ಗಂಗಾವತಿ, ಜು.20- ರಾಜ್ಯ ಸರ್ಕಾರದಿಂದ ಮಲತಾಯಿ ಧೋರಣೆ ಮುಂದುವರೆದರೆ ಉತ್ತರ ಕರ್ನಾಟಕದ ಪ್ರತ್ಯೇಕ ರಾಜ್ಯದ ಬೇಡಿಕೆಗೆ ನಾನೇ ನೇತೃತ್ವ ವಹಿಸಿಕೊಳ್ಳುತ್ತೇನೆ ಎಂದು ಶಾಸಕ ಬಿ.ಶ್ರೀರಾಮುಲು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಬಜೆಟ್ ಮಂಡನೆಯಲ್ಲಿ ಉತ್ತರ ಕರ್ನಾಟಕವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ಹಾಗಾಗಿ ಪ್ರತ್ಯೇಕ ರಾಜ್ಯದ ಹೋರಾಟಕ್ಕೆ ನಾನೇ ನೇತೃತ್ವ ವಹಿಸುವುದಾಗಿ ಹೇಳಿದರು.
ಕಳೆದ ಹಲವು ದಶಕಗಳಿಂದ ಉತ್ತರ ಕರ್ನಾಟಕ ಅದರಲ್ಲೂ ಹೈದರಾಬಾದ್ ಕರ್ನಾಟಕ ಸಂಪೂರ್ಣ ನಿರ್ಲಕ್ಷ್ಯಕ್ಕೊಳಗಾಗಿದೆ. ಮುಖ್ಯಮಂತ್ರಿಗಳು ತಮ್ಮ ಬಜೆಟ್ನಲ್ಲೂ ಉತ್ತರ ಕರ್ನಾಟಕ ಭಾಗಕ್ಕೆ ಯಾವುದೇ ಯೋಜನೆಗಳನ್ನು ಘೋಷಿಸಿಲ್ಲ. ಮತ್ತೆ ಈ ಭಾಗವನ್ನು ನಿರ್ಲಕ್ಷಿಸಲಾಗಿದೆ ಎಂದು ದೂರಿದರು.
ಪ್ರತ್ಯೇಕ ರಾಜ್ಯದ ಕೂಗಿನ ಬಗ್ಗೆ ಸುದ್ದಿಗಾರರಿಗೆ ಪ್ರತಿಯಿಸಿದ ಶ್ರೀರಾಮುಲು, ಅಭಿವೃದ್ಧಿಗೆ ಆದ್ಯತೆ ನೀಡಬೇಕಿದ್ದ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಹೀಗಾಗಿ ಪ್ರತ್ಯೇಕ ರಾಜ್ಯದ ಕೂಗು ಅನಿವಾರ್ಯವಾಗಲಿದೆ ಎಂದು ಎಚ್ಚರಿಕೆ ನೀಡಿದರು.