ಬೆಂಗಳೂರು, ಆ.7- ದೆಹಲಿ ಪ್ರವಾಸದಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದು ಸಂಜೆ ರಾಜ್ಯದ ಬಿಜೆಪಿ ಸಂಸದರ ಸಭೆ ಕರೆದಿದ್ದು, ಲೋಕಸಭೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಯ ಕಾರ್ಯತಂತ್ರಗಳ ಸಭೆ ಚರ್ಚೆ ನಡೆಸುವ ಸಾಧ್ಯತೆ ಇದೆ.
ಕಳೆದ ರಾತ್ರಿ ದೆಹಲಿಗೆ ತೆರಳಿರುವ ಬಿ.ಎಸ್.ಯಡಿಯೂರಪ್ಪ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಅವಕಾಶ ಕೇಳಿದ್ದು, ಉಭಯ ನಾಯಕರೊಂದಿಗೆ ರಾಜ್ಯದ ರಾಜಕೀಯ ಸ್ಥಿತಿಗತಿಗಳು ಹಾಗೂ ಲೋಕಸಭಾ ಚುನಾವಣೆಯ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ.
ಪಕ್ಷ ಸಂಘಟನೆ, ಬಿಜೆಪಿ ವತಿಯಿಂದ ಹಮ್ಮಿಕೊಂಡಿರುವ ರಾಜ್ಯ ಪ್ರವಾಸ ಮತ್ತಿತರ ವಿಷಯಗಳ ಬಗ್ಗೆ ಸಂಸದರೊಂದಿಗೆ ಚರ್ಚೆ ನಡೆಸಲಿರುವ ಬಿ.ಎಸ್.ಯಡಿಯೂರಪ್ಪ , ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕೈಗೊಳ್ಳಬೇಕಾದ ಕಾರ್ಯತಂತ್ರದ ಕುರಿತು ಸಂಸದರಿಂದ ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ಮಾತ್ರವಲ್ಲ ಸಂಸದರು ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಪಡೆಯುವಂತೆ ಮಾಡುವುದು, ಇದಕ್ಕಾಗಿ ಕೈಗೊಳ್ಳಬೇಕಾದ ಪ್ರಚಾರ, ಮತ್ತಿತರ ವಿಷಯಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಇದಕ್ಕೂ ಮೊದಲು ಅವರು ರಾಜ್ಯದ ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಸಚಿವರನ್ನು ಭೇಟಿಯಾಗುವ ಸಾಧ್ಯತೆ ಇದೆ.