ಮಾಜಿ ಸಚಿವ ತಿಪ್ಪೇಸ್ವಾಮಿ ನಿಧನ- ಗಣ್ಯರ ಸಂತಾಪ:

 

ಬೆಂಗಳೂರು, ಆ.8- ಬಹು ಅಂಗಾಂಗ ವೈಫಲ್ಯದಿಂದಾಗಿ ಬಳಲುತ್ತಿದ್ದ ಮಾಜಿ ಸಚಿವ ತಿಪ್ಪೇಸ್ವಾಮಿ ಅವರು ಇಂದು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು.
ಒಂದು ವಾರದಿಂದ ನಗರದ ಕೊಲಂಬಿಯಾ ಏಷ್ಯಾ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಬೆಳಗಿನ ಜಾವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ.
ಮೃತರ ಪಾರ್ಥಿವ ಶರೀರರ ಅಂತಿಮ ದರ್ಶನಕ್ಕೆ ಚಿತ್ರದುರ್ಗದ ಜಿಲ್ಲೆಯ ಚಳ್ಳಕೆರೆಯಲ್ಲಿ ವ್ಯವಸ್ಥೆ ಕಲ್ಪಿಸಿದ್ದು, ಇಂದು ಸಂಜೆ ಸ್ವಗ್ರಾಮವಾದ ಕಾಳಪ್ಪನಹಟ್ಟಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ತಿಪ್ಪೇಸ್ವಾಮಿಯವರು ಮೂಲತಃ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ಕಾಳಪ್ಪನಹಟ್ಟಿಯ ಗ್ರಾಮದವರಾಗಿದ್ದು, ತಮ್ಮ ರಾಜಕೀಯ ಜೀವನವನ್ನು ಜೆಡಿಎಸ್ ನೊಂದಿಗೆ ಪ್ರಾರಂಭಿಸಿದ್ದರು. ಇವರು ಮೂರು ಬಾರಿ ಚಳ್ಳಕೆರೆ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಗೊಂಡಿದ್ದರು. ಅಲ್ಲದೇ ದೇವೇಗೌಡರ ಸಚಿವ ಸಂಪುಟದಲ್ಲಿ ಅಬಕಾರಿ ಸಚಿವರಾಗಿ ಹಾಗೂ ಜೆ.ಎಚ್.ಪಟೇಲ್ ಸರ್ಕಾರದಲ್ಲಿ ಸಣ್ಣ ನೀರಾವರಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.
ಜೆಡಿಎಸ್ ತೊರೆದು ಬಿಜೆಪಿ ಸೇರಿಕೊಂಡಿದ್ದ ತಿಪ್ಪೇಸ್ವಾಮಿಯವರು ಯಡಿಯೂರಪ್ಪನವರ ವಲಯದಲ್ಲಿ ಗುರುತಿಸಿಕೊಂಡಿದ್ದರು. ವಾಲ್ಮೀಕಿ ಸಮುದಾಯದ ಹಿರಿಯ ಮುಖಂಡರಾಗಿದ್ದ ಅವರು ವಾಲ್ಮೀಕಿ ಗುರುಪೀಠ ಸ್ಥಾಪನೆಯಲ್ಲಿ ಮಹತ್ತರ ಪಾತ್ರ ವಹಿಸಿದ್ದರು. ರಾಜ್ಯ ಸರ್ಕಾರದ ವಾಲ್ಮೀಕಿ ಪುರಸ್ಕಾರಕ್ಕೂ ಭಾಜನರಾಗಿದ್ದರು.
ಗಣ್ಯರ ಸಂತಾಪ:
ತಿಪ್ಪೇಸ್ವಾಮಿಯವರ ನಿಧನಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಎಚ್.ಡಿ.ಕುಮರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ತಿಪ್ಪೇಸ್ವಾಮಿಯವರ ನಿಧನ ಸುದ್ದಿ ಕೇಳಿ ಮನಸಿಗೆ ಬಹಳ ನೋವಾಯಿತು. ನನ್ನ ಹಾಗೂ ಜೆ.ಎಚ್.ಪಟೇಲ್ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿ ಉತ್ತಮ ಕಾರ್ಯನಿರ್ವಹಿಸಿದ್ದರು. ಇಂದು ನಾವು ಜನತಾ ಪರಿವಾರದ ಹಿರಿಯ ನಾಯಕರೊಬ್ಬರನ್ನು ಕಳೆದುಕೊಂಡಿದ್ದೇವೆ ಎಂದು ಎಚ್.ಡಿ.ದೇವೇಗೌಡ ಅವರು ಸಂತಾಪ ಸೂಚಿಸಿದ್ದಾರೆ.
ಹಿಂದುಳಿದ ವರ್ಗದ ನಾಯಕರಾಗಿದ್ದ ತಿಪ್ಪೇಸ್ವಾಮಿಯವರು ಸರಳ ಜೀವಿಯಾಗಿದ್ದರು. ದೇವೇಗೌಡರು ಮುಖ್ಯಮಂತ್ರಿಯಾಗಿದ್ದಾಗ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಅವರ ನಿಧನ ತೀವ್ರ ನೋವು ಉಂಟು ಮಾಡಿದೆ ಎಂದು ಶೋಕ ಸಂದೇಶದಲ್ಲಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಹಿರಿಯ ರಾಜಕೀಯ ಮುಖಂಡ ಹಾಗೂ ನಾಯಕ ಸಮಾಜದ ಪ್ರಭಾವಿ ಮುಖಂಡರಾಗಿದ್ದ ತಿಪ್ಪೇಸ್ವಾಮಿ ಅವರು ಜನತಾ ಪರಿವಾರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿದ್ದರು, ಮಾತ್ರವಲ್ಲ ಎರಡು ಬಾರಿ ಮಂತ್ರಿಯಾಗಿ ಶೋಷಿತರ ಧ್ವನಿಯಾಗಿ ಕೆಲಸ ಮಾಡಿದ್ದರು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ಭರವಂತ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಬಿ.ಎಸ್.ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ