ರಾಜ್ಯದಿಂದ ಕೇರಳಕ್ಕೆ 10ಕೋಟಿ ರೂ. ಮೌಲ್ಯದ ಪರಿಹಾರ ನೆರವು

ಬೆಂಗಳೂರು, ಆ.10- ಕೇರಳದಲ್ಲಿ ಭಾರೀ ಮಳೆಯಿಂದ ತೀವ್ರ ಸ್ವರೂಪದ ಪ್ರವಾಹ ಉಂಟಾಗಿದ್ದು, 10ಕೋಟಿ ರೂ. ಮೌಲ್ಯದ ಪರಿಹಾರ ಸಾಮಗ್ರಿಯನ್ನು ರಾಜ್ಯ ಸರ್ಕಾರ ಕಳುಹಿಸಿಕೊಟ್ಟಿದೆ.
ಭಾರೀ ಮಳೆಯಿಂದ ಉಂಟಾದ ಪ್ರವಾಹದಲ್ಲಿ ಸುಮಾರು 22 ಮಂದಿ ಮೃತಪಟ್ಟಿರುವ ಬಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಷಾದ ವ್ಯಕ್ತಪಡಿಸಿದ್ದು, ಪರಿಹಾರ ಸಾಮಗ್ರಿ ಹಾಗೂ ವೈದ್ಯರ ತಂಡವನ್ನು ಕೇರಳಕ್ಕೆ ಕಳುಹಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರಿಗೆ ನಿರ್ದೇಶನ ನೀಡಿದ್ದಾರೆ.
ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ಎಲ್ಲಾ ರೀತಿಯ ನೆರವನ್ನು ಕೇರಳ ಸರ್ಕಾರಕ್ಕೆ ನೀಡಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ಕಬಿನಿ ಹಿನ್ನೀರಿನಿಂದ ಪ್ರವಾಹ ಸಮಸ್ಯೆ ಉಲ್ಬಣಗೊಳ್ಳುತ್ತಿರುವ ಬಗ್ಗೆ ಕೇರಳ ಸರ್ಕಾರ ಮಾಡಿದ ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರ ಕಬಿನಿ ಜಲಾಶಯದಿಂದ ಕಪಿಲಾ ನದಿಗೆ 75ಸಾವಿರ ಕ್ಯೂಸೆಕ್ ನೀರನ್ನು ಬಿಡಲಾಗುತ್ತಿದೆ.
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ಪ್ರವಾಹ ಪರಿಸ್ಥಿತಿ ಬಗ್ಗೆ ಮುಖ್ಯಮಂತ್ರಿ ಮಾತುಕತೆ ನಡೆಸಿದ್ದು, ಅಗತ್ಯವಿರುವ ಎಲ್ಲಾ ನೆರವು ನೀಡುವ ಭರವಸೆಯನ್ನು ಎಚ್.ಡಿ.ಕುಮಾರಸ್ವಾಮಿ ನೀಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ