ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಎಚ್.ವಿಶ್ವನಾಥ್

 

ಬೆಂಗಳೂರು,ಆ.5- ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಎಚ್.ವಿಶ್ವನಾಥ್ ಅವರನ್ನು ನೇಮಕ ಮಾಡುವ ಸಾಧ್ಯತೆಗಳಿವೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಶ್ವನಾಥ್ ಅವರ ಹೆಸರನ್ನೇ ಅಂತಿಮಗೊಳಿಸಲಾಗಿದೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.
ರಾಜ್ಯಾಧ್ಯಕ್ಷರಾಗಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಸರ್ಕಾರದ ಕಾರ್ಯದೊತ್ತಡ ಹೆಚ್ಚಾಗಿರುವುದರಿಂದ ರಾಜ್ಯಾಧ್ಯಕ್ಷ ಸ್ಥಾನವನ್ನು ಬೇರೊಬ್ಬರಿಗೆ ವಹಿಸಲು ಈಗಾಗಲೇ ತೀರ್ಮಾನಿಸಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನವನ್ನು ಸಚಿವ ಸ್ಥಾನದಿಂದ ವಂಚಿತರಾದ ವಿಶ್ವನಾಥ್ ಅವರಿಗೆ ನೀಡಲು ಪಕ್ಷದ ವರಿಷ್ಠರು ನಿರ್ಧರಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಈಗಾಗಲೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕೆಂಬ ಬಗ್ಗೆ ಪಕ್ಷದ ಮುಖಂಡರ ನಡುವೆ ಸಮಾಲೋಚನೆ ನಡೆಸಲಾಗಿದೆ. ಸಮರ್ಥವಾಗಿ ಪಕ್ಷವನ್ನು ಸಂಘಟಿಸಿ ಮುನ್ನಡೆಸುವ ಅನುಭವ ವಿಶ್ವನಾಥ್ ಅವರಿಗಿದೆ ಎಂಬ ಲೆಕ್ಕಾಚಾರ ಮಾಡಲಾಗಿದೆ.
ಮಾಜಿ ಶಾಸಕ ಮಧುಬಂಗಾರಪ್ಪ ಅವರನ್ನು ಕೂಡ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಬೇಕೆಂಬ ಪ್ರಸ್ತಾಪ ಪಕ್ಷದಲ್ಲಿ ಪ್ರಮುಖವಾಗಿ ಕೇಳಿಬಂದಿತ್ತು. ರಾಜ್ಯದೆಲ್ಲೆಡೆ ಪ್ರವಾಸ ಕೈಗೊಂಡು ಯುವ ಸಮುದಾಯವನ್ನು ಸಂಘಟಿಸುವ ಚಾಣಾಕ್ಷತನವನ್ನು ಮಧುಬಂಗಾರಪ್ಪ ಹೊಂದಿದ್ದಾರೆ ಎಂದು ಅಭಿಪ್ರಾಯವಿತ್ತು.
ಪಕ್ಷದಲ್ಲಿ ಆಂತರಿಕವಾಗಿ ರಾಜ್ಯಾಧ್ಯಕ್ಷರ ಬಗ್ಗೆ ಜೆಡಿಎಸ್ ರಾಜ್ಯಾಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಚರ್ಚೆ ನಡೆಸಿ ಮುಖಂಡರ ಅಭಿಪ್ರಾಯವನ್ನು ಕೂಡ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇಂದು ನಡೆದ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಶಾಸಕರ ಸಭೆಯಲ್ಲಿ ರಾಜ್ಯಾಧ್ಯಕ್ಷರ ನೇಮಕದ ಬಗ್ಗೆ ಚರ್ಚೆ ನಡೆಸಿದ್ದು , ಬಹುತೇಕ ವಿಶ್ವನಾಥ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಹೇಳಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ