ಜೆಡಿಎಸ್‍ಗೆ ನಿರೀಕ್ಷಿತ ಬೆಂಬಲ ಸಿಕ್ಕಿಲ್ಲ ಎಂದು ಕಣ್ಣೀರು ಹಾಕಿದ್ದಾರೆ – ಸಚಿವ ಕೃಷ್ಣಭೆರೇಗೌಡ

ಕಲಬುರಗಿ, ಜು.17- ಮುಖ್ಯಮಂತ್ರಿ ಕುಮಾರಸ್ವಾಮಿಯವರ ಕಣ್ಣೀರಿಗೂ, ಕಾಂಗ್ರೆಸ್‍ಗೂ ಯಾವುದೇ ಸಂಬಂಧವಿಲ್ಲ. ಚುನಾವಣೆಯಲ್ಲಿ ಜೆಡಿಎಸ್‍ಗೆ ನಿರೀಕ್ಷಿತ ಬೆಂಬಲ ಸಿಕ್ಕಿಲ್ಲ ಎಂದು ಅವರು ಕಣ್ಣೀರು ಹಾಕಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣಭೆರೇಗೌಡ ಹೇಳಿದರು.
ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಯವರ ಕಣ್ಣೀರಿಗೆ ಕಾಂಗ್ರೆಸ್ ಕಾರಣವಲ್ಲ. ಅದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ಅವರ ಪಕ್ಷದ ಕಾರ್ಯಕ್ರಮದಲ್ಲಿ, ಚುನಾವಣೆಯಲ್ಲಿ ಅವರ ಪಕ್ಷಕ್ಕೆ ನಿರೀಕ್ಷಿತ ಬೆಂಬಲ ಸಿಕ್ಕಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಅದನ್ನು ಪ್ರತಿಪಕ್ಷ ಬಿಜೆಪಿ ಕಾಂಗ್ರೆಸ್‍ಗೆ ಥಳುಕು ಹಾಕಿದೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಕುಮಾರಸ್ವಾಮಿಯವರ ಕಣ್ಣೀರಿನ ಪ್ರಕರಣವನ್ನು ವಿನಾಕಾರಣ ದೊಡ್ಡದು ಮಾಡಲಾಗುತ್ತಿದೆ. ಉತ್ತಮ ಉದ್ದೇಶವಿಟ್ಟುಕೊಂಡು ನಾವು ಸಮ್ಮಿಶ್ರ ಸರ್ಕಾರ ರಚನೆ ಮಾಡಿದ್ದೇವೆ. ಸಮರ್ಥವಾಗಿ ಸರ್ಕಾರವನ್ನು ನಿಭಾಯಿಸುತ್ತೇವೆ ಎಂದು ಹೇಳಿದರು.
ಕುಮಾರಸ್ವಾಮಿಯವರ ಕಣ್ಣೀರಿಗೆ ಕಾಂಗ್ರೆಸ್ ನಾಯಕರೇ ಕಾರಣ ಎಂದು ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ ಅವರ ಹೇಳಿಕೆಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಅದು ಅವರ ವೈಯಕ್ತಿಕ ಎಂದು ಕೃಷ್ಣಭೆರೇಗೌಡ ತಿಳಿಸಿದ್ದಾರೆ. ಹಗುರವಾಗಿ ಮಾತನಾಡುವುದೇ ವಿರೋಧ ಪಕ್ಷದವರ ಕಾಯಕವಾಗಿದೆ. ಸಮ್ಮಿಶ್ರ ಸರ್ಕಾರದ ಮೇಲೆ ಮಹತ್ವದ ಜವಾಬ್ದಾರಿ ಇದೆ. ಅದನ್ನು ಅರಿತು ನಾವು ಕೆಲಸ ಮಾಡುತ್ತಿದ್ದೇವೆ. ವಿಪಕ್ಷದವರಿಗೆ ಯಾವುದೇ ಜವಾಬ್ದಾರಿ ಇಲ್ಲ. ಅವರು ಮನಸ್ಸಿಗೆ ಬಂದಂತೆ ಹೇಳಿಕೆ ನೀಡಿ ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ