ಕಲುಷಿತ ನೀರು ಪೂರೈಕೆ ಬಗ್ಗೆ ಪತ್ರಿಕೆಗಳಲ್ಲಿ ವರದಿಯಾದರೂ ಸ್ವಯಂ ಪ್ರೇರಿತ ದೂರು ದಾಖಲು: ನ್ಯಾಯಮೂರ್ತಿ ಎಚ್.ಎಲ್.ದತ್ತು ಎಚ್ಚರಿಕೆ

 

ಬೆಂಗಳೂರು, ಆ.3- ಶುದ್ಧ ಕುಡಿಯುವ ನೀರು ಒದಗಿಸುವುದು ಸರ್ಕಾರದ ಕರ್ತವ್ಯವಾಗಿದ್ದು, ಕಲುಷಿತ ನೀರು ಪೂರೈಕೆ ಬಗ್ಗೆ ಪತ್ರಿಕೆಗಳಲ್ಲಿ ವರದಿಯಾದರೂ ಕೂಡ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲಾಗುವುದು ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ನ್ಯಾಯಮೂರ್ತಿ ಎಚ್.ಎಲ್.ದತ್ತು ತಿಳಿಸಿದರು.
ಸುದ್ದಿಗೋಷ್ಠಿಯನ್ನು ಉದೇಶಿಸಿ ಮಾತನಾಡಿದ ಅವರು, ಕಲುಷಿತ ನೀರು ಪೂರೈಕೆಯಾದ ಬಗ್ಗೆ ಲಿಖಿತ ದೂರು ಬಂದರೂ ಕೂಡ ದಾಖಲಿಸಿಕೊಳ್ಳಲಾಗುವುದು. ಕಲುಷಿತ ನೀರು ಪೂರೈಕೆ ಕೂಡ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತದೆ. ದೂರುಗಳು ದಾಖಲಾದ ನಂತರ ಸಂಬಂಧಪಟ್ಟ ಸಂಸ್ಥೆ ಅಥವಾ ಸರ್ಕಾರಕ್ಕೆ ನೋಟಿಸ್ ನೀಡಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಕೆಸಿವ್ಯಾಲಿಯಲ್ಲಿ ಕಲುಷಿತ ನೀರು ಪೂರೈಕೆಯಾಗಿರುವುದು ಕೂಡ ಮಾನವ ಹಕ್ಕುಗಳ ಉಲ್ಲಂಘನೆಯಾಗಲಿದೆ ಎಂದು ಹೇಳಿದರು.
ರಾಜ್ಯದಲ್ಲಿ ಮಾನವ ಹಕ್ಕುಗಳ ರಕ್ಷಣೆಗೆ ತೆಗೆದುಕೊಂಡಿರುವ ಕ್ರಮಗಳು ತೃಪ್ತಿಕರವಾಗಿವೆ. ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳು ಇಳಿಮುಖವಾಗಿವೆ ಎಂದು ತಿಳಿಸಿದರು.
ಪೂರ್ಣ ಪ್ರಮಾಣದ ಆಯೋಗ ನಿನ್ನೆ ಮತ್ತು ಇಂದು ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣ ವಿಚಾರಣೆ ನಡೆಸಿದ್ದು, 175 ಪ್ರಕರಣಗಳನ್ನು ಆಲಿಸಲಾಯಿತು. ಪೆÇಲೀಸರ ದೌರ್ಜನ್ಯ ಪ್ರಕರಣಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ದೌರ್ಜನ್ಯ ಪ್ರಕರಣಗಳು, ಬಡತನ ರೇಖೆಗಿಂತ ಕೆಳಗಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಲಾಯಿತು. ಇಂದು ಸಂಘ-ಸಂಸ್ಥೆಗಳೊಂದಿಗೆ ಸಮಾಲೋಚನೆ ನಡೆಸಲಾಯಿತು. ಸುಮಾರು 106 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ. ಒಂದು ಪ್ರಕರಣದಲ್ಲಿ 5 ಲಕ್ಷ ರೂ. ಪರಿಹಾರ ನೀಡುವಂತೆ ಆಯೋಗ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ ಎಂದರು.
ಕೆಲವು ಪ್ರಕರಣಗಳಲ್ಲಿ ಶೋಕಾಸ್ ನೋಟಿಸ್ ನೀಡಲಾಗಿದೆ. ಕಲುಷಿತ ನೀರು ಪೂರೈಕೆಗೆ ಸಂಬಂಧಿಸಿದಂತೆ ಪರಿಹಾರ ನೀಡಲೂ ಕೂಡ ಶಿಫಾರಸು ಮಾಡಲಾಗಿದೆ ಎಂದು ಅವರು ಹೇಳಿದರು.
ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣ ಪತ್ರಿಕೆಗಳಲ್ಲಿ ವರದಿಯಾದರೂ ಅಥವಾ ಲಿಖಿತ ದೂರು ಬಂದರೂ ಕೂಡ ಪ್ರಕರಣ ದಾಖಲಿಸಿಕೊಂಡು ಸಂಬಂಧಪಟ್ಟವರಿಗೆ ನೋಟಿಸ್ ಜಾರಿ ಮಾಡಲಿದೆ. ಮಾನವ ಹಕ್ಕುಗಳ ರಕ್ಷಣೆ ಹೆಸರಿನಲ್ಲಿ ಆಯೋಗದ ಲೋಗೋ ಮತ್ತು ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವವರ ವಿರುದ್ಧ ನೇರವಾಗಿ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.
ವೇದಿಕೆ ಹೆಸರಿನಲ್ಲಿ ದುರ್ಬಳಕೆ ಮಾಡಿಕೊಳ್ಳುವುದರ ಬಗ್ಗೆ ಪೆÇಲೀಸ್ ಇಲಾಖೆಗೆ ದೂರು ನೀಡಬಹುದು. ಈ ಬಗ್ಗೆ ಜನರಲ್ಲಿ ಜಾಗೃತಿ ಉಂಟಾಗಬೇಕು ಎಂದು ದತ್ತು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ