ಬೆಂಗಳೂರು, ಆ.7- ತೆಂಗು ನಾರು ಅಭಿವೃದ್ಧಿ ಮಂಡಳಿಗಳನ್ನು ಪುನಃಶ್ಚೇತನಗೊಳಿಸಲು ಉದ್ದೇಶಿಸಲಾಗಿದೆ ಎಂದು ಸಣ್ಣ ಕೈಗಾರಿಕೆಗಳ ಸಚಿವ ಎಸ್.ಆರ್.ಶ್ರೀನಿವಾಸ್ ತಿಳಿಸಿದರು.
ಜೆಡಿಎಸ್ ಕೇಂದ್ರ ಕಚೇರಿ ಜೆ.ಪಿ.ಭವನದಲ್ಲಿ ಕಾರ್ಯಕರ್ತರು ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಎರಡು ತೆಂಗು ನಾರು ಅಭಿವೃದ್ಧಿ ಮಂಡಳಿಗಳಿದ್ದು, ಅವುಗಳ ಪುನಃಶ್ಚೇತನಕ್ಕೆ ವಿಸ್ತೃತ ಯೋಜನಾ ವರದಿ ಸಿದ್ದಪಡಿಸುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಿರ್ದೇಶನ ನೀಡಿದ್ದಾರೆ. ಅದರಂತೆ ವರದಿ ತಯಾರಿಸಿ ಮಂಡಳಿಗಳನ್ನು ಪುನಶ್ಚೇತನಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಇದಕ್ಕಾಗಿ 300ರಿಂದ 400ಕೋಟಿ ರೂ. ಅನುದಾನ ನೀಡುವುದಾಗಿ ಸಿಎಂ ಭರವಸೆ ನೀಡಿದ್ದಾರೆ ಎಂದು ಹೇಳಿದರು.
ನೆರೆಯ ತಮಿಳುನಾಡು ಮತ್ತು ಕೇರಳ ರಾಜ್ಯದಲ್ಲಿರುವ ತೆಂಗು ನಾರು ಅಭಿವೃದ್ಧಿ ಮಂಡಳಿಗಳು ಲಾಭದಾಯಕವಾಗಿವೆ. ನಮ್ಮ ರಾಜ್ಯದಲ್ಲಿ ಕೇವಲ 50 ಪೈಸೆಗೆ ತೆಂಗಿನ ಕಚ್ಛಾ ಸಾಮಗ್ರಿಯನ್ನು ಪಡೆದು ತಮಿಳುನಾಡಿನಲ್ಲಿ ಅಭಿವೃದ್ಧಿಪಡಿಸಿ 32ರೂ.ವರೆಗೂ ಗಳಿಸಲಾಗುತ್ತಿದೆ. ಅದೇ ರೀತಿ ನಮ್ಮ ರಾಜ್ಯದಲ್ಲೂ ತೆಂಗಿನ ಕಚ್ಛಾ ಸಾಮಗ್ರಿಗಳನ್ನು ಬಳಸಿ ಸಣ್ಣ ಸಣ್ಣ ಕೈಗಾರಿಕೆ ಸ್ಥಾಪಿಸಲು ಪೆÇ್ರೀ ನೀಡಲಾಗುವುದು ಎಂದರು.
ಸ್ವಉದ್ಯೋಗ ಕೈಗೊಳ್ಳುವವರಿಗೆ ಶೇ.50ರಷ್ಟು ಸಬ್ಸಿಡಿ ನೀಡಲು ಅವಕಾಶವಿದೆ. ಸುಮಾರು 40ಸಾವಿರ ಮಂದಿಗೆ ಸ್ವ ಉದ್ಯೋಗಕ್ಕೆ ಅವಕಾಶ ಕಲ್ಪಿಸಬಹುದಾಗಿದೆ. ವಾರ್ಷಿಕ 1500 ಕೋಟಿ ವರೆಗೂ ವಹಿವಾಟು ನಡೆಸಬಹುದಾಗಿದೆ ಎಂದು ಅವರು ತಿಳಿಸಿದರು.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ನಿರ್ದೇಶನದಂತೆ ಪ್ರತಿ ದಿನ ಒಬ್ಬೊಬ್ಬ ಸಚಿವರು ಕಚೇರಿಗೆ ಬಂದು ಕಾರ್ಯಕರ್ತರು ಹಾಗೂ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ, ಅವರ ಸಮಸ್ಯೆ ಪರಿಹಾರಕ್ಕೆ ಆದ್ಯತೆ ನೀಡಲಾಗುತ್ತದೆ ಎಂದು ಶ್ರೀನಿವಾಸ್ ಹೇಳಿದರು.
ಜೆಡಿಎಸ್ ನೂತನ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರನ್ನು ಇದೇ ಸಂದರ್ಭದಲ್ಲಿ ಅವರು ಅಭಿನಂದಿಸಿದರು.