ನವದೆಹಲಿ, ಜು.23-ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಆಗ್ರಹಿಸಿ ರಾಜ್ಯಸಭೆಯಲ್ಲಿ ತೆಲುಗು ದೇಶಂ ಪಾರ್ಟಿ (ಟಿಡಿಪಿ) ಸದಸ್ಯರು ಇಂದು ಕೂಡ ಪ್ರತಿಭಟನೆ ನಡೆಸಿದ್ದರಿಂದ ಗದ್ದಲದ ವಾತಾವರಣ ನಿರ್ಮಾಣವಾಗಿ ಕಲಾಪವನ್ನು ಮಧ್ಯಾಹ್ನಕ್ಕೆ ಮುಂದೂಡಲಾಗಿದೆ.
ಸಂಸತ್ತಿನ ಮುಂಗಾರು ಅಧಿವೇಶನದ ನಾಲ್ಕನೇ ದಿನವಾದ ಇಂದು ಪ್ರಶ್ನೋತ್ತರ ಕಲಾಪ ಆರಂಭವಾಗುತ್ತಿದ್ದಂತೆ ಟಿಡಿಪಿ ನಾಯಕರಾದ ವೈ.ಎಸ್.ಚೌಧರಿ ಮತ್ತು ಸಿ.ಎಂ.ರಮೇಶ್ ನೇತೃತ್ವದಲ್ಲಿ ಪಕ್ಷದ ಸದಸ್ಯರು ಆಂಧ್ರಪ್ರದೇಶಕ್ಕೆ ವಿಶೇಷ ಪ್ಯಾಕೇಜ್‍ಗಾಗಿ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ಈ ಬಗ್ಗೆ ನಾಳೆ ಚರ್ಚೆಗೆ ಅವಕಾಶ ನೀಡುವುದಾಗಿ ಸಭಾಪತಿ ಡಾ.ಎಂ.ವೆಂಕಯ್ಯ ನಾಯ್ಡು ತಿಳಿಸಿದರಾದರೂ, ಪಕ್ಷದ ಸದಸ್ಯರು ಚೇರ್ಮನ್ ಪೀಠದ ಮುಂದಿನ ಸ್ಥಳಕ್ಕೆ ಧಾವಿಸಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ನಡುವೆ ಮಾತಿನ ಚಕಮಕಿ ನಡೆದು ಗದ್ದಲದ ವಾತಾವರಣ ನಿರ್ಮಾಣವಾಯಿತು. ಸ್ವಸ್ಥಾನಗಳಿಗೆ ತೆರಳಿ ಸುಗಮ ಕಲಾಪಕ್ಕೆ ಅವಕಾಶ ನೀಡುವಂತೆ ವೆಂಕಯ್ಯನಾಯ್ಡು ಪುನರಾವರ್ತಿತ ಮನವಿ ಮಾಡಿದರೂ ಪರಿಸ್ಥಿತಿ ತಿಳಿಗೊಳ್ಳಲಿಲ್ಲ. ಇದರಿಂದ ಸಭಾಪತಿ ಅವರು ಸದನವನ್ನು ಮಧ್ಯಾಹ್ನಕ್ಕೆ ಮುಂದೂಡಿದರು.