ಬೆಂಗಳೂರು, ಆ.4- ಸ್ವಚ್ಛ ಭಾರತ ಯೋಜನೆ ಅನುಷ್ಠಾನಕ್ಕಾಗಿ ಬಿಬಿಎಂಪಿಗೆ ಬಿಡುಗಡೆ ಮಾಡಲಾಗಿದ್ದ 150 ಕೋಟಿ ಅನುದಾನವನ್ನು ಬೇರೆ ಕಾಮಗಾರಿಗೆ ಬಳಕೆ ಮಾಡಿಕೊಂಡ ಪ್ರಕರಣದ ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಪ್ರಧಾನಮಂತ್ರಿ ಕಾರ್ಯಾಲಯ ರಾಜ್ಯಸರ್ಕಾರಕ್ಕೆ ಆದೇಶಿಸಿದೆ.
ಸ್ವಚ್ಛ ಭಾರತ ಯೋಜನೆ ಅನುಷ್ಠಾಕ್ಕಾಗಿ ಕೇಂದ್ರ ಸರ್ಕಾರ ನೀಡುವ ಅನುದಾನವನ್ನು ಯಾವುದೇ ಕಾರಣಕ್ಕೂ ಬೇರೆ ಕಾಮಗಾರಿಗಳಿಗೆ ಬಳಕೆ ಮಾಡಿಕೊಳ್ಳಬಾರದು ಎಂಬ ನಿಯಮವಿದೆ.
ಈ ನಿಯಮದನ್ವಯ ಬೆಂಗಳೂರಿನಲ್ಲಿ ಸಮಗ್ರ ಯೋಜನೆ ಅನುಷ್ಠಾನಕ್ಕಾಗಿ ಸುಮಾರು 150 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿತ್ತು.
ಆದರೆ, ಈ ಅನುದಾನವನ್ನು ಬಿಬಿಎಂಪಿ ಆಡಳಿತ ಸ್ವಚ್ಛ ಭಾರತ ಯೋಜನೆ ಅನುಷ್ಠಾನದ ಬದಲು ಬೇರೆ ಕಾಮಗಾರಿಗಳಿಗೆ ಹಣ ಬಳಕೆ ಮಾಡಿಕೊಂಡ ಆರೋಪಕ್ಕೆ ಗುರಿಯಾಗಿತ್ತು.
ಬಿಬಿಎಂಪಿ ಅಧಿಕಾರಿಗಳ ಬೇಜವಾಬ್ದಾರಿತನದ ವಿರುದ್ಧ ಮಾಹಿತಿ ಹಕ್ಕು ಅಧ್ಯಯನ ಕೇಂದ್ರದ ಅಧ್ಯಕ್ಷ ಎಸ್.ಅಮರೇಶ್ ಅವರು ಪ್ರಧಾನಮಂತ್ರಿಗಳ ಕಾರ್ಯಾಲಯಕ್ಕೆ ಪತ್ರ ಬರೆದಿದ್ದರು.
ಅಮರೇಶ್ ಪತ್ರಕ್ಕೆ ಪ್ರತಿಕ್ರಿಯಿಸಿರುವ ಪ್ರಧಾನಮಂತ್ರಿಗಳ ಕಾರ್ಯಾಲಯ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ಭಾಸ್ಕರ್ ಅವರಿಗೆ ಪತ್ರ ಬರೆದು ಅನುದಾನ ದುರ್ಬಳಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಸೂಚಿಸಿದೆ.
ಮಾತ್ರವಲ್ಲ, ಅನುದಾನ ದುರ್ಬಳಕೆ ಪ್ರಕರಣದ ಸಮಗ್ರ ತನಿಖೆ ನಡೆಸಿ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಹಾಗೂ ಎಸ್.ಅಮರೇಶ್ ಅವರಿಗೆ ಸಲ್ಲಿಸುವಂತೆಯೂ ಪ್ರಧಾನಮಂತ್ರಿಗಳ ಕಾರ್ಯಾಲಯ ಆದೇಶಿಸಿದೆ.