ಸ್ಥಳೀಯ ಸಂಸ್ಥೆಗಳ ಚುನಾವಣೆ ಕಾರ್ಯತಂತ್ರಗಳ ಬಗ್ಗೆ ಎಚ್.ಡಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ಸಭೆ

 

ಬೆಂಗಳೂರು,ಆ.5- ನಗರ ಸ್ಥಳೀಯ ಸಂಸ್ಥೆಗಳ ವೇಳಾಪಟ್ಟಿ ಪ್ರಕಟವಾದ ಬೆನ್ನಲ್ಲೇ ಚುನಾವಣೆ ಪೂರ್ವ ಸಿದ್ಧತೆಗೆ ಸಂಬಂಧಿಸಿದಂತೆ ಜೆಡಿಎಸ್ ಇಂದು ಮಹತ್ವದ ಸಭೆ ನಡೆಸಿತು.
ಪಕ್ಷದ ಕಚೇರಿಯಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದು, ಸ್ಥಳೀಯ ಸಂಸ್ಥೆಗಳ ಚುನಾವಣೆ ಸಿದ್ದತೆ, ಕಾರ್ಯತಂತ್ರಗಳ ಬಗ್ಗೆ ಗಂಭೀರ ಚರ್ಚೆ ನಡೆಸಲಾಗಿದೆ.
ಸಭೆಯಲ್ಲಿ ವಿಧಾನಸಭೆ ಹಾಗೂ ವಿಧಾನಪರಿಷತ್ ಸದಸ್ಯರು, ಪ್ರಮುಖ ಮುಖಂಡರು ಪಾಲ್ಗೊಂಡಿದ್ದು, ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಹೇಗೆ ಎದುರಿಸಬೇಕು, ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಇರುವುದರಿಂದ ಸರ್ಕಾರಕ್ಕೆ ಧಕ್ಕೆಯಾಗದ ರೀತಿಯಲ್ಲಿ ಚುನಾವಣೆಯನ್ನು ಹೇಗೆ ಎದುರಿಸಬೇಕೆಂಬುದರ ಬಗ್ಗೆ ಸಮಾಲೋಚನೆ ನಡೆಸಲಾಯಿತು.
ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ ಚುನಾವಣೆ ಘೋಷಣೆಯಾಗಿದ್ದು, ಅಭ್ಯರ್ಥಿಗಳ ಆಯ್ಕೆ ಹಾಗೂ ಚುನಾವಣಾ ಕಾರ್ಯತಂತ್ರಗಳ ಬಗ್ಗೆ ಗೌಡರು ಪಕ್ಷದ ಮುಖಂಡರಿಗೆ ಮಾರ್ಗದರ್ಶನ ನೀಡಿದರು.
ಮುಂಬರುವ ಲೋಕಸಭಾ ಚುನಾವಣೆಗೆ ಹಿನ್ನೆಲೆಯಲ್ಲಿ ನಗರ ಸ್ಥಳೀಯ ಸಂಸ್ಥೆ ಚುನಾವಣೆ ಪಕ್ಷದ ಬಲ ವೃದ್ದಿಸಲು ಹಾಗೂ ಸಾಮಥ್ರ್ಯ ಅರಿಯಲು ಸಹಕಾರಿಯಾಗಲಿದೆ ಎಂಬುದನ್ನು ಗೌಡರು ಸಭೆಯ ಗಮನಕ್ಕೆ ತಂದರು.
ಕಾಂಗ್ರೆಸ್‍ನೊಂದಿಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವುದರಿಂದಾಗುವ ಸಾಧಕ-ಬಾಧಕಗಳ ಬಗ್ಗೆಯೂ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಲಾಗಿದೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರೈತರ ಸಾಲ ಮನ್ನಾ ಘೋಷಣೆ ಮಾಡಿದ್ದು, ಅದರ ಬಗ್ಗೆ ಹೆಚ್ಚಿನ ಪ್ರಚಾರ ನೀಡಿ ಜನರಿಗೆ ಮನವರಿಕೆ ಮಾಡಿಕೊಡುವ ಮೂಲಕ ಸರ್ಕಾರದ ವರ್ಚಸ್ಸನ್ನು ಹೆಚ್ಚಿಸಬೇಕು. ಜೊತೆಗೆ ಅದರ ಲಾಭವನ್ನು ಚುನಾವಣಾ ಸಂದರ್ಭದಲ್ಲಿ ಪಡೆಯುವ ಬಗ್ಗೆ ಸಲಹೆ ಮಾಡಿದ್ದಾರೆ.
ಉತ್ತರ ಕರ್ನಾಟಕದ ಪ್ರತ್ಯೇಕತೆಯ ಕೂಗಿನ ಹಿನ್ನೆಲೆಯಲ್ಲಿ ಪಕ್ಷಕ್ಕೆ ಯಾವುದೇ ರೀತಿ ಧಕ್ಕೆಯಾಗದಂತೆ ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು. ಅಲ್ಲದೆ ಅಧಿಕಾರದಲ್ಲಿದ್ದಾಗ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಮಾಡರುವ ಕಾರ್ಯಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕು. ಬಿಜೆಪಿ ಈ ವಿಚಾರವನ್ನು ಪ್ರಮುಖವಾಗಿ ಪ್ರಸ್ತಾಪಿಸುತ್ತಿರುವುದರಿಂದ ಸಮರ್ಥವಾಗಿ ಉತ್ತರ ನೀಡುವ ಮೂಲಕ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗದಂತೆ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸುವಂತೆ ಗೌಡರು ಕಿವಿಮಾತು ಹೇಳಿದರು.
ಉತ್ತರ ಕರ್ನಾಟಕ ಭಾಗದಲ್ಲೂ ಪಕ್ಷಕ್ಕಾಗುತ್ತಿರುವ ಹಿನ್ನಡೆಯನ್ನು ತಪ್ಪಿಸಿ ಪ್ರತ್ಯೇಕತೆಯ ಕೂಗನ್ನು ನಿವಾರಿಸಬೇಕು. ಅದಕ್ಕೆ ಬೇಕಾದ ಪರ್ಯಾಯ ಕಾರ್ಯಕ್ರಮವನ್ನು ರೂಪಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು.
ಒಟ್ಟಾರೆ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಹೆಚ್ಚು ಅಭ್ಯರ್ಥಿಗಳನ್ನು ಗೆಲ್ಲಿಸುವ ಕಡೆಗೆ ಗಮನಹರಿಸಬೇಕು. ಸ್ಥಳೀಯ ಸಂಸ್ಥೆಗಳಲ್ಲೂ ಕೂಡ ಪಕ್ಷ ಅಧಿಕಾರಕ್ಕೆ ಬರುವಂತೆ ಕೆಲಸ ಮಾಡುವಂತೆ ಶಾಸಕರು ಹಾಗೂ ಮುಖಂಡರಿಗೆ ಗೌಡರು ನಿರ್ದೇಶನ ನೀಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ