ಹಾವೇರಿ, ಜು.23-ಜಿಲ್ಲೆಯ ಹಿರೇಕೆರೂರು ತಾಲೂಕಿನ ರಟ್ಟೀಹಳ್ಳಿ ಗ್ರಾಮದಿಂದ ಮಳಲಿಗೆ ಹೋಗುವ ರಸ್ತೆ ಸಂಪರ್ಕ ಇಲ್ಲದ ಕಾರಣ ಶಾಲಾ ವಿದ್ಯಾರ್ಥಿಗಳು, ಗ್ರಾಮಸ್ಥರು ತೆಪ್ಪದಲ್ಲಿಯೇ ತೆರಳಬೇಕಾದ ಪರಿಸ್ಥಿತಿ ಉಂಟಾಗಿದ್ದು, ಸ್ವಲ್ಪ ಯಾಮರಿದರೆ ಪ್ರಾಣವನ್ನೇ ಕಳೆದುಕೊಳ್ಳಬೇಕಾದ ಸ್ಥಿತಿ ಇದೆ. ಇಷ್ಟಿದ್ದೂ ಜನಪ್ರತಿನಿಧಿಗಳು, ಅಧಿಕಾರಿಗಳು ಇತ್ತ ಗಮನಹರಿಸುತ್ತಿಲ್ಲವೆಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾರೀ ಮಳೆಯಿಂದಾಗಿ ಕುಮದ್ವತಿ ನದಿ ತುಂಬಿ ಹರಿಯುತ್ತಿದ್ದು, ತೆಪ್ಪದ ಎರಡು ಕಡೆ ಹಗ್ಗ ಕಟ್ಟಿ ತೆಪ್ಪವನ್ನು ಬಿಡಲಾಗುತ್ತಿದ್ದು, ಅದರಲ್ಲಿಯೇ ಶಾಲಾ ಮಕ್ಕಳು, ಗ್ರಾಮಸ್ಥರು ರಟ್ಟೀಹಳ್ಳಿಯಿಂದ ಮಳಲಿಗೆ ತೆರಳುವ ಸ್ಥಿತಿ ಇದೆ.
ಕೈಯಲ್ಲಿ ಜೀವ ಹಿಡಿದುಕೊಂಡು ಪ್ರಯಾಣಿಸುವ ಸ್ಥಿತಿ ಬಂದೊದಗಿದೆ. ಚುನಾವಣೆಗೆ ಬಂದಾಗ ಜನಪ್ರತಿನಿಧಿಗಳು ಸಮಸ್ಯೆ ಬಗೆಹರಿಸುವ ಭರವಸೆ ನೀಡುತ್ತಾರೆ. ಆದರೆ ಇದುವರೆಗೂ ಸಮಸ್ಯೆ ಬಗೆಹರಿದಿಲ್ಲ. ನಮ್ಮ ಗೋಳನ್ನು ಕೇಳುವವರು ಯಾರೂ ಇಲ್ಲ ಎಂದು ಗ್ರಾಮಸ್ಥರು ಹೇಳುತ್ತಾರೆ.