ಗಳೂರು,ಜು.16- ರಾಜ್ಯ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ, ಪ್ರಚಲಿತ ರಾಜಕೀಯ ವಿದ್ಯಮಾನ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರೊಂದಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಇಂದು ಕೆಲ ಕಾಲ ಮಾತುಕತೆ ನಡೆಸಿದರು.
ಬಾಕಿ ಉಳಿದಿರುವ ಸಚಿವ ಸ್ಥಾನಗಳನ್ನು ಭರ್ತಿ ಮಾಡಲು ಸಚಿವ ಸಂಪುಟ ವಿಸ್ತರಣೆ, ನಿಗಮ ಮಂಡಳಿಗಳ ನೇಮಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪದೇ ಪದೇ ಬರೆಯುತ್ತಿರುವ ಪತ್ರ, ಸರ್ಕಾರದ ಕೆಲವು ಯೋಜನೆಗಳಿಗೆ ಅನುದಾನ ಕಡಿತ ಮಾಡಬೇಕಾಗಿರುವ ವಿಚಾರಗಳ ಬಗ್ಗೆ ಕುಮಾರಸ್ವಾಮಿಯವರು ಗೌಡರೊಂದಿಗೆ ಗಂಭೀರ ಚರ್ಚೆ ನಡೆಸಿದ್ದಾರೆ.
ಬಜೆಟ್ ಅಧಿವೇಶನದ ನಂತರದ ಪ್ರಚಲಿತ ರಾಜಕೀಯ ವಿದ್ಯಮಾನಗಳ ಬಗ್ಗೆಯೂ ಚರ್ಚೆ ನಡೆಸಿ ಮಾರ್ಗದರ್ಶನ ಪಡೆದಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ನಾಯಕರನ್ನು ಭೇಟಿಯಾಗಲು ನಾಳೆ ದೆಹಲಿಗೆ ತೆರಳುತ್ತಿದ್ದಾರೆ.
ರಾಜ್ಯದಲ್ಲಿ ನೂತನ ಬಜೆಟ್ ಮಂಡಿಸಿದ ನಂತರ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಅವರು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಭೇಟಿಯಾಗುತ್ತಿದ್ದು, ಸಂಪುಟ ವಿಸ್ತರಣೆ ಮತ್ತು ನಿಗಮಮಂಡಳಿಗೆ ನೇಮಕ ಮಾಡುವ ಬಗ್ಗೆ ಒಪ್ಪಿಗೆ ಪಡೆಯುವ ಸಾಧ್ಯತೆ ಇದೆ.
ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಗ್ರೀನ್ ಸಿಗ್ನಲ್ ಪಡೆದು ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿಪಡಿಸಿ ನಿಗಮ ಮಂಡಳಿ ನೇಮಕಕ್ಕೂ ಚಾಲನೆ ನೀಡಲಾಗುತ್ತದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಆಷಾಢ ಮಾಸದ ನಂತರ ಸಂಪುಟ ವಿಸ್ತರಣೆ ಹಾಗೂ ನಿಗಮ ಮಂಡಳಿಗೆ ನೇಮಕ ಮಾಡುವ ಬಗ್ಗೆಯೂ ಉಭಯ ಪಕ್ಷಗಳ ವರಿಷ್ಠರು ಸಮಾಲೋಚನೆ ಮಾಡಿದ್ದು , ಕಾಂಗ್ರೆಸ್ ಹೈಕಮಾಂಡ್ ಭೇಟಿಯ ನಂತರ ಈ ವಿಚಾರದಲ್ಲಿ ಸ್ಪಷ್ಟತೆ ಮೂಡಲಿದೆ ಎಂದು ಹೇಳಲಾಗಿದೆ.