ಕೆರೆ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕಠಿಣ ಕ್ರಮ – ಸಚಿವ ಜಿ.ಟಿ.ದೇವೇಗೌಡ

ಮೈಸೂರು,ಜು.16- ಕೆರೆ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಇಂದಿಲ್ಲಿ ತಿಳಿಸಿದ್ದಾರೆ.
ನಗರದ ಹೊರವಲಯದ ಇಲವಾಲ ಕೆರೆ ವೀಕ್ಷಣೆ ನಂತರ ಪತ್ರಕರ್ತರೊಂದಿಗೆ ಅವರು ಮಾತನಾಡುತ್ತಾ, ಕೆರೆ ಜಾಗವನ್ನು ಯಾರೇ ಒತ್ತುವರಿ ಮಾಡಿಕೊಂಡಿದ್ದರೂ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಮೈಸೂರಿನಾದ್ಯಂತ ಇರುವ ಎಲ್ಲ ಕೆರೆಗಳಿಗೂ ನೀರು ತುಂಬಿಸುವ ಕಾರ್ಯವನ್ನು ಶೀಘ್ರ ಕೈಗೊಳ್ಳುವುದಾಗಿ ಹೇಳಿದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬರೆದ ಪತ್ರದ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಅವರ ಪತ್ರಕ್ಕೆ ಸೂಕ್ತ ಉತ್ತರ ನೀಡಿದ್ದೇನೆ. ಅಂದು ಅವರದೇ ಸರ್ಕಾರವಿದ್ದಾಗ ವಿವಿಗೆ ನಾಮನಿರ್ದೇಶಕರನ್ನು ನೇಮಿಸಲಾಗಿತ್ತು. ಇದೀಗ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಿರುವುದರಿಂದ ಸೂಕ್ತ ವ್ಯಕ್ತಿಗಳನ್ನು ಆಯ್ಕೆ ಮಾಡಲಾಗುವುದು ಎಂದರು.
ಇಲವಾಲ ಕ್ಷೇತ್ರದಲ್ಲಿ ನಿನ್ನೆ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಪಿಡಿಒಗಳನ್ನು ತರಾಟೆಗೆ ತೆಗೆದುಕೊಂಡ ಬಗ್ಗೆ ಕೇಳಲಾದ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಪಿಡಿಒಗಳು ಬಡವರ ಕೆಲಸಗಳನ್ನು ಸರಿಯಾಗಿ ಮಾಡುತ್ತಿಲ್ಲ. ಬಡವರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಈ ಹಿಂದೆ ಸಿದ್ದರಾಮಯ್ಯನವರ ಸರ್ಕಾರದ ಅವಧಿಯಲ್ಲಿ ಇದ್ದಂತಹವರು. ಇವರು ಬಡವರ ಪರವಾಗಿ ಕೆಲಸ ಮಾಡದಿದ್ದರೆ ಮುಲಾಜಿಲ್ಲದೆ ಅವರ ವಿರುದ್ದ ಕ್ರಮ ಕೈಗೊಳ್ಳುವುದಾಗಿ ಗುಡುಗಿದರು. ಬಿಜೆಪಿ ಶಾಸಕ ಈಶ್ವರಪ್ಪ ಅವರು ಮುಖ್ಯಮಂತ್ರಿ ಹಾಗೂ ಮಾಜಿ ಪ್ರಧಾನಿ ಅವರ ಬಗ್ಗೆ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು ಜನರ ಭಾವನೆಗಳನ್ನು ಕುಮಾರಸ್ವಾಮಿ ಹಾಗೂ ದೇವೇಗೌಡರು ಅರಿತಿದ್ದಾರೆ. ಅವರಿಗೆ ಭಾವನಾತ್ಮಕವಾದಂತಹ ದುಃಖ ಬರುತ್ತದೆ. ಹಾಗಾಗಿ ಅವರು ಅಳುತ್ತಾರೆ ಎಂದರು. ಈ ಸಂದರ್ಭದಲ್ಲಿ ಜಿಟಿಡಿ ಅವರೊಂದಿಗೆ ಸಣ್ಣ ನೀರಾವರಿ ಸಚಿವ ಪುಟ್ಟರಾಜು ಜೊತೆಯಲ್ಲಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ