ಬಸವಣ್ಣನ ನಾಡು ಬೀದರ್ ನಿಂದ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ರಣಕಹಳೆ

 

ಬೆಂಗಳೂರು, ಆ.12- ಬಸವಣ್ಣನ ನಾಡು ಬೀದರ್‍ನಲ್ಲಿ ನಾಳೆ ಕಾಂಗ್ರೆಸ್‍ನ ಲೋಕಸಭಾ ಚುನಾವಣೆಯ ರಣಕಹಳೆ ಮೊಳಗಲಿದೆ. ಮುಂಬರುವ ಲೋಕಸಭಾ ಚುನಾವಣೆ ಕಾಂಗ್ರೆಸ್ ಪಾಲಿಗೆ ಮಾಡು ಇಲ್ಲವೇ ಮಡಿ ಪರಿಸ್ಥಿತಿಯಾಗಿರುವ ಹಿನ್ನೆಲೆಯಲ್ಲಿ ಚುನಾವಣೆಗೆ 8 ತಿಂಗಳ ಮುಂಚೆಯೇ ಕಾಂಗ್ರೆಸ್ ಚುನಾವಣಾ ಪ್ರಚಾರ ಕಣಕ್ಕೆ ಧುಮುಕಿದೆ.

ಬೀದರ್‍ನ ನೆಹರೂ ಕ್ರೀಡಾಂಗಣದಲ್ಲಿ ಕೆಪಿಸಿಸಿ ಆಯೋಜಿಸಿರುವ ಜನಧ್ವನಿ ಕಾರ್ಯಕ್ರಮಕ್ಕೆ ನಾಳೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ಚಾಲನೆ ನೀಡುವ ಮೂಲಕ ಚುನಾವಣೆಯ ರಣಘೋಷ ಮೊಳಗಿಸಲಿದ್ದಾರೆ. ಸುಮಾರು 2 ಲಕ್ಷ ಕಾರ್ಯಕರ್ತರನ್ನು ಸೇರಿಸುವ ಮೂಲಕ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ. ಉತ್ತರ ಕರ್ನಾಟಕದಲ್ಲಿ ಪಕ್ಷದ ಶಕ್ತಿಯನ್ನು ವೃದ್ಧಿಸಿಕೊಂಡರೆ ಹೆಚ್ಚಿನ ಲೋಕಸಭಾ ಸ್ಥಾನಗಳನ್ನು ಪಡೆಯಬಹುದು ಎಂಬ ಹಿನ್ನೆಲೆಯಲ್ಲಿ ಬೀದರ್ ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡಿದ್ದು, ಅಲ್ಲಿಂದ ಪ್ರಚಾರವನ್ನು ಪ್ರಾರಂಭಿಸಲಿದೆ.

ಸಚಿವ ಸಂಪುಟ ಮತ್ತು ಪಕ್ಷದಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂಬ ಕೂಗು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಈಶ್ವರ್ ಖಂಡ್ರೆ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ಹೈಕಮಾಂಡ್ ನೇಮಕ ಮಾಡಿತ್ತು. ಅಲ್ಲದೆ ಸಂಪುಟ ವಿಸ್ತರಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಉತ್ತರ ಕರ್ನಾಟಕದವರಿಗೆ ನೀಡಲು ನಿರ್ಧರಿಸಲಾಗಿದೆ. ಅದರಲ್ಲೂ ವಿಶೇಷವಾಗಿ ಪ್ರಬಲ ಲಿಂಗಾಯತ ಸಮುದಾಯದವರಿಗೆ ಹೆಚ್ಚಿನ ಆದ್ಯತೆ ನೀಡಲು ಹೈಕಮಾಂಡ್ ನಿರ್ಧರಿಸಿದೆ. ಬೀದರ್ ಕ್ಷೇತ್ರವನ್ನು ಈ ಹಿಂದೆ ಧರಂ ಸಿಂಗ್ ಹಲವು ವರ್ಷಗಳ ಕಾಲ ಪ್ರತಿನಿಧಿಸಿದ್ದರು. ಅವರ ನಿಧನದ ಬಳಿಕ ಕ್ಷೇತ್ರ ಬಿಜೆಪಿ ತೆಕ್ಕೆಗೆ ಹೋಗಿದೆ. ಆದ್ದರಿಂದ ಈ ಕ್ಷೇತ್ರವನ್ನು ಮತ್ತೆ ಪಡೆಯುವ ಮೂಲಕ ಉತ್ತರ ಕರ್ನಾಟಕದಲ್ಲಿ ಪಕ್ಷದ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು ಎಂಬ ಉದ್ದೇಶದ ಜನಧ್ವನಿಯ ಹಿಂದಿದೆ.
ಸಮಾವೇಶದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಪಕ್ಷದ ಘಟಾನುಘಟಿ ನಾಯಕರ ದಂಡು ಬೀದರ್‍ಗೆ ಆಗಮಿಸಿದ್ದು, ಎಲ್ಲಾ ಸಿದ್ಧತೆಗಳನ್ನು ನಡೆಸಲಾಗಿದೆ. ನಾಳೆಯ ಸಮಾವೇಶದಲ್ಲಿ ಪಕ್ಷದ ಎಲ್ಲಾ ನಾಯಕರು ಒಗ್ಗಟ್ಟು ಪ್ರದರ್ಶಿಸುವ ಸಾಧ್ಯತೆ ಇದೆ. ಸಚಿವ ಸಂಪುಟದಲ್ಲಿ ಸ್ಥಾನ ಸಿಕ್ಕಿಲ್ಲ ಎಂದು ಮುನಿಸಿಕೊಂಡಿರುವ ನಾಯಕರು ಕೂಡ ಸಮಾವೇಶದಲ್ಲಿ ಪಾಲ್ಗೊಂಡು ರಾಹುಲ್ ಎದುರು ನಾವೆಲ್ಲಾ ಒಟ್ಟಾಗಿದ್ದೇವೆ ಎಂಬ ಸಂದೇಶ ರವಾನಿಸಲು ನಿರ್ಧರಿಸಿದ್ದಾರೆ.

ಬೀದರ್ ಕ್ಷೇತ್ರದಿಂದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಕಣಕ್ಕಿಳಿಸಲು ರಾಜ್ಯ ಕಾಂಗ್ರೆಸ್ ನಾಯಕರು ಚಿಂತಿಸುತ್ತಿದ್ದಾರೆ. ಒಂದು ವೇಳೆ ರಾಹುಲ್ ಗಾಂಧಿಯವರು ಸ್ಪರ್ಧಿಸಲು ಒಪ್ಪಿಗೆ ನೀಡಿದರೆ ಎರಡನೇ ಕ್ಷೇತ್ರವಾಗಿ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಇದೆ.
ರಾಹುಲ್ ಗಾಂಧಿಯವರನ್ನು ಬೀದರ್‍ನಲ್ಲಿ ಕಣಕ್ಕಿಳಿಸಿದರೆ ಉತ್ತರ ಕರ್ನಾಟಕದ ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬಳ್ಳಾರಿ, ಕೊಪ್ಪಳ ಕ್ಷೇತ್ರಗಳ್ಲಿ ಕಾಂಗ್ರೆಸ್‍ಗೆ ಅನುಕೂಲವಾಗಬಹುದು ಎಂಬ ಉದ್ದೇಶ ಇದರ ಹಿಂದಿದೆ. ನಾಳೆ ನಡೆಯುವ ಈ ಸಮಾವೇಶದಲ್ಲಿ ರಾಹುಲ್ ಗಾಂಧಿ ಈ ಬಗ್ಗೆ ಪರೋಕ್ಷ ಸೂಚನೆ ನೀಡುವ ಸಾಧ್ಯತೆ ಇದೆ. ಆದ್ದರಿಂದ ರಾಹುಲ್ ಅವರ ನಾಳೆಯ ಭಾಷಣ ಹೆಚ್ಚು ಕುತೂಹಲಕಾರಿಯಾಗಿದೆ.
ಈ ಮಧ್ಯೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಉತ್ತರ ಕರ್ನಾಟಕದಲ್ಲಿ ಈಗಾಗಲೇ ಪ್ರವಾಸ ಆರಂಭಿಸಿ ಮತದಾರರನ್ನು ಸೆಳೆಯಲು ಮುಂದಾಗಿದ್ದಾರೆ. ತಮ್ಮ ಪ್ರವಾಸಕ್ಕೂ ಕಾಂಗ್ರೆಸ್‍ನ ಸಮಾವೇಶಕ್ಕೂ ಯಾವುದೇ ಸಂಬಂಧವಿಲ್ಲ. ರಾಹುಲ್ ಆಗಮಸುತ್ತಿರುವುದರಿಂದ ನಾನು ಪ್ರವಾಸ ಕೈಗೊಂಡಿಲ್ಲ ಎಂದು ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದರೂ ಅವರ ಪ್ರವಾಸದ ಹಿಂದೆ ಕಾಂಗ್ರೆಸ್‍ನ ಸಮಾವೇಶಕ್ಕೆ ಸಡ್ಡು ಹೊಡೆಯುವ ತಂತ್ರ ಅಡಗಿದೆ ಎನ್ನಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ