ಮೈಸೂರು, ಜು.15-ಕೆಆರ್ಎಸ್ನಿಂದ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಷ್ಟ್ರೀಯ ವಿಪತ್ತು ತಂಡವನ್ನು ಕರೆಸಿಕೊಳ್ಳಲಾಗಿದೆ. ಕೃಷ್ಣರಾಜ ಜಲಾಶಯದ ಇಂದಿನ ಮಟ್ಟ 123.70 ಅಡಿಗಳು, ಜಲಾಶಯಕ್ಕೆ 43 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ 26 ಗೇಟ್ಗಳ ಮೂಲಕ 57 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿದು ಬಿಡಲಾಗುತ್ತಿದೆ. ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಪಾತ್ರದಲ್ಲಿನ ಜನ, ಜಾನುವಾರುಗಳ ರಕ್ಷಣೆಗಾಗಿ ಮುಂಜಾಗ್ರತಾ ಕ್ರಮವಾಗಿ ರಾಷ್ಟ್ರೀಯ ವಿಪತ್ತು ತಂಡವನ್ನು ಕರೆಸಿಕೊಳ್ಳಲಾಗಿದೆ. ಕಾವೇರಿ ನದಿ ಪಾತ್ರದಲ್ಲಿ ವಾಸಮಾಡುವ ಸಾರ್ವಜನಿಕರು ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಜಿಲ್ಲಾಧಿಕಾರಿ ಅಭಿರಾಮ್ ತಿಳಿಸಿದ್ದಾರೆ. ಕಾವೇರಿ ನದಿಗೆ ಸಾರ್ವಜನಿಕರು ಇಳಿಯದಂತೆ ಅವರು ಸೂಚಿಸಿದ್ದಾರೆ.