ಬೆಂಗಳೂರು:ಆ-೧೨: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬೀದರ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆಯೇ….? ಇಂತದ್ದೊಂದು ಕುತೂಹಲ ರಾಜ್ಯ ರಾಜಕೀಯದಲ್ಲಿ ಕೇಳಿ ಬರುತ್ತಿದೆ.
ರಾಹುಲ್ ಗಾಂಧಿ ಅವರನ್ನು ಕಣಕ್ಕಿಳಿಸಲು ರಾಜ್ಯ ಕಾಂಗ್ರೆಸ್ ನಾಯಕರು ಆಲೋಚನೆ ನಡೆಸಿದ್ದಾರೆ ಎನ್ನಲಾಗಿದೆ. ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ನಿಧನರಾದ ಬಳಿಕ ಬೀದರ್ ಕ್ಷೇತ್ರಕ್ಕೆ ಅವರ ಪುತ್ರ ವಿಜಯ್ ಸಿಂಗ್ ಹೆಸರು ಕೇಳಿಬಂದಿತ್ತು. ಆದರೆ, ಈಗ ರಾಹುಲ್ ಗಾಂಧಿ ಅವರನ್ನೇ ಎರಡನೇ ಕ್ಷೇತ್ರವಾಗಿ ಕಣಕ್ಕಿಳಿಸಲು ದಿನೇಶ್ ಗುಂಡೂರಾವ್ ಹಾಗೂ ಕೆಲ ನಾಯಕರು ಯೋಚಿಸಿದ್ದಾರೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಾಲ್ಕು ಸ್ಥಾನ ಗೆದ್ದಿರುವ ಕಾಂಗ್ರೆಸ್ ತನ್ನ ಬಲ ಹೆಚ್ಚಿಸಿಕೊಂಡಿದೆ. ಅಲ್ಲದೆ, ರಾಹುಲ್ ಅವರನ್ನು ಇಲ್ಲಿಂದ ಕಣಕ್ಕಿಳಿಸಿದರೆ ಉತ್ತರ ಕರ್ನಾಟಕದ ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು ಬಳ್ಳಾರಿ, ಕೊಪ್ಪಳ ಕ್ಷೇತ್ರಗಳಲ್ಲಿ ಕಾಂಗ್ರೆಸ್ಗೆ ಅನುಕೂಲವಾಗುವ ಸಾಧ್ಯತೆ ಇದೆ ಎಂಬುದು ಕೈ ನಾಯಕರ ಲೆಕ್ಕಾಚಾರ.
ಈ ಬಗ್ಗೆ ರಾಹುಲ್ ಜೊತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಮಾತು ಕತೆ ನಡೆಸಿದ್ದಾರೆ ಎನ್ನಲಾಗಿದೆ. ನಾಳೆ ಬೀದರ್ನಲ್ಲಿ ಆಯೋಜಿಸಿರುವ ಜನದನಿ ಸಮಾವೇಶದ ಮೂಲಕ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಅಧಿಕೃತ ಚಾಲನೆ ನೀಡುವ ಮೂಲಕ ರಾಹುಲ್ ಗಾಂಧಿ ತಮ್ಮ ಸ್ಪರ್ಧೆ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.
Lok sabha election,Rahul gandhi,Bidar,Congress