ರಾಮನಗರದಲ್ಲಿ ಆರೋಗ್ಯ ವಿವಿ ಕ್ಯಾಂಪಸ್ ಸ್ಥಾಪನೆ; ತೊಡಕು ನಿವಾರಣೆ- ಮುಖ್ಯಮಂತ್ರಿ ಕುಮಾರಸ್ವಾಮಿ

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ರಾಮನಗರ ಜಿಲ್ಲೆಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ನಂತರ ಜಿಲ್ಲಾ ಪಂಚಾಯತ್ ಆವರಣದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ, ಪ್ರಗತಿ ಪರಿಶೀಲನೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಮನಗರ ಜಿಲ್ಲೆಯ ಅಭಿವೃದ್ಧಿಗೆ ಆದ್ಯತೆ ನೀಡುವುದಾಗಿ ತಿಳಿಸಿದರು. ಈ ನಿಟ್ಟಿನಲ್ಲಿ ಪ್ರತಿ ತಿಂಗಳೂ ಜಿಲ್ಲೆಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸುವುದಲ್ಲದೆ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವುದಾಗಿ ತಿಳಿಸಿದರು.
ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕ್ಯಾಂಪಸ್ ರಾಮನಗರದಲ್ಲಿ ಸ್ಥಾಪನೆಯಾಗಲಿದೆ. ಇದಕ್ಕೆ ಸಂಬಂಧಿಸಿದಂತೆ ಇದ್ದ ಭೂ ಒತ್ತುವರಿ ಮತ್ತಿತರ ಸಮಸ್ಯೆಗಳನ್ನು ಬಗೆಹರಿಸಿದ್ದೇನೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ರೇಷ್ಮೆ ಬೆಳಗಾರರಿಗೆ ಬೆಂಬಲ ಬೆಲೆ ನೀಡುವ ಕುರಿತು ಸಹ ಚರ್ಚೆ ನಡೆಸಿದರು. ಜಲಸಂಪನ್ಮೂಲ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ. ಶಿವಕುಮಾರ್, ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ಮೊದಲಾದವರು ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ