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಲು ಮುಖ್ಯಮಂತ್ರಿ ಕುಮಾರಸ್ವಾಮಿ ಆಗಮಿಸಲಿದ್ದಾರೆ ಎಂದು ತಿಳಿಸಿದರು.
ನಂತರ ಕೆಆರ್‍ಎಸ್ , ಕಬಿನಿ ಜಲಾಶಯಗಳಿಗೆ ತೆರಳಿ ಬಾಗಿನ ಕೂಡ ಅರ್ಪಿಸಲಿದ್ದಾರೆ ಎಂದು ತಿಳಿಸಿದರು.
ಹಾಗೆಯೇ ಮೈಸೂರು ವಿವಿಗೆ ಅತಿ ಶೀಘ್ರದಲ್ಲೇ ಉಪ ಕುಲಪತಿಯನ್ನು ನೇಮಕ ಮಾಡಲಾಗುವುದು, 10 ಸಾವಿರ ಉಪನ್ಯಾಸಕರ ನೇಮಕಕ್ಕೆ ಕ್ರಮ ಕೈಗೊಂಡಿರುವುದಾಗಿ ಹೇಳಿದರು.
ಉನ್ನತ ಶಿಕ್ಷಣವನ್ನು ಗ್ರಾಮೀಣ ಪ್ರದೇಶಕ್ಕೂ ಕೊಂಡೊಯ್ಯುವ ಯೋಜನೆಗಳನ್ನು ಹಮ್ಮಿಕೊಳ್ಳುವುದಾಗಿ ಇದೇ ಸಂದರ್ಭದಲ್ಲಿ ತಿಳಿಸಿದರು.