ಬೆಂಗಳೂರು, ಆ.11- ನಗರ ಸ್ಥಳೀಯ ಸಂಸ್ಥೆ ಚುನಾವಣೆ ಹೊಣೆಗಾರಿಕೆಯನ್ನು ಶಾಸಕರು ಹಾಗೂ ಸಚಿವರಿಗೆ ನೀಡಲು ಜೆಡಿಎಸ್ ತೀರ್ಮಾನಿಸಿದೆ.
ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ ಚುನಾವಣೆಗಳಿಗೆ ಸಂಬಂಧಿಸಿದಂತೆ ಶಾಸಕರು ಮತ್ತು ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡುವ ಅಧಿಕಾರವನ್ನು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ನೀಡಲಾಗಿದೆ. ನಿನ್ನೆ ಸಂಜೆ ಪಕ್ಷದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಶಾಸಕರು ತಮ್ಮ ತಮ್ಮ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಜವಾಬ್ದಾರಿ ಹೊರಬೇಕು. ಹೆಚ್ಚು ಅಭ್ಯರ್ಥಿಗಳನ್ನು ಗೆಲ್ಲಿಸಲು ಬೇಕಾದ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗುವವರಿಗೆ ಎರಡರಿಂದ ಮೂರು ಜಿಲ್ಲೆಗಳ ಜವಾಬ್ದಾರಿ ನೀಡಲು ಉದ್ದೇಶಿಸಿದ್ದು, ಯಾರಿಗೆ ಯಾವ ಜಿಲ್ಲೆ ಎಂಬುದನ್ನು ಗೌಡರು ತೀರ್ಮಾನಿಸಿ ಹಂಚಿಕೆ ಮಾಡಲಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿರುವ ಅಭ್ಯರ್ಥಿಗಳು, ಜಿಲ್ಲಾಧ್ಯಕ್ಷರು ಸ್ಥಳೀಯವಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಾಗಿದೆ. ಅಭ್ಯರ್ಥಿಗಳ ಆಯ್ಕೆಯನ್ನು ರಾಜ್ಯಮಟ್ಟದ ನಾಯಕರೊಬ್ಬರು ವೀಕ್ಷಕರಾಗಿ ಉಸ್ತುವಾರಿ ಮಾಡಲಿದ್ದಾರೆ.
ರಾಜ್ಯ ಸಮಿತಿಗೆ ಜಿಲ್ಲಾ ಸಮಿತಿಗಳು ಸಂಭವನೀಯ ಅಭ್ಯರ್ಥಿಗಳ ಪಟ್ಟಿಯನ್ನು ಕಳುಹಿಸಲಿದ್ದು, ಆನಂತರ ಪಕ್ಷದ ವರಿಷ್ಠರು ಅಭ್ಯರ್ಥಿಗಳ ಆಯ್ಕೆಗೆ ಅಂತಿಮ ಮುದ್ರೆ ಒತ್ತಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವಿದ್ದರೂ ಏಕಾಂಗಿಯಾಗಿ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಎದುರಿಸಲು ತೀರ್ಮಾನಿಸಲಾಗಿದೆ. ಇದರಿಂದ ಸರ್ಕಾರಕ್ಕೆ ಮುಜುಗರವಾಗದಂತೆ ಕಾಂಗ್ರೆಸ್ ಪಕ್ಷವನ್ನು ಟೀಕೆ ಮಾಡುವಾಗ ಎಚ್ಚರಿಕೆ ವಹಿಸುವಂತೆ ಎಲ್ಲಾ ಅಭ್ಯರ್ಥಿ ಹಾಗೂ ಮುಖಂಡರು ಸೂಚನೆ ನೀಡಲಾಗುತ್ತದೆ.
ನಿನ್ನೆ ನಡೆದ ಸಭೆಗೆ ಬಹಳಷ್ಟು ಮುಖಂಡರು ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಸೋಮವಾರ ಮತ್ತೊಮ್ಮೆ ಸಭೆ ನಡೆಸಿ ಚುನಾವಣೆ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.