ಬೆಂಗಳೂರು, ಆ.7- ತುಮಕೂರು ತಾಲೂಕಿನ ಎಲ್ಲಾ ಕೆರೆಗಳಿಗೆ ಪೂರ್ಣ ಪ್ರಮಾಣದಲ್ಲಿ ನೀರು ಹರಿಸಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಹೆಬ್ಬೂರು-ಗೂಳೂರು ಏತನೀರಾವರಿ ಹೋರಾಟ ಸಮಿತಿ ಇಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿಂದು ಹೇಮಾವತಿ ನೀರಿಗಾಗಿ ಹೋರಾಟ ಸಮಿತಿ ಸಂಚಾಲಕರಾದ ಮಾಜಿ ಶಾಸಕ ಎಚ್.ಲಿಂಗಪ್ಪ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರು ತಾಲೂಕಿನ ಎಲ್ಲಾ ಕೆರೆಗಳಿಗೆ ಪೂರ್ಣ ಪ್ರಮಾಣದಲ್ಲಿ ನೀರು ತುಂಬಿಸಲು ಕ್ರಮಕೈಗೊಂಡು ಸತತ ಬರಗಾಲಕ್ಕೆ ತುತ್ತಾಗಿರುವ ರೈತರ ಬವಣೆ ತಪ್ಪಿಸಬೇಕು. ಈಗಾಗಲೇ ಪೈಪ್ಲೈನ್ ಅಳವಡಿಸಿರುವ ಎಲ್ಲಾ ಕೆರೆಗಳಿಗೆ ನೀರು ಹರಿಸಬೇಕು, ಅಣೆಕಟ್ಟೆಗಳು ತುಂಬಿದ ವರ್ಷದಲ್ಲಾದರೂ, ಬೇಡಿಕೆ ಈಡೇರಿಸಲು ಮನವಿ ಮಾಡಲಾಗಿದೆ ಎಂದು ಅವರು ಹೇಳಿದರು.
ತುಮಕೂರು ಜಿಲ್ಲೆಗೆ 25 ಟಿಎಂಸಿ ಅಡಿ ನೀರು ಹಂಚಿಕೆ ಮಾಡಬೇಕೆಂದು ಮುಖ್ಯಮಂತ್ರಿಯವರಿಗೆ ಮನವಿ ಮಾಡಲಾಗಿದೆ ಎಂದರು.
ಮನವಿ ಸ್ವೀಕರಿಸಿರುವ ಕುಮಾರಸ್ವಾಮಿ ಅವರು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಅವರು ಹೇಳಿದರು.