ಬೆಂಗಳೂರು, ಆ.2- ಲೋಕಸಭೆ ಚುನಾವಣೆ ತಯಾರಿ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಳೆಯಿಂದ ಮೂರು ದಿನಗಳ ಕಾಲ ಜಿಲ್ಲಾವಾರು ಸಭೆಗಳನ್ನು ಹಮ್ಮಿಕೊಂಡಿದೆ.
ಎಐಸಿಸಿ ಪ್ರಧಾನಕಾರ್ಯದರ್ಶಿ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ನಾಯಕ ಕೆ.ಸಿ.ವೇಣುಗೋಪಾಲ್ ಸಭೆಯ ನೇತೃತ್ವ ವಹಿಸಲಿದ್ದು, ನಾಳೆ ಬೆಳಗ್ಗೆ 11 ಗಂಟೆಯಿಂದ ರಾತ್ರಿ 8ಗಂಟೆಯವರೆಗೂ ನಿರಂತರವಾಗಿ ಸಭೆ ನಡೆಯಲಿದೆ.
ಉಡುಪಿ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಶಿವಮೊಗ್ಗ, ಮೈಸೂರು, ಮಂಡ್ಯ, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ ಕಾಂಗ್ರೆಸ್ ಜಿಲ್ಲೆಗಳ ಸಭೆ ನಡೆಯಲಿದೆ.
ಆ.4ರಂದು ಬಳ್ಳಾರಿ, ಕೊಪ್ಪಳ, ರಾಯಚೂರು, ಬೀದರ್, ಗುಲ್ಬರ್ಗ, ಬೆಳಗಾವಿ ಮತ್ತು ಚಿಕ್ಕೋಡಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಹಾವೇರಿ.
ಆ.5ರಂದು ಚಾಮರಾಜನಗರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಉತ್ತರ ಕನ್ನಡ, ದಾವಣಗೆರೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ ಜಿಲ್ಲೆಗಳ ಸಭೆಯನ್ನು ಆಯೋಜಿಸಲಾಗಿದೆ.
ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್‍ಖಂಡ್ರೆ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಲೋಕಸಭೆ ಚುನಾವಣೆಯ ತಯಾರಿ ಹಿನ್ನೆಲೆಯಲ್ಲಿ ಈ ಸಭೆ ಅತ್ಯಂತ ಮಹತ್ವ ಪಡೆದುಕೊಂಡಿದೆ. ಜೆಡಿಎಸ್ ಜತೆ ಹೊಂದಾಣಿಕೆ ಮಾಡಿಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದ್ದು, ಅದಕ್ಕೆ ಸಂಬಂಧಿಸಿದಂತೆ ಜಿಲ್ಲಾ ನಾಯಕರ ಅಭಿಪ್ರಾಯ ಸಂಗ್ರಹಿಸಲಾಗುವುದು ಮತ್ತು ಇದೇ ವೇಳೆ ಲೋಕಸಭೆ ಚುನಾವಣೆಯ ಅಭ್ಯರ್ಥಿಗಳ ಆಯ್ಕೆ ಬಗ್ಗೆಯೂ ಚರ್ಚೆ ನಡೆಯಲಿದೆ.
ನಿಗಮ ಮಂಡಳಿಗಳ ನೇಮಕಾತಿ ಕುರಿತು ಮುಖಂಡರೊಂದಿಗೆ ಕಾಂಗ್ರೆಸ್ ವರಿಷ್ಠರು ಸಮಾಲೋಚನೆ ನಡೆಸಲಿದ್ದಾರೆ. ಜೆಡಿಎಸ್, ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಹಾಗೂ ಮುಖಂಡರಿಗೆ ಸರಿಯಾದ ಸಹಕಾರ ಸಿಗುತ್ತಿಲ್ಲ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಖಂಡರ ಜತೆ ವೇಣುಗೋಪಾಲ್ ಚರ್ಚೆ ನಡೆಸಲಿದ್ದಾರೆ.
ಜಿಲ್ಲಾ ಉಸ್ತುವಾರಿ ನೇಮಕದ ನಂತರ ಪಕ್ಷ ಬಲವರ್ಧನೆಗೆ ಆದ್ಯತೆ ನೀಡುತ್ತಿದ್ದು, ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಲಾಗಿದ್ದು, ನಾಳೆಯಿಂದ ನಡೆಯುವ ಸಭೆಯಲ್ಲಿ ಜಿಲ್ಲಾವಾರು ಶಾಸಕರು, ಸಚಿವರು, ಸಂಸದರು, ಹಿಂದಿನ ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು, ಜಿಲ್ಲಾಧ್ಯಕ್ಷರು, ಕೆಪಿಸಿಸಿ ಉಸ್ತುವಾರಿ ಕಾರ್ಯದರ್ಶಿಗಳು ಭಾಗವಹಿಸಲಿದ್ದಾರೆ.