ಮೈಸೂರು, ಜು.20- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಧ್ಯಾಹ್ನ ಚಾಮುಂಡಿಬೆಟ್ಟಕ್ಕೆ ಆಗಮಿಸಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು. ಆಷಾಢ ಮಾಸದ ಮೊದಲ ಶುಕ್ರವಾರವಾದ ಇಂದು ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ನಾಡಿಗೆ ಒಳಿತಾಗುವಂತೆ ಪ್ರಾರ್ಥಿಸಿದರು.
ಪತ್ನಿ ಅನಿತಾ ಅವರೊಂದಿಗೆ ಆಗಮಿಸಿದ ಮುಖ್ಯಮಂತ್ರಿಗಳನ್ನು ದೇವಾಲಯದ ಬಳಿ ಪೂರ್ಣಕುಂಭದೊಂದಿಗೆ ಸ್ವಾಗತಿಸಲಾಯಿತು. ಮೊದಲು ಪ್ರವೇಶದ್ವಾರದಲ್ಲಿದ್ದ ಗಣೇಶನಿಗೆ ನಮಿಸಿ ನಂತರ ಮಹಾಲಕ್ಷ್ಮಿ ಅಲಂಕಾರದಲ್ಲಿ ವಿರಾಜಮಾನಳಾಗಿದ್ದ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದರು. ಕುಮಾರಸ್ವಾಮಿಯವರು ಬೆಟ್ಟಕ್ಕೆ ಆಗಮಿಸಿದ ವೇಳೆ ದೇವಿ ದರ್ಶನಕ್ಕೆ ಸರದಿ ಸಾಲಿನಲ್ಲಿ ನಿಂತಿದ್ದ ಭಕ್ತರು ಸಿಎಂ ಪರವಾಗಿ ಘೋಷಣೆಗಳನ್ನು ಕೂಗಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ದೇವಿಯ ದರ್ಶನಕ್ಕೆ ಕೆಲಕಾಲ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿತ್ತು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಈ ಬಾರಿ ಮಳೆ ಚೆನ್ನಾಗಿ ಬಂದಿದೆ. ಎಲ್ಲ ಜಲಾಶಯಗಳೂ ತುಂಬಿವೆ. ಹಾಗಾಗಿ ತಲಕಾವೇರಿಯಲ್ಲಿ ಪೂಜೆ ಸಲ್ಲಿಸಿ ನಾಡಿಗೆ ಒಳಿತಾಗುವಂತೆ ಪ್ರಾರ್ಥಿಸಿದ್ದೇನೆ ಎಂದರು. ಚಾಮುಂಡಿಬೆಟ್ಟದ ನಂತರ ಕಬಿನಿ ಹಾಗೂ ಕೃಷ್ಣರಾಜಸಾಗರಕ್ಕೆ ಬಾಗಿನ ಅರ್ಪಿಸುತ್ತೇನೆ ಎಂದು ತಿಳಿಸಿದರು. ಆಷಾಢ ಮಾಸದ ಮೊದಲ ಶುಕ್ರವಾರವಾದುದರಿಂದ ತಾಯಿ ಚಾಮುಂಡಿಗೆ ಪೂಜೆ ಸಲ್ಲಿಸಿದ್ದೇನೆ. ಬೆಳೆ ಚೆನ್ನಾಗಿ ಆಗಲಿ. ರೈತರ ಸಂಕಷ್ಟ ಪರಹಾರವಾಗಿ ರಾಜ್ಯ ಸಮೃದ್ಧವಾಗಿರಲಿ ಎಂದು ದೇವಿಯಲ್ಲಿ ಪ್ರಾರ್ಥಿಸಿರುವುದಾಗಿ ಕುಮಾರಸ್ವಾಮಿ ತಿಳಿಸಿದರು. ಸಚಿವರಾದ ಜಿ.ಟಿ.ದೇವೇಗೌಡ, ಡಿ.ಕೆ.ಶಿವಕುಮಾರ್ ಸೇರಿದಂತೆ ಅಧಿಕಾರಿಗಳು ಹಾಜರಿದ್ದರು. ಚಾಮುಂಡಿಬೆಟ್ಟದಲ್ಲಿ ಬಿಗಿ ಪೆÇಲೀಸ್ ಬಂದೋಬಸ್ತ್ ಮಾಡಲಾಗಿತ್ತು.