ಮೈಸೂರು, ಜು.19- ವರ್ಷವಿಡೀ ದಸರಾ ವಸ್ತು ಪ್ರದರ್ಶನಕ್ಕೆ ಯೋಜನೆ ರೂಪಿಸುವಂತೆ ಪ್ರವಾಸೋದ್ಯಮ ಖಾತೆ ಸಚಿವ ಸಾ.ರಾ.ಮಹೇಶ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ದಸರಾ ವಸ್ತು ಪ್ರದರ್ಶನ ಕಚೇರಿಯಲ್ಲಿ ನಡೆದ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ 142ನೇ ಆಡಳಿತ ಮಂಡಳಿಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಸ್ತು ಪ್ರದರ್ಶನ ಪ್ರಾಧಿಕಾರವನ್ನು ಸಂಪೂರ್ಣವಾಗಿ ಅಭಿವೃದ್ಧಿಪಡಿಸಿ ವರ್ಷದ 365 ದಿನಗಳೂ ಪ್ರದರ್ಶನವನ್ನು ಆಯೋಜಿಸಬೇಕು. ಆಗ ಮೈಸೂರಿಗೆ ಆಗಮಿಸುವ ಪ್ರವಾಸಿಗರು ಸಹ ವಸ್ತು ಪ್ರದರ್ಶನಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದರು.
ಮೈಸೂರಿನಲ್ಲಿ ಯಾವ ಯೋಜನೆ ತಯಾರಿಸಿದರೂ ನಿರ್ವಹಣೆ ರಹಿತ ಪಾರಂಪರಿಕತೆಯಿಂದ ಕೂಡಿರಬೇಕು ಎಂದು ಸಲಹೆ ನೀಡಿದರು. ಚುಂಚನಕಟ್ಟೆ ಜಲಪಾತೋತ್ಸವವನ್ನು ಆಯೋಜಿಸಲಾಗುತ್ತಿದ್ದು, ದಸರಾ ಮುನ್ನವೇ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ತಿಳಿಸಿದರು. ಮೈಸೂರು ನಗರದ ಬೆಳವಣಿಗೆ ಹಿನ್ನೆಲೆಯಲ್ಲಿ ವಾಹನಗಳ ನಿಲುಗಡೆಗೆ ಹೆಚ್ಚಿನ ಆದ್ಯತೆ ನೀಡಬೆಕಾಗಿದ್ದು, ಈ ನಿಟ್ಟಿನಲ್ಲಿ ವಸ್ತು ಪ್ರದರ್ಶನ ಆವರಣದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.