ಬೆಂಗಳೂರು, ಆ.12-ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಕಾವು ರಂಗೇರತೊಡಗಿವೆ. ರಾಜಕೀಯ ಪಕ್ಷಗಳ ಚಟುವಟಿಕೆಗಳು ಬಿರುಸುಗೊಂಡಿವೆ. ಚುನಾವಣೆಗೆ ನಾಮಪತ್ರಗಳು ಸಲ್ಲಿಕೆಯಾಗತೊಡಗಿವೆ. ಅಭ್ಯರ್ಥಿಗಳು ಮತ ಬೇಟೆಯಲ್ಲಿ ತೊಡಗಿದ್ದಾರೆ. ಆಡಳಿತಾರೂಢ ಕಾಂಗ್ರೆಸ್-ಜೆಡಿಎಸ್ ನಡುವೆ ಮೈತ್ರಿ ಕೈಗೂಡಿಲ್ಲ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಎರಡೂ ಪಕ್ಷಗಳು ಕಾದಾಟಕ್ಕಿಳಿದಿವೆ.
ಈ ನಡುವೆ ಬಿಜೆಪಿ ಅಬ್ಬರದ ಪ್ರಚಾರದಲ್ಲಿ ತೊಡಗಿದೆ. ಕಾಂಗ್ರೆಸ್-ಜೆಡಿಎಸ್-ಬಿಜೆಪಿ ಮೂರೂ ಪಕ್ಷಗಳಿಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ರಾಜಕೀಯ ಪಕ್ಷಗಳ ಮುಖಂಡರು ಕಾಲಿಗೆ ಚಕ್ರ ಕಟ್ಟಿಕೊಂಡು ತಿರುಗುತ್ತಿದ್ದಾರೆ.
ಮೈತ್ರಿ ಹೊಣೆಯನ್ನು ಕಾಂಗ್ರೆಸ್-ಜೆಡಿಎಸ್ ಮುಖಂಡರು ಸ್ಥಳೀಯ ನಾಯಕರ ಹೆಗಲಿಗೆ ಹಾಕಿದ್ದಾರೆ. ವಿಧಾನಸೌಧದಲ್ಲಿ ದೋಸ್ತಿ ನಡೆಸುತ್ತಿರುವ ಎರಡೂ ಪಕ್ಷಗಳು ನಗರಸಭೆ, ಪುರಸಭೆ, ಮಹಾನಗರ ಪಾಲಿಕೆಗಳಲ್ಲಿ ಕುಸ್ತಿ ಆರಂಭಿಸಿದ್ದಾರೆ. 105 ನಗರ ಸ್ಥಳೀಯ ಸಂಸ್ಥೆಗಳು ಮೈಸೂರು, ಶಿವಮೊಗ್ಗ, ತುಮಕೂರು ಮೂರು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಗಳಿಗೆ ಸೆಣಸಾಟ ಆರಂಭವಾಗಿದ್ದು, ಎರಡು ದಿನಗಳಿಂದ ನಾಮಪತ್ರ ಸಲ್ಲಿಕೆಯಾಗತೊಡಗಿದೆ.
ವಿವಿಧ ಪಕ್ಷಗಳಿಂದ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಪಕ್ಷೇತರ ಅಭ್ಯರ್ಥಿಗಳು ಕೂಡ ನಾಮಪತ್ರ ಸಲ್ಲಿಸುತ್ತಿದ್ದಾರೆ. 29 ರಂದು ಚುನಾವಣೆ ನಡೆಯಲಿದ್ದು, ಮುಂಬರುವ ಲೋಕಸಭೆ ಚುನಾವಣೆಗೆ ಈ ಚುನಾವಣೆ ಫಲಿತಾಂಶ ಪಕ್ಷಗಳ ಸಾಮಥ್ರ್ಯವನ್ನು ಓರೆಗೆ ಹಚ್ಚಲಿದೆ. ಹಾಗಾಗಿ ಎಲ್ಲಾ ಪಕ್ಷಗಳವರು ತಮ್ಮ ತಮ್ಮ ಅಭ್ಯರ್ಥಿಗಳ ಗೆಲುವಿಗೆ ಅಹರ್ನಿಶಿ ಶ್ರಮಿಸುತ್ತಿದ್ದಾರೆ.
ಕಾಂಗ್ರೆಸ್ ಪಕ್ಷ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಈಗಾಗಲೇ ಎರಡು ಸುತ್ತಿನ ಸಭೆಗಳನ್ನು ನಡೆಸಿದೆ. ಕೆಲವೆಡೆ ಅಭ್ಯರ್ಥಿಗಳ ಆಯ್ಕೆಯನ್ನು ಅಂತಿಮಗೊಳಿಸಿ ಬಿ ಫಾರಂ ಕೂಡ ನೀಡಿದೆ. ಬಿಜೆಪಿ ಕೂಡ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದೆ.
ಜೆಡಿಎಸ್ ಪಕ್ಷ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಮುಂದಾಗಿದೆ. ಒಟ್ಟಾರೆ ವಿಧಾನಸಭೆ, ಲೋಕಸಭೆ ಚುನಾವಣೆಯನ್ನು ಮೀರಿಸುವಂತೆ ನಗರ ಸ್ಥಳೀಯ ಸಂಸ್ಥೆ ಚುನಾವಣೆ ನಡೆಯುವ ಸಾಧ್ಯತೆ ಇದೆ. ಈಗಾಗಲೇ ವಿವಿಧ ರಾಜಕೀಯ ಪಕ್ಷಗಳವರು ತಮ್ಮ ಅಭ್ಯರ್ಥಿಗಳ ಪರ ಮತ ಪಡೆಯಲು ಸಂಘ ಸಂಸ್ಥೆಗಳು, ಸ್ತ್ರೀಶಕ್ತಿ ಸಂಘಗಳ ಮುಖಂಡರು, ಸ್ವಯಂ ಸೇವಾ ಸಂಘಗಳು ಮುಂತಾದವರ ಜೊತೆ ಚರ್ಚೆ ನಡೆಸಿದ್ದಾರೆ. ಕಳೆದ ಬಾರಿ ಕಡಿಮೆ ಅಂತರದಲ್ಲಿ ಸೋತವರು, ಜನರೊಂದಿಗೆ ಸಂಪರ್ಕದಲ್ಲಿದ್ದವರು, ಚುನಾವಣಾ ಅಖಾಡಕ್ಕಿಳಿದಿದ್ದಾರೆ. ಒಟ್ಟಾರೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಕಣ ರಂಗೇರತೊಡಗಿದೆ.